ಶಿವಮೊಗ್ಗ

ಶಾದಿ ಭಾಗ್ಯ ಎಲ್ಲಾ ವರ್ಗಕ್ಕೂ ವಿಸ್ತರಿಸಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ನ.7 ಶಾದಿ ಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ವರ್ಗದವರಿಗೂ ವಿಸ್ತರಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾ ಸದಸ್ಯರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಕೂಡಲೇ ಶಾದಿ ಭಾಗ್ಯ ಯೋಜನೆಯನ್ನು ವಿಸ್ತರಿಸದೇ ಹೋದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಎಸ್. ಶೋಭಾ, ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ. ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರ ಅನುಕೂಲ ಮಾಡಿಕೊಡಲು ಹೊರಟಿರುವುದು ಜನರಿಗೆ ಮಾಡಿರುವ ದ್ರೋಹ ಎಂದು ಟೀಕಿಸಿದರು.
ಎಲ್ಲಾ ವರ್ಗಕ್ಕೂ ವಿಸ್ತರಿಸಲಿ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ಜಾರಿಗೆ ತಂದಿರುವ ಶಾದಿ ಭಾಗ್ಯ ಯೋಜನೆಯನ್ನು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಸ್ವಾಗತಿಸುತ್ತದೆ. ನಮ್ಮ ರಾಜ್ಯದಲ್ಲಿ ಎಲ್ಲಾ ರೀತಿಯ ಜಾತಿ- ಪಂಗಡಗಳ ಹೆಣ್ಣು ಮಕ್ಕಳು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರನ್ನೂ ರಾಜ್ಯ ಸರ್ಕಾರ ಪರಿಗಣನೆಗೆ ತೆಗೆದುಕೊಂಡು ಪ್ರತಿ ಜನಾಂಗದ ಹೆಣ್ಣು ಮಕ್ಕಳಿಗೂ ಶಾದಿ ಭಾಗ್ಯ ಯೋಜನೆ ವಿಸ್ತರಿಸಬೇಕು ಎಂದು ಅವರು ಆಗ್ರಹಿಸಿದರು.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಂದಿರುವ ಎಲ್ಲಾ ಯೋಜನೆಗಳು ಯಾವುದೇ ಸಮುದಾಯಕ್ಕೂ ತಾರತಮ್ಯ ಮಾಡದೇ ಪ್ರತಿಯೊಬ್ಬರಿಗೂ ದೊರಕುವಂತೆ ಮಾಡಿದೆ. ಆದರೆ, ಸಿಎಂ ಸಿದ್ದರಾಮಯ್ಯನವರು ಕೇವಲ ಓಲೈಕೆ ಉದ್ದೇಶದಿಂದ ಶಾದಿ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ, ಈ ನಿರ್ಧಾರ ಖಂಡಿತಾ ಒಪ್ಪಲು ಸಾಧ್ಯವಿಲ್ಲ ಎಂದು ಶೋಭಾ ಹೇಳಿದರು. ಶಾದಿಭಾಗ್ಯ ಯೋಜನೆಯನ್ನು ಪ್ರತಿ ಜನಾಂಗದವರಿಗೂ ವಿಸ್ತರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾಡಳಿತದ ಪರವಾಗಿ ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಮನವಿ ಸ್ವೀಕರಿಸಿದರು. ಮಹಿಳಾ ಮೋರ್ಚಾ ಮುಖಂಡರಾದ ವಿದ್ಯಾ ಲಕ್ಷ್ಮಿಪತಿ, ಸುನಿತಾ ಎಸ್. ನಂಬಿಯಾರ್, ಎನ್.ಪದ್ಮಿನಿ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
11 ರಂದು ಕೆಜೆಪಿ ಧರಣಿ
ಸಾಗರ: ಶಾದಿಭಾಗ್ಯ ಯೋಜನೆಯನ್ನು ಎಲ್ಲ ಜಾತಿ, ವರ್ಗ, ಧರ್ಮದ ಹೆಣ್ಣುಮಕ್ಕಳಿಗೆ ವಿಸ್ತರಿಸುವಂತೆ ಒತ್ತಾಯಿಸಿ ನ. 11 ರಂದು ಸಾಗರದ ಗಾಂಧಿ ಮೈದಾನದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೆಜೆಪಿ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.  ರಾಜ್ಯದ ಕಾಂಗ್ರೆಸ್ ಸರ್ಕಾರ ಒಂದು ವರ್ಗದವರನ್ನು ಓಲೈಸಲು ಇಂಥ ಯೋಜನೆಯನ್ನು ಜಾರಿಗೆ ತರಲು ಮುಂದಾಗಿರುವುದು ಖಂಡನೀಯ. ಯೋಜನೆಯ ಲಾಭ ಎಲ್ಲ ವರ್ಗದ ಹೆಣ್ಣುಮಕ್ಕಳಿಗೆ ದೊರಕಬೇಕು ಎನ್ನುವ ಕಾರಣಕ್ಕಾಗಿ ಕೆಜೆಪಿ ದೂರದೃಷ್ಟಿಯ ಹೋರಾಟವನ್ನು ಹಮ್ಮಿಕೊಂಡಿದೆ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿ.ಮಹೇಶ್, ಕೆ.ಆರ್.ಗಣೇಶಪ್ರಸಾದ್, ವಾದಿರಾಜ್, ಪ್ರತಾಪ್, ಪ್ರಕಾಶ್ಕುಂಠೆ, ರಾಮಣ್ಣ, ನಾಗರಾಜ್ ಇನ್ನಿತರರು ಹಾಜರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.