ಶಿವಮೊಗ್ಗ

ಸಾರಿಗೆ ಇಲಾಖೆ ಅಧಿಕಾರಿ ನೇಮಕಕ್ಕೆ ಆಗ್ರಹ

Published On :

ಕ.ಪ್ರ. ವಾರ್ತೆ  ಶಿವಮೊಗ್ಗ  ನ.8
ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಗೆ ಕೂಡಲೇ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳನ್ನು ನೇಮಕ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಆರ್‌ಟಿಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗ- ಭದ್ರಾವತಿ ಹಾಗೂ ತೀರ್ಥಹಳ್ಳಿ ಮೂರು ತಾಲೂಕುಗಳು ಸಾರಿಗೆ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳಿಗೆ ಶಿವಮೊಗ್ಗದಲ್ಲಿರುವ ಕಚೇರಿಯನ್ನೆ ಅವಲಂಬಿಸಬೇಕು. ಇದೀಗ ಸಾರಿಗೆ ಅಧಿಕಾರಿಗಳು ಇಲ್ಲದ ಕಾರಣ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
 ದಿನಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಇದೆ. ತಾಲೂಕುಗಳಿಂದ ಬಂದ ಸಾರ್ವಜನಿಕರು ದಿನಗಟ್ಟಲೇ ಕಾಯುತ್ತಿದ್ದರೂ ಕೆಲಸಗಳು ಆಗುತ್ತಿಲ್ಲ. ಈ ರೀತಿಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ವೇದಿಕೆ ಹಲವು ಬಾರಿ ಜಿಲ್ಲಾಡಳಿತಕ್ಕೆ, ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗದ ಕಚೇರಿಯಲ್ಲಿ ಸಾರಿಗೆ ಅಧಿಕಾರಿಗಳು ಇಲ್ಲದಿರುವುದರಿಂದ ಸಾಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಾರದಲ್ಲಿ ಎರಡು ದಿನಗಳು ಬಂದು ಹೋಗುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ. ಇದರಿಂದ ಇಲಾಖೆ ಕೆಲಸಗಳು ಸರಿಯಾದ ಸಮಯಕ್ಕೆ ನಡೆಯುತ್ತಿಲ್ಲ. ಹಾಗಾಗಿ ಸಾರಿಗೆ ಅಧಿಕಾರಿಗಳನ್ನು ನೇಮಕ ಮಾಡಬೇಕು. ಸಾರಿಗೆ ಇಲಾಖೆಗೆ ಸಂಬಂಧಿಸಿದ ಕೆಲಸಗಳನ್ನು ಕೂಡಲೇ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜ್ಯ ಸರ್ಕಾರ ಇನ್ನು 15 ದಿನಗಳಲ್ಲಿ ಜಿಲ್ಲಾ ಕೇಂದ್ರಕ್ಕೆ ಸಾರಿಗೆ ಅಧಿಕಾರಿಗಳನ್ನು ನೇಮಕ ಮಾಡಬೇಕು. ಇಲ್ಲವಾದಲ್ಲಿ ಸಾರಿಗೆ ಕಚೇರಿಗೆ ಬೀಗ ಜಡಿದು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಜಿಲ್ಲಾಧ್ಯಕ್ಷ ನಾಗಕಿರಣ ಶೆಟ್ಟಿ, ಉಪಾಧ್ಯಕ್ಷ ರಾಘವೇಂದ್ರ ಹೆಬ್ಬಾರ್, ವೆಂಕಟೇಶ ಗೌಡ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸೈಯದ್ ಮಜೀಬ್, ಶಿವಕುಮಾರ್, ನಾಗಭೂಷಣ ಕೆ. ಶೆಟ್ಟಿ, ಸುಮಾ ವಾಸುದೇವ್, ಯಶೋಧ, ಆರ್. ಶಾರದಾ, ಶಕುಂತಲಾ, ಲಕ್ಷ್ಮೀ, ನೇತ್ರಾವತಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.