ಶಿವಮೊಗ್ಗ

3 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ

Published On :

ಕ.ಪ್ರ.ವಾರ್ತೆ ,  ಸಾಗರ ,   ನ.9
ಇಲ್ಲಿನ ಶಾಂತವೇರಿ ಗೋಪಾಲಗೌಡ ಕ್ರೀಡಾಂಗಣಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರು, ಕ್ರೀಡಾಂಗಣದ ಪಕ್ಕದಲ್ಲಿ 3 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.
ಕ್ರೀಡಾಂಗಣದ ಅಭಿವೃದ್ಧಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಕಾಗೋಡು, ಕ್ರೀಡಾಂಗಣದ ಸುತ್ತಲೂ ವಾಕಿಂಗ್ ಪಾಥ್ ನಿರ್ಮಾಣ, ಶೌಚಾಲಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕ್ರೀಡಾಂಗಣವನ್ನು ತಾಲೂಕು ಆಡಳಿತದಿಂದ ನಗರಸಭೆಗೆ ಉಸ್ತುವಾರಿ ವಹಿಸಲು ತೀರ್ಮಾನಿಸಲಾಗಿದೆ ಎಂದರು.
ಸಿಎಂ ಜತೆ ಚರ್ಚಿಸಲಿ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಮುತ್ಸದ್ಧಿ ಎನಿಸಿರುವ ಯಡಿಯೂರಪ್ಪನವರು ಶಾದಿಭಾಗ್ಯ ಯೋಜನೆ ಎಲ್ಲ ವರ್ಗದವರಿಗೂ ವಿಸ್ತರಿಸುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಧರಣಿ ನಡೆಸುತ್ತೇವೆ ಎಂದು ನೀಡಿರುವ ಹೇಳಿಕೆಯನ್ನು ಪುನರ್ ಪರಿಶೀಲಿಸುವುದು ಒಳ್ಳೆಯದು. ಧರಣಿ ನಡೆಸುವುದಕ್ಕಿಂತ ವಿಷಯ ಕುರಿತು ಪೂರ್ವಭಾವಿಯಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಿಕೊಂಡು, ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಾದಿಭಾಗ್ಯ ಯೋಜನೆ ವಿಷಯದಲ್ಲಿ ರಾಜಕೀಯ ಮಾಡಬಾರದು. ಸದ್ಯಕ್ಕೆ ಸರ್ಕಾರ ಅಲ್ಪಸಂಖ್ಯಾತ ಇಲಾಖೆ ನೀಡಿರುವ ಯೋಜನೆಗೆ ಅನ್ವಯವಾಗಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ , ಸಿಖ್, ಬೌದ್ಧ ಜನಾಂಗದವರಿಗೆ ಶಾದಿಭಾಗ್ಯ ಯೋಜನೆ ಕಲ್ಪಿಸಿದೆ. ಇತರೆ ಇಲಾಖೆಗಳು ಬೇರೆ ಬೇರೆ ಜನಾಂಗಕ್ಕೆ ಸಂಬಂಧಪಟ್ಟಂತೆ ಯೋಜನೆ ರೂಪಿಸಿ ಮುಖ್ಯಮಂತ್ರಿಗಳಿಗೆ ನೀಡಿದರೆ ಅಂತಹ ಜನಾಂಗಗಳಿಗೂ ಶಾದಿಭಾಗ್ಯ ಯೋಜನೆ ವಿಸ್ತರಿಸಬಹುದು ಎಂದರು.
ಸಹಮತ ಅಗತ್ಯ: ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕಾಗೋಡು, ಕಾಯ್ದೆಯೊಂದು ಜಾರಿಗೆ ತರಬೇಕಾದರೆ ಎಲ್ಲರ ಸಹಮತ ಅಗತ್ಯ. ಅತಿಮುಖ್ಯವಾಗಿ ಜನಮತ ಇಲ್ಲದೆ ಹೋದರೆ ಕಾಯ್ದೆ ಅನುಷ್ಠಾನಕ್ಕೆ ಬರುವುದಿಲ್ಲ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿರುವುದು ಆ ಭಾಗದ ಅಭಿವೃದ್ಧಿಗೆ ಪೂರಕವಾಗುತ್ತದೆ. ಅಧಿವೇಶನದಲ್ಲಿ ನಡೆಯುವ ಚರ್ಚೆಗಳು ಉಪಯುಕ್ತವಾಗಿರಬೇಕು. ಪ್ರತಿಯೊಂದು ವಿಷಯವೂ ಈ ಭಾಗದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಅಧಿವೇಶನದಲ್ಲಿ ಹೆಚ್ಚಿನ ಗಮನ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.