ಕನ್ನಡ ಅಭಿವೃದ್ಧಿಗೆ ಕೇಂದ್ರದಿಂದ ತಾರತಮ್ಯ: ಆರೋಪ
ಕ.ಪ್ರ.ವಾರ್ತೆ, ಶಿಕಾರಿಪುರ, ನ.14 ಕೇಂದ್ರ ಸರ್ಕಾರ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಘೋಷಿಸಿದ್ದರೂ, ಇಂದಿಗೂ ಭಾಷೆಯ ಅಭಿವೃದ್ಧಿ, ಬೆಳವಣಿಗೆಗೆ ಪೂರಕವಾಗಿ ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಪ್ರೋತ್ಸಾಹ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಂಸದ ರಾಘವೇಂದ್ರ ವಿಷಾದ ವ್ಯಕ್ತಪಡಿಸಿದರು.
ಗುರುವಾರ ಪಟ್ಟಣದ ಕುಮದ್ವತಿ ರೆಸಿಡೆನ್ಶಿಯಲ್ ಸೆಂಟ್ರಲ್ ಸ್ಕೂಲ್ನಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಚಿಗುರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅವಿರತ ಶ್ರಮ: ಅತ್ಯಂತ ಪುರಾತನ ಕನ್ನಡ ಭಾಷೆ ಅಭಿವೃದ್ಧಿಗಾಗಿ ಶಾಸ್ತ್ರೀಯ ಭಾಷೆ ಸ್ಥಾನಮಾನ ಪಡೆದುಕೊಳ್ಳುವಲ್ಲಿ ಅವಿರತ ಹೋರಾಟ ವಹಿಸಿದ್ದು, ಯಡಿಯೂರಪ್ಪನವರ ರಾಜ್ಯ ಸರ್ಕಾರದ ನಿರಂತರ ಒತ್ತಡ ಪ್ರಯತ್ನದಿಂದಾಗಿ ಶಾಸ್ತ್ರೀಯ ಭಾಷೆ ಸ್ಥಾನಮಾನವನ್ನು ಕೇಂದ್ರ ಘೋಷಿಸಿತ್ತು.
ಆದರೆ ಘೋಷಿಸಿ ಹಲವು ದಿನಗಳಾದರೂ ಇಂದಿಗೂ ಭಾಷೆ ಅಭಿವೃದ್ಧಿ ಬೆಳವಣಿಗೆಗೆ ಪೂರಕವಾಗಿ ಕೇಂದ್ರ ಯಾವುದೇ ರೀತಿಯಲ್ಲಿ ಪ್ರೋತ್ಸಾಹ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿದರು.
ಶಿವಮೊಗ್ಗ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಜಿ. ಗೋಪಾಲಕೃಷ್ಣ ಕೊಳ್ತಾಯ ಕಾರ್ಯಕ್ರಮ ಉದ್ಘಾಟಿಸಿ, ಬಾಲ್ಯದಿಂದಲೇ ಮಕ್ಕಳಿಗೆ ನೀತಿ ಕಥೆಗಳ ಮೂಲಕ ಮಾನವೀಯ ಮೌಲ್ಯದ ಶಿಕ್ಷಣ ಅತ್ಯಗತ್ಯವಾಗಿದ್ದು, ವಿದ್ಯಾರ್ಥಿಗಳಲ್ಲಿ ಬುದ್ಧಿಶಕ್ತಿ ಹೆಚ್ಚಾಗಿ ಭಾವನಾತ್ಮಕ ಬೆಳವಣಿಗೆ ಕುಂಠಿತವಾಗುತ್ತಿದೆ ಎಂದರು.
ಕುವೆಂಪು ವಿ.ವಿ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ಎಸ್.ಎಸ್. ಪಾಟೀಲ್ ಮಾತನಾಡಿದರು. ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಅಂಗಸಂಸ್ಥೆಯ ಪ್ರತಿಬಾನ್ವಿತ ವಿದ್ಯಾರ್ಥಿ ಅಕ್ಷತಾ ಕಾರಂತ್, ಸುಶ್ಮಿತಾ, ಮನೋಜ್, ಸಾತ್ವಿಕ್ ಮೊದಲಾದವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ 7 ಶಾಲೆಗಳ 194 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾಸಂಸ್ಥೆಯ ನಿರ್ದೇಶಕಿ ತೇಜಸ್ವಿನಿ ರಾಘವೇಂದ್ರ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಉಪಸ್ಥಿತರಿದ್ದರು. ಹನುಮಪ್ಪ ಸ್ವಾಗತಿಸಿದರು. ಶ್ರೀನಿವಾಸ್ ನಿರೂಪಿಸಿದರು. ಗೀತಾ ಬಣಕಾರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

