27ರಿಂದ ತೀರ್ಥಹಳ್ಳಿ, ಹೊಸನಗರ ತಾಲೂಕಲ್ಲಿ ಆರೋಗ್ಯ ಶಿಬಿರ
ಶಿವಮೊಗ್ಗ: ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನ ದೂರ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ನ.27ರಿಂದ 2014ರ ಫೆಬ್ರುವರಿ ವರೆಗೆ ವಿವಿಧ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ.ಎನ್. ಶಿವಣ್ಣರೆಡ್ಡಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ಆಹಾರ ಸಂಸ್ಕೃತಿಯಿಂದಾಗಿ ಜನರು ವಿವಿಧ ರೋಗಗಳಿಂದ ಬಾಧಿತರಾಗುತ್ತಿದ್ದಾರೆ. ಪ್ರಮುಖವಾಗಿ ನರರೋಗ ಹಾಗೂ ಮೂಳೆ ಸವೆತ, ಮಧುಮೇಹ, ರಕ್ತಹೀನತೆ, ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ದೂರ ಮತ್ತು ಅತಿ ಹಿಂದುಳಿತ ಪ್ರದೇಶಗಳಲ್ಲಿ ಉಚಿತವಾಗಿ ಆರೋಗ್ಯ ಶಿಕ್ಷಣ ಮತ್ತು ತಜ್ಞರ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಹೊಸನಗರ ತಾಲೂಕಿನಲ್ಲಿ ನ.27ರಂದು ಕಟ್ಟಿನಹೊಳೆ ಉಪ ಕೇಂದ್ರದಲ್ಲಿ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ, ಡಿ.13ರಂದು ಮತ್ತಿಕೈ, ಜನವರಿ 17 ಕುಂಬ್ರಿಬೈಲು ಹಾಗೂ ಫೆಬ್ರುವರಿ 19ರಂದು ಹೊಲಗಾರು ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ನಡೆಯಲಿವೆ. ಅಂತೆಯೇ ತೀರ್ಥಹಳ್ಳಿ ತಾಲೂಕಿನಲ್ಲಿ ನವೆಂಬರ್ 16 ಹಾಗೂ 19ರಂದು ನಾಲೂರು ಗ್ರಾಮದಲ್ಲಿ ಆರೋಗ್ಯ ಶಿಕ್ಷಣ ಮತ್ತು ಆರೋಗ್ಯ ತಪಾಸಣಾ ಶಿಬಿರಗಳು ನಡೆಯಲಿವೆ ಎಂದು ತಿಳಿಸಿದರು.
ಪೌಷ್ಟಿಕ ಆಹಾರ, ಸಾಂಕ್ರಾಮಿಕ ರೋಗಗಳು ಹಾಗೂ ಅಸಾಂಕ್ರಾಮಿಕ ರೋಗಗಳ ಬಗ್ಗೆ ಆರೋಗ್ಯ ಶಿಕ್ಷಣ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ನೀಡಲಾಗುವುದು.
ಆರೋಗ್ಯ ಶಿಬಿರದಲ್ಲಿ ದಂತ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಚರ್ಮ, ಲೈಂಗಿಕ ವಿಭಾಗ, ಸ್ತ್ರೀರೋಗ ಹಾಗೂ ಪ್ರಸೂತಿ ವಿಭಾಗ, ಪಿಜಿಶಿಯನ್, ಆಯುರ್ವೇದ ವಿಭಾಗದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ನಡೆಸಲಾಗುವುದು. ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದ್ದವರಿಗೆ ಅವರನ್ನು ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲಾಗುವುದು ಹಾಗೂ ಎಲ್ಲ ರೋಗಗಳಿಗೂ ಚಿಕಿತ್ಸೆ ಹಾಗೂ ಔಷಧ ವಿತರಣೆ ಮಾಡಲಾಗುವುದು ಎಂದರು.
ಶಿಬಿರಗಳಲ್ಲಿ ಸಹ್ಯಾದ್ರಿ ನಾರಾಯಣ ಹೃದಯಾಲಯ, ಶಿವಮೊಗ್ಗ ವೈದ್ಯಕೀಯ ಶಿಕ್ಷಣ ಕಾಲೇಜು, ಮಣಿಪಾಲ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕನ್ನಡಕ ವಿತರಣೆ: ಕಳೆದ ಸಾಲಿನಲ್ಲಿ ದೂರ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ನಡೆದ ಆರೋಗ್ಯ ಶಿಬಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಈ ಶಿಬಿರಗಳಲ್ಲಿ ಭಾಗವಹಿಸಿದವರಿಗೆ ಚಿಕಿತ್ಸೆಗಳನ್ನು ನೀಡಲಾಗಿದೆ ಹಾಗೂ ಕನ್ನಡಕ, ಕಿವುಡು ನಿವಾರಕ ಯಂತ್ರಗಳನ್ನು ನೀಡಲಾಗಿದೆ ಎಂದರು.
ಡೆಕ್ಸಾ ಸ್ಕ್ಯಾನಿಂಗ್ ಸೆಂಟರ್ ವೈದ್ಯರಾದ ಡಾ. ಹರೀಶ್ ಪೈ, ಡಾ. ಗಿರೀಶ್ ಕುಮಾರ್ ಮೊಳೆ ಸಾಂಧ್ರತೆ ತೊಂದರೆಯ ಬಗ್ಗೆ ಮಾಹಿತಿ ನೀಡಿದರು. ಡಾ. ರಮೇಶ್ ಗೋಷ್ಠಿಯಲ್ಲಿದ್ದರು.
ಈ ಸಂದರ್ಭದಲ್ಲಿ ಡೆಕ್ಸಾ ಸ್ಯಾನಿಂಗ್ ಸೆಂಟರ್ ಪ್ರತಿನಿದಿ ಅರವಿಂದ್ ಅವರು, ತಮ್ಮ ಕೇಂದ್ರದಲ್ಲಿ ಅತ್ಯಂತ ಕಡಿಮೆ ದರದಲ್ಲಿ ಮೂಳೆ ಸಾಂದ್ರತೆ ಪರೀಕ್ಷೆ ನಡೆಸುತ್ತಿದ್ದು, ಆಸಕ್ತರು ಸಂಪರ್ಕಿಸುವಂತೆ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ತೀರ್ಥಹಳ್ಳಿ ತಾಲೂಕು ವೈದ್ಯಾಧಿಕಾರಿ ಡಾ. ಕೆ.ಎಸ್. ಪ್ರಕಾಶ್, ಹೊಸನಗರ ತಾಲೂಕು ವೈದ್ಯಾಧಿಕಾರಿ ಡಾ. ಸಿ. ಪ್ರಕಾಶ್, ಡೆಕ್ಸಾ ಮೂಳೆ ಸಾಂಧ್ರತೆ ಪರಿಶೀಲನೆ ಕೇಂದ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

