ಶಿವಮೊಗ್ಗ

ಹೈಕೋರ್ಟ್‌ನಲ್ಲಿ ಕನ್ನಡ ಬಳಕೆಗೆ ಅವಕಾಶ ಸಿಗಲಿ

Published On :

ಶಿವಮೊಗ್ಗ ಹೈಕೋರ್ಟ್‌ನಲ್ಲಿ ಕನ್ನಡ ಬಳಕೆ ಮಾಡುವಂತೆ ಖಾಸಗಿ ನಿರ್ಣಯವನ್ನು ಈ ಹಿಂದಿನ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿದ್ದು, ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಸಿಕ್ಕಿದೆ. ಈ ನಿರ್ಣಯಕ್ಕೆ ಕನ್ನಡಪರ ಸಂಘ- ಸಂಸ್ಥೆಗಳು ಬೆಂಬಲಿಸಬೇಕು. ಈ ನಿರ್ಣಯ ಜಾರಿಯಾದರೆ ಹೈಕೋರ್ಟ್‌ನಲ್ಲಿಯೂ ಕನ್ನಡ ಬಳಕೆಗೆ ಅವಕಾಶ ಸಿಗಲಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಕೆಳಹಂತದ ನ್ಯಾಯಾಲಯಗಳಲ್ಲಿ ಕನ್ನಡ ಬಳಕೆಗೆ ಯಾವುದೇ ಅಡ್ಡಿ ಇಲ್ಲ. ರಾಜ್ಯದ ಆಡಳಿತ ಭಾಷೆಯಾದ ಕನ್ನಡವನ್ನು ಉಚ್ಚ ನ್ಯಾಯಾಲಯದಲ್ಲಿಯೂ ಬಳಸಬಹುದು. ಆದರೆ, ಇದಕ್ಕೆ ರಾಷ್ಟ್ರಪತಿಗಳ ಅನುಮತಿ ಪಡೆದು ರಾಜ್ಯಪಾಲರು ಒಪ್ಪಿಗೆ ನೀಡಬೇಕು. ಈ ದಿಸೆಯಲ್ಲಿ ಸರ್ಕಾರವು ರಾಜ್ಯಪಾಲರ ಒಪ್ಪಿಗೆ ಪಡೆಯಬೇಕಾಗಿದೆ. ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸುವಂತೆ ಒತ್ತಾಯಿಸಿದ್ದೇನೆ ಎಂದು ಹೇಳಿದರು.
ಬೆಂಬಲ ಅಗತ್ಯ: ಸಂವಿಧಾನದ 348 (2) ವಿಧಿ ಅನ್ವಯ ಕ್ರಮ ಕೈಗೊಳ್ಳಬಹುದು. ತಮ್ಮ ಈ ನಿರ್ಣಯಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಕುಮಾರ್ ಅವರೂ ಬೆಂಬಲಿಸಿ ಮಾತನಾಡಿದ್ದು ನನ್ನ ಅಳುಕನ್ನು ದೂರ ಮಾಡಿದೆ. ಈ ದಿಕ್ಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಂಘಟನೆಗಳು ಬೆಂಬಲಿಸಬೇಕು. ಈ ಬಗ್ಗೆ ಜನಾಭಿಪ್ರಾಯ ಮೂಡುವಂತೆ ಮಾಡಬೇಕು ಎಂದರು.
ತುಂಗಾ ನಾಲೆ ಆಧುನೀಕರಣ ಕಾಮಗಾರಿ ಕಳೆದ ನಾಲ್ಕೈದು ವರ್ಷದಿಂದ ನೆನೆಗುದಿಗೆ ಬಿದ್ದಿದೆ. ಈ ಕೆಲಸ ಶೀಘ್ರದಲ್ಲಿ ಆರಂಭವಾಗಬೇಕಿದೆ. ಈ ಬಗ್ಗೆ ಸರ್ಕಾರಕ್ಕೆ ಒತ್ತಾಯಿಸಲಿದ್ದೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ದತ್ತಾತ್ರಿ, ಬಿ.ಆರ್. ಮಧುಸೂದನ್, ಅಣ್ಣಪ್ಪ ಇದ್ದರು.
ಪಕ್ಷಾತೀತ ಹೋರಾಟ
ಶಿವಮೊಗ್ಗ: ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಪಕ್ಷಾತೀತ ಹೋರಾಟ ನಡೆಯಲಿದ್ದು, ಕೇಂದ್ರ ಉಕ್ಕು ಪ್ರಾಧಿಕಾರ ಮತ್ತು ಉಕ್ಕು ಸಚಿವರು ಸದ್ಯ ಖಾಸಗಿ ಸಹಭಾಗಿತ್ವ ಕೈಬಿಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.
ಈ ದಿಸೆಯಲ್ಲಿ ಪಕ್ಷಾತೀತ ಹೋರಾಟ ನಡೆಯುತ್ತಿದೆ. ಜಿಲ್ಲೆಯ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರು ನೇತೃತ್ವ ವಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್, ಭದ್ರಾವತಿ ಶಾಸಕ ಅಪ್ಪಾಜಿ ಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು ಭಾಗವಹಿಸಿದ್ದರು. ಇವರೆಲ್ಲರಿಗೂ ಕೃಜ್ಞತೆ ಸಲ್ಲಿಸುತ್ತೇನೆ ಎಂದರು. ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಈ ದಿಸೆಯಲ್ಲಿ ಭೇಟಿಯಾಗಿ ಚರ್ಚಿಸಿದೆವು. ಅವರೂ ಬೆಂಬಲಿಸಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.