ಶಿವಮೊಗ್ಗ

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ನ. 27
ಕಬ್ಬಿನ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತನೊಬ್ಬರು ಬೆಳಗಾವಿಯ ಸುವರ್ಣ ಸೌಧದ ಎದುರು ಆತ್ಮಹತ್ಯೆ ಮಾಡಿಕೊಂಡು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬುಧವಾರ ಸಂಜೆ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಗೋಪಿ ವೃತ್ತದಲ್ಲಿ ಒಂದೆಡೆ ಜಮಾವಣೆಗೊಂಡ ರೈತರು, ರೈತರ ಬಗ್ಗೆ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಕೃಷ್ಣ ಬೈರೆಗೌಡ ಹಾಗೂ ಸಕ್ಕರೆ ಸಚಿವ ಪ್ರಕಾಶ್ ಹುಕ್ಕೆರಿ ವಿರುದ್ಧ ಘೋಷಣೆ ಕೂಗಿದರು.
ರೈತರು ಬೆಳೆದ ಕಬ್ಬು, ಬತ್ತ ಸೇರಿದಂತೆ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಬೇಕೆಂದು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸುತ್ತಿದರೂ, ಸರ್ಕಾರ ಗಮನಹರಿಸದೆ ರೈತನ ಆತ್ಮಹತ್ಯೆಗೆ ಕಾರಣವಾಗಿದೆ. ಸರ್ಕಾರ ಮುಂಜಾಗ್ರತೆ ವಹಿಸಿ ಕ್ರಮ ಕೈಗೊಂಡಿದ್ದರೆ ಆ ರೈತನ ಪ್ರಾಣ ಉಳಿಸಬಹುದಿತ್ತು. ಈ ಮೂಲಕ ರಾಜ್ಯದಲ್ಲಿ ರೈತರನ್ನು ಕಡೆಗಣಿಸುತ್ತಿದೆ. ಆದರಿಂದ ಸರ್ಕಾರ ರೈತ ವಿರೋಧಿ ನೀತಿ ಕೈಬಿಟ್ಟು, ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು. ಕಬ್ಬಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ವಹಿಸಿದ್ದರು. ಮತ್ತಿತರರು ಇದ್ದರು.


ಸಕ್ಕರೆ ಸಚಿವರ ರಾಜಿನಾಮೆಗೆ ಆಗ್ರಹ
ಶಿವಮೊಗ್ಗ: ಸುವರ್ಣ ವಿಧಾನಸೌಧದೆದುರು ಪ್ರತಿಭಟನೆ ನಡೆಸುತ್ತಿದ್ದ ರೈತ ವಿಠಲನ ಆತ್ಮಹತ್ಯೆ ಜವಾಬ್ದಾರಿಯನ್ನು ಹೊತ್ತು ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಕ್ಕರೆ ಖಾತೆ ಸಚಿವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.
ಬುಧವಾರ ಸಂಜೆ ದಿಢೀರ್ ಪತ್ರಿಕಾಗೋಷ್ಠಿ ನಡೆಸಿದ ಅವರು, ರೈತರ ಬಗ್ಗೆ ಸರ್ಕಾರದ ಅಸಡ್ಡೆ ಖಂಡಿಸಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಬಿಜೆಪಿ ರೈತಮೋರ್ಚಾ ಕಾರ್ಯಕರ್ತರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.
ಅಲ್ಲದೇ ತಾವೂ ಸಹ ಬೆಳಗಾವಿ ಜಿಲ್ಲೆ ರಾಯಭಾಗದಲ್ಲಿರುವ ರೈತ ವಿಠಲ ಅವರ ಮನೆಗೆ ಭೇಟಿ ನೀಡುವುದಾಗಿ ಹೇಳಿದರು.
ರೈತರ ಬೇಡಿಕೆ ಈಡೇರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವ ರೀತಿಯ ಒತ್ತಡವಿದೆಯೋ ತಿಳಿಯುತ್ತಿಲ್ಲ ಎಂದರು.
ಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಮುಖಂಡರಾದ ಎಚ್.ಸಿ. ಬಸವರಾಜಪ್ಪ, ಮಹೇಂದ್ರನಾಥ್, ರತ್ನಾಕರ ಶೆಣೈ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.