ಮುಖ್ಯಮಂತ್ರಿ ರಾಜಿನಾಮೆಗೆ ಬಿಜೆಪಿ ಒತ್ತಾಯ
ಶಿವಮೊಗ್ಗ: ಕಬ್ಬಿಗೆ ಹೆಚ್ಚಿನ ಬೆಂಬಲ ನೀಡಲು ಹಿಂದೇಟು ಹಾಕುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರೈತಮೋರ್ಚಾ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಗೋಪಿವೃತ್ತದಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾಂನ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತ ವಿಠಲ್ ಹಾರೋಬಾವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ವಾಧಿಕಾರಿ ಧೋರಣೆಯೇ ಕಾರಣ ಎಂದು ಆರೋಪಿಸಿದ ಬಿಜೆಪಿ ಮುಖಂಡರು, ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡಬೇಕೆಂದು ಆಗ್ರಹಿಸಿದರು.
ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸುವ ಜೊತೆಗೆ ಕೆಲ ಕಾಲ ರಸ್ತೆ ತಡೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರ ಈ ಕೂಡಲೇ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಹಾಗೂ ಮೃತ ರೈತಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಮಾತನಾಡಿ, ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ರೈತನ ಆತ್ಮಹತ್ಯೆ ನಡೆದಿರುವುದು ಅಕ್ಷಮ್ಯ. ಕಾಂಗ್ರೆಸ್ಸ್ರ್ಕಾರದ ರೈತ ವಿರೋಧಿ ಧೋರಣೆ ಇದಕ್ಕೆ ಸಾಕ್ಷಿ ಎಂದರು.
ಹಿಂದಿನ ಬಿಜೆಪಿ ಸರ್ಕಾರ ರೈತಪರವಾಗಿತ್ತು. ರೈತರ ಸಾಲ ಮನ್ನಾ, ಬಡ್ಡಿ ರಹಿತ ಸಾಲದಂತಹ ಹಲವಾರು ಜನಪ್ರಿಯ ರೈತ ಪರ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗಿತ್ತು ಎಂದ ಅವರು, ಕಾಂಗ್ರೆಸ್ ಸರ್ಕಾರ ಕೇವಲ ರೈತ ವಿರೋಧಿ ಮಾತ್ರವಲ್ಲದೇ ಜನ ವಿರೋಧಿಯಾಗಿದೆ ಎಂದರು ಟೀಕಿಸಿದರು.
ರೈತ ವಿರೋಧಿ ಸರ್ಕಾರ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಸವರಾಜಪ್ಪ ಮಾತನಾಡಿ, ಗುಂಡೂರಾವ್ ಮುಖ್ಯಮಂತ್ರಿಯಾಗಿದ್ದ ವೇಳೆ ಇದೇ ರೀತಿ ವಿರೋಧಿ ಧೋರಣೆ ತೋರಿದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು. ಇದೀಗ ಮತ್ತೆ ಕಾಂಗ್ರೆಸ್ ರೈತ ವಿರೋಧಿ ನೀತಿ ಅನುಸರಿಸುವ ಮೂಲಕ ಅಧಿಕಾರ ಕಳೆದುಕೊಳ್ಳಲಿದೆ ಎಂದರು.
ರೈತ ಮುಖಂಡ ಮಹೇಂದ್ರಪ್ಪ ಮಾತನಾಡಿ, ಅನಾವಶ್ಯಕ ಯೋಜನೆಗಳನ್ನು ಪ್ರಕಟಿಸಿ ಸಮಾಜ ಒಡೆಯುವ ಕೆಲಸ ಮುಖ್ಯಮಂತ್ರಿ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ರೈತನ ಸಮಸ್ಯೆ ಬಗ್ಗೆ ಗಮನಹರಿಸಲಿಲ್ಲ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ನಿಕಟಪೂರ್ವ ಅಧ್ಯಕ್ಷ ಚನ್ನಬಸಪ್ಪ, ನಗರಸಭಾ ಸದಸ್ಯರಾದ ಸುನಿತಾ ಅಣ್ಣಪ್ಪ, ರೇಣುಕಾ ನಾಗರಾಜ್, ಭವಾನಿರಾವ್, ಮಧುಸೂಧನ್, ಎಂ.ಶಂಕರ್, ಸುಭಾಶ್, ಜ್ಞಾನೇಶ್ವರ್ ಮತ್ತಿತರರು ಭಾಗವಹಿಸಿದ್ದರು.
ಮೃತ ರೈತ ಕುಟುಂಬಕ್ಕೆ ಪರಿಹಾರ ನೀಡಿ
ಶಿವಮೊಗ್ಗ: ಕಬ್ಬಿಗೆ ಬೆಂಬಲ ಬೆಲೆ ಹಾಗೂ ಮೃತ ರೈತ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಒಂದೆಡೆ ರೈತ ಬೆಳೆದ ಕಬ್ಬಿಗೆ ಬೆಂಬಲ ಬೆಲೆ ಇಲ್ಲದೆ ಹಾಗೂ ತಾನು ಸಕ್ಕರೆ ಕಾರ್ಖಾನೆಗೆ ನೀಡಿದ ಕಬ್ಬಿಗೆ ಕಾರ್ಖಾನೆ ಮಾಲೀಕರು ಹಣ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ.
ಇತ್ತ ಬೆಳಗಾವಿಯಲ್ಲಿ ರೈತರು ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಪ್ರತಿಭಟನೆ ನಡೆಸುವ ವೇಳೆಯಲ್ಲಿಯೇ ರೈತ ವಿಠಲ್ ಹಾಲಭಾವಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸರ್ಕಾರ ಧೋರಣೆ ಸರಿಯಲ್ಲ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಶಿವಪ್ಪನಾಯಕ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ರೈತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರಲ್ಲದೇ, ಸರ್ಕಾರ ರೈತರ ವಿಚಾರದಲ್ಲಿ ಮೃದುಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಈ ಕೂಡಲೆ ಸರ್ಕಾರ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿದರು.
ರೈತ ಸಂಘದ ಮುಖಂಡರಾದ ಕೆ.ಟಿ. ಗಂಗಾಧರ್, ಉಮಾಪತಿ, ಯಶವಂತ್ ಮತ್ತಿತರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

