ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ
ಕ.ಪ್ರ.ವಾರ್ತೆ, ಶಿವಮೊಗ್ಗ, ಸೆ.2
ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರಬಹುದಾದ ಯಾವುದೇ ರೀತಿಯ ಅವಘಡಗಳು ಅಥವಾ ಗಂಭಿರವಾದ ಪ್ರಕರಣಗಳನ್ನು ಗುರುತಿಸಲಾಗಿಲ್ಲ. ಇದಕ್ಕೆ ಎಲ್ಲಾ ನಾಗರಿಕರ ಸಹಕಾರ ಪ್ರಮುಖವಾಗಿದೆ. ಮುಂದಿನ ದಿನಗಳಲ್ಲಿಯೂ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್ ಮನವಿ ಮಾಡಿದರು.
ಸೋಮವಾರ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಪಂ ಸಂಯುಕ್ತಾಶ್ರಯದಲ್ಲಿ ನಗರದ ಡಿಎಆರ್ ಸಭಾಂಗಣದಲ್ಲಿ ಗೌರಿ-ಗಣೇಶೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಧರ್ಮಗಳ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಹಬ್ಬಗಳು ಶಾಂತಿಯುತವಾಗಿ ನಡೆಯಲು ಎಲ್ಲ ಧರ್ಮಗಳ ಹಾಗೂ ಸಂಘ-ಸಂಸ್ಥೆಗಳ ಮುಖಂಡರು ಸಹಕರಿಸುವಂತೆ ಮನವಿ ಮಾಡಿದರು.
ಗಣಪತಿ ಪ್ರತಿಷ್ಠಾಪನೆ: ಗಣಪತಿ ಪ್ರತಿಷ್ಠಾಪನಾ ಸಮಿತಿಗಳ ಮುಖಂಡರು ನಿಯಮಾನುಸಾರ ಧ್ವನಿವರ್ಧಕ ಪರವಾನಿಗೆ, ವಿದ್ಯುತ್ ಪರವಾನಿಗೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆಯ ಪರವಾನಿಗೆ ಪಡೆದು, ಗಣಪತಿ ಪ್ರತಿಷ್ಠಾಪಿಸಬೇಕು.
ಇದಕ್ಕೂ ಮುನ್ನ ಪೊಲೀಸ್ ಇಲಾಖೆಯು ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಗಣಪತಿ ಪ್ರತಿಷ್ಠಾಪನೆಯ ಸ್ಥಳ ಮತ್ತು ಸಮಯ, ನಡೆಸುವ ವಿವಿಧ ಕಾರ್ಯಕ್ರಮಗಳ ವಿವರ, ವಿಗ್ರಹ ವಿಸರ್ಜನಾ ದಿನಾಂಕ ಮತ್ತು ಮೆರವಣಿಗೆ ನಡೆಯುವ ಮಾರ್ಗ, ಸಮಿತಿಯ ಪದಾಧಿಕಾರಿಗಳ ವಿವರ ಇವುಗಳ ಬಗ್ಗೆ ವಿವರವಾದ ಮಾಹಿತಿ ನೀಡುವುದು ರಕ್ಷಣಾಕಾರ್ಯ ಕೈಗೊಳ್ಳಲು ಸಹಾಯಕವಾಗಲಿದೆ ಎಂದರು.
ಸಲಹೆ-ಸೂಚನೆ: ಈ ನಿಯಮಗಳನ್ನು ಹಬ್ಬ ಆಚರಿಸಲು ಇರುವ ನಿರ್ಬಂಧ ಎಂದು ಭಾವಿಸಬಾರದು. ತೀವ್ರ ತರಹರಹದ ನಿರ್ಬಂಧ ವಿಧಿಸುವುದೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟರು. ಗಣೇಶೊತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳ ಆಯ್ದ ಸ್ಥಳಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗುವುದು.
ಸಾರ್ವಜನಿಕರು ಹಬ್ಬಕ್ಕೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳು ಅಥವಾ ಸಲಹೆ-ಸೂಚನೆಗಳನ್ನು ಸಹಾಯವಾಣಿ ಕೇಂದ್ರಗಳಿಗೆ ಅಥವಾ ಪೊಲೀಸ್ ಕಂಟ್ರೋಲ್ ರೂಂಗೆ ಕರೆಮಾಡಿ ತಿಳಿಸುವಂತೆ ಅವರು ಸೂಚಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿಫುಲ್ ಬನ್ಸಲ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಡಿ.ವೈ.ಎಸ್.ಪಿ, ಮತ್ತು ತಹಸೀಲ್ದಾರ್ರವರು ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಶಾಂತಿಪಾಲನಾ ಸಮಿತಿ ಸಭೆಗಳನ್ನು ನಡೆಸಲಾಗುವುದು ಎಂದರು.
ಪ್ರಸಕ್ತ ಸಾಲಿನಲ್ಲಿಯೂ ಹಿಂದಿನ ಸಾಲಿನಲ್ಲಿ ನಡೆದ ಘಟನಾವಳಿಗಳನ್ನು ಅವಲೋಕಿಸಿ, ಯಾವುದೇ ಅವಘಡಗಳು ನಡೆಯದಂತೆ ಗಣೇಶೋತ್ಸವ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದ ಅವರು ಕೆಲವೇ ಕಿಡಿಗೇಡಿಗಳ ವಿಕೃತ ಮನಸ್ಥಿತಿಯಿಂದಾಗಿ ಅಹಿತಕರ ಘಟನೆಗಳು ಸಂಭವಿಸುತ್ತವೆ. ಅಂತಹ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರೂ ಎಚ್ಚರಿಕೆ ವಹಿಸಬೇಕೆಂದರು.
ಸಭೆಯಲ್ಲಿ ಹಾಜರಿದ್ದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಅರ್ಥಪೂರ್ಣವಾದ ಇಲ್ಲಿನ ಧರ್ಮ ಸಂಸ್ಕೃತಿಯನ್ನು ಸಾರುವ ಎಲ್ಲಾ ಧರ್ಮಗಳ ಧಾರ್ಮಿಕ ಕಾರ್ಯಕ್ರಮಗಳು
ಶಾಂತಿಯುತವಾಗಿ ಅದ್ಧೂರಿಯಾಗಿ ನಡೆಯುವಂತಾಗಬೇಕು ಎಂದ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಜಿಪಂ ವ್ಯಾಪ್ತಿಯ ಎಲ್ಲಾ ಹಂತದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಬಿ. ದಯಾಳು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಹಿಂದೂ-ಮುಸ್ಲಿಂ ಮುಖಂಡರು, ಸಮಾಜ ಸೇವಾ ಸಂಘಟನೆಗಳ ಪ್ರಮುಖರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

