ಮುಖ್ಯಮಂತ್ರಿಗೆ ಮನವಿಗಳ ಮಹಾಪೂರ
ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ವಿವಿಧ ಸಂಘಟನೆಗಳು ಬೇಡಿಕೆ ಈಡೇರಿಸುವಂತೆ ಮನವಿ ಅರ್ಪಿಸಿದವು.
ನವಕರ್ನಾಟಕ ನಿರ್ಮಾಣ ವೇದಿಕೆ: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಉದ್ಯೋಗ ನೀಡುವಾಗ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದವರಿಗೆ ಮೊದಲ ಆದ್ಯತೆ ನೀಡಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಕ್ರಮಕೈಗೊಳ್ಳಬೇಕು ಎಂದು ನವಕರ್ನಾಟಕ ನಿರ್ಮಾಣ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.
ಎಲ್ಲಾ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲೂ ಕಡ್ಡಾಯವಾಗಿ 1ನೇ ತರಗತಿಯಿಂದ ಇಂಗ್ಲಿಷ್ನ್ನು ಒಂದು ಭಾಷೆಯಾಗಿ ಉತ್ತಮ ರೀತಿಯಲ್ಲಿ ಕಲಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಕ್ರಮಕೈಗೊಳ್ಳಬೇಕು. ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಆಂಗ್ಲ ಭಾಷೆಯಲ್ಲಿ ಪಾಠ, ಪ್ರವಚನ ಮಾಡುತ್ತಿರುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅನುದಾನ ಹಾಗೂ ಅನುದಾನ ರಹಿತ ಶಾಲೆಗಳಲ್ಲೂ ಈ ನಿಯಮವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಗಡಿನಾಡ ಕನ್ನಡಿಗರಿಗೆ ಅಗತ್ಯ ಸೌಲಭ್ಯ ನೀಡಬೇಕು ಎಂದು ವೇದಿಕೆಯ ರಾಜಾಧ್ಯಕ್ಷ ಗೋ. ರಮೇಶ್ಗೌಡ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸೇವಾದಳ: ರಾಜ್ಯ ಕಾಂಗ್ರೆಸ್ ಸೇವಾದಳ ಸಮನ್ವಯ ಸಮಿತಿಯ ಸದಸ್ಯ ವೈ.ಎಚ್. ನಾಗರಾಜ್, ಶಿವಮೊಗ್ಗ ನಗರ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳು ನೆನೆಗುಂದಿಗೆ ಬಿದ್ದಿವೆ. ಅತಿವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ.
ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೋಟ್ಯಂತರ ರುಪಾಯಿ ನಷ್ಟವಾಗಿದೆ. ಆಶ್ರಯ ಯೋಜನೆ ಅನುಷ್ಠಾನದಲ್ಲಿ ಹಿನ್ನಡೆಯಾಗಿರುವುದು ಸೇರಿದಂತೆ ಹಲವು ಜನಪರ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿವೆ. ತುರ್ತಿಗತಿಯಲ್ಲಿ ಅನುಷ್ಠಾನ ಮಾಡುವ ಕುರಿತಂತೆ ಹಾಗೂ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮಕೈಗೊಳ್ಳುವ ಕುರಿತಂತೆ ತಾವು ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ಅತಿವೃಷ್ಟಿಯಿಂದ ಬೆಳೆ ನಷ್ಟವಾದ ಅಡಕೆ, ಮೆಕ್ಕೆಜೋಳ, ಶುಂಠಿ ಸೇರಿದಂತೆ ಬೆಳೆಗಾರರಿಗೆ ಹೆಚ್ಚಿನ ಪರಿಹಾರ ನೀಡಬೇಕು. ಅಡಕೆಗೆ ತಗುಲಿರುವ ಕೊಳೆ ರೋಗ ನಿವಾರಣೆಗೆ ಉಚಿತವಾಗಿ ಔಷಧ ವಿತರಣೆ ಮಾಡಬೇಕು.
ಭದ್ರಾವತಿ ಪಟ್ಟಣದ ಪ್ರಖ್ಯಾತ ವಿಐಎಸ್ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಕಾರ್ಖಾನೆಗಳ ಸರ್ವಾಂಗೀಣ ಅಭಿವೃದ್ಧಿ ಹೆಚ್ಚಿನ ಒತ್ತು ನೀಡಬೇಕು.
ವಿಶ್ವವಿಖ್ಯಾತ ಜೋಗ ಜಲಪಾತವನ್ನು ಉತ್ತಮ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕು. ಶಿವಮೊಗ್ಗ ಜಿಲ್ಲೆಯ ಬಗರ್ಹುಕುಂ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಅಖಿಲ ಭಾರತ ದಲಿತ ಕ್ರಿಯಾ ಸಮಿತಿ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯನ್ನು ಶಿವಮೊಗ್ಗಕ್ಕೆ ವಾಪಸ್ ತರಬೇಕು. ಮೆಗ್ಗಾನ್ ಆಸ್ಪತ್ರೆ ಬೋಧನಾ ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ್ ಅವರನ್ನು ಅಮಾನತ್ತು ಮಾಡಿ, ಹಗರಣ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದೆ.
ಈ ಬಗ್ಗೆ ಗುರುವಾರ ನಗರದಲ್ಲಿ ಅರೆಬೆತ್ತಲೆ ಮೆರವಣಿಗೆ ಪ್ರತಿಭಟನೆ ಮಾಡುತ್ತೇನೆ ಎಂದು ಸಮಿತಿ ಅಧ್ಯಕ್ಷ ವಿ. ಭಗವಾನ್ ತಿಳಿಸಿದ್ದರು. ಈ ಸಂಬಂಧ ಪೊಲೀಸರು ಮುಖ್ಯಮಂತ್ರಿಗಳು ಆಗಮಿಸುವ ಮೊದಲೇ ಭಗವಾನ್ ಅವರ ಮನೆಗೆ ತೆರಳಿ ಅವರನ್ನು ಬಂಧಿಸಿತ್ತು.
ಡಾ. ಗಂಗಾಧರ್ ಅವರು ಆಸ್ಪತ್ರೆಯ ಔಷಧಿಯ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ರೋಗಿಗಳಿಗೆ ಅಗತ್ಯವಿರುವ ಔಷಧಿಗಳನ್ನು ಖರೀದಿಸುವುದರಲ್ಲಿ ಲೋಪವೆಸಗಿದ್ದಾರೆ. ನಾನ್ ಕ್ಲಿನಿಕ್ ಸಿಬ್ಬಂದಿಯನ್ನು ಮ್ಯಾನ್ ಏಜೆನ್ಸಿಯವರಿಂದ ಗುತ್ತಿಗೆ ಕಾರ್ಮಿಕರನ್ನು ಪಡೆಯುವಲ್ಲಿ ನಿಯಮವನ್ನು ಉಲ್ಲಂಘಿಸಿ, ಅವರಿಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಸಂಘಟನೆ ಆರೋಪಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

