ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಸೆ.6
ಪಶುವೈದ್ಯ ಪರಿಷತ್ತಿನ ನೋಂದಣಿಗೆ ಒತ್ತಾಯಿಸಿ ನಗರದ ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಜಾಥಾ ನಡೆಸಿ ಸರ್ಕಾರದ ಗಮನ ಸೆಳೆದರು.
ಕಾಲೇಜಿನ 183 ವಿದ್ಯಾರ್ಥಿಗಳೂ ಬೆಳಿಗ್ಗೆ ವಿನೋಬ ನಗರದಿಂದ ಜಾಥಾ ಹೊರಟು ಸರ್ಕಾರದ ವಿರುದ್ಧ ಹಾಗೂ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ನಂತರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನೂ ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮನವಿ ಸಲ್ಲಿಸಿದರು.
ಯಾವ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಅವರು ಈ ವರ್ಷ ಕಾಲೇಜಿಗೆ ಹೊಸದಾಗಿ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಕೊಡಲು ಆಗಿರುವ ತೊಂದರೆ ಬಗ್ಗೆ ಮಾತನಾಡುತ್ತಾರೆಯೇ ಹೊರತು ಈಗಾಗಲೇ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪಶುವೈದ್ಯ ಪರಿಷತ್ತಿನ ನೋಂದಣಿ ಸಂಖ್ಯೆ ಸಿಗದೇ ಆಗಿರುವ ಸಮಸ್ಯೆಯ ಬಗ್ಗೆ ಮಾತನಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನವಿ ಸಲ್ಲಿಕೆ: ಈ ಸಂದರ್ಭದಲ್ಲಿ ಕಾಗೋಡು ತಿಮ್ಮಪ್ಪ ಅವರು, ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು.
ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರಿಗೆ ಮನವಿ ಸಲ್ಲಿಸಿ ಕಾಲೇಜು ಕ್ಯಾಂಪಸ್ನಲ್ಲಿ ಆಗಿರುವ, ಆಗಬೇಕಿರುವ ಕಾಮಗಾರಿಗಳನ್ನು ಪರಿಶೀಲಿಸುವಂತೆ ಕೋರಿದರು. ಸದ್ಯ ಗಣಪತಿ ಹಬ್ಬದ ಜಂಜಾಟದಲ್ಲಿರುವ ಜಿಲ್ಲಾಧಿಕಾರಿಯವರು, ಒಂದು ವಾರದ ನಂತರ ಕಾಲೇಜಿಗೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

