ಪಠ್ಯದೊಂದಿಗೆ ಪಠ್ಯೇತರದಲ್ಲೂ ಪಾಲ್ಗೊಳ್ಳಿ
ಕ.ಪ್ರ.ವಾರ್ತೆ ಶಿವಮೊಗ್ಗ ಸೆ.8
ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳುವುದರಿಂದ ಹೆಚ್ಚು ಮಾನಸಿಕ ಗುಣಮಟ್ಟ ವೃದ್ಧಿ ಆಗುತ್ತದೆ ಎಂದು ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹೇಳಿದರು.
ಸ.ಪ.ಪೂ. ಕಾಲೇಜು ಶನಿವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್ನೆಸ್ಸೆಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು, ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ಏರ್ಪಟ್ಟಿದೆ. ಹಾಗಾಗಿ ವಿದ್ಯಾರ್ಥಿಗಳು ಹೆಚ್ಚು ಕ್ರಿಯಾಶೀಲರಾಗಬೇಕು. ಈ ಹಿನ್ನೆಲೆಯಲ್ಲಿ ಮಾನಸಿಕ ಗುಣಮಟ್ಟ ಹೆಚ್ಚಿಸಲು ಸಾಂಸ್ಕೃತಿಕ ಕಾರ್ಯಕ್ರಮ ಅತಿ ಅವಶ್ಯವಾಗಿದೆ ಎಂದರು.
ಹಲವು ಕನಸು: ಪೋಷಕರು ಹಲವಾರು ಕನಸು ಕಟ್ಟಿಕೊಂಡಿರುತ್ತಾರೆ. ಅವರ ಆಸೆ ಈಡೇರಿಸುವುದರ ಮೂಲಕ ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ಸಮಾಜದಲ್ಲಿ ಹೊರಹೊಮ್ಮಬೇಕು. ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು. ಜಿಲ್ಲೆ ಹಲವಾರು ಗಣ್ಯರನ್ನು ನಾಡಿಗೆ ಕೊಡುಗೆಯಾಗಿ ನೀಡಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ್ದಾರೆ. ಅದೇ ರೀತಿ ವಿದ್ಯಾರ್ಥಿಗಳು ಕೂಡ ಹೆಸರುಗಳಿಸಿ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ವಿದ್ಯಾರ್ಥಿಗಳು ಸತತ ಪರಿಶ್ರಮದ ಮೂಲಕ ತಾವು ಕನಸು ಕಂಡಿರುವ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳ ವಿಷಯಗಳ ಬಗ್ಗೆಯೂ ಹೆಚ್ಚಿನ ಮಾಹಿತಿ ಕಲೆ ಹಾಕಬೇಕು. ಇಂದಿನ ಯುಗ ಸ್ಪರ್ಧಾತ್ಮಕ ಯುಗವಾಗಿದ್ದು, ವಿದ್ಯಾರ್ಥಿಗಳು ಪ್ರಚಲಿತ ವಿದ್ಯಾಮಾನಗಳ ಕಡೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಎಂದರು.
ಅಭಿವೃದ್ಧಿಗೆ ಯೋಜನೆ: ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಹಲವಾರು ಯೋಜನೆ ರೂಪಿಸಿದ್ದು, ಜಾರಿಗೆ ತರಲು ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಪ.ಪೂ.ಕಾಲೇಜಿನ ಆವರಣದಲ್ಲಿ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದರು.
ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಮಾಡ್ಯಾಳ ವಹಿಸಿದ್ದರು. ಡಾ. ಎಸ್. ಅರವಿಂದ್, ಉಪನ್ಯಾಸಕ ಕೃಷ್ಣಮೂರ್ತಿ, ಉಮಾಪತಿ, ಗಣೇಶ್ರಾವ್, ರುದ್ರೇಗೌಡ, ಗೋಪಾಲಕೃಷ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

