ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಶೀಘ್ರದಲ್ಲೇ ಸಭೆ: ಕಾಗೋಡು
ಸಾಗರ: ಮುಂದಿನ 10 ದಿನದೊಳಗೆ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ಯಾವ ರೀತಿಯ ಸಹಕಾರ ಪಡೆಯಬಹುದು ಎನ್ನುವ ನಿಟ್ಟಿನಲ್ಲಿ ನಾನು ಸೇರಿದಂತೆ ವಿಧಾನ ಪರಿಷತ್ ಅಧ್ಯಕ್ಷರಾದ ಡಿ.ಎಚ್.ಶಂಕರಮೂರ್ತಿ, ಜಿಲ್ಲಾ ಉಸ್ತುವಾರಿ ಸಚಿವರಾದ ಕಿಮ್ಮನೆ ರತ್ನಾಕರ್ ಹಾಗೂ ಜಿಲ್ಲೆಯ ಶಾಸಕರು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ತಮ್ಮ ಹುಟ್ಟುಹಬ್ಬದ ಅಂಗವಾಗಿ ಉಪವಿಭಾಗೀಯ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಸಮಸ್ಯೆ ಅರಿವಿದ್ದು, ಅದನ್ನು ಹಂತಹಂತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗುತ್ತೇವೆ ಎಂದು ಹೇಳಿದರು.
ನೀರಿನ ಭಾಗ್ಯ: ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಜೋಗ ಜಲಪಾತ ಅಭಿವೃದ್ದಿ ಕಾಮಗಾರಿಗೆ ಶೀಘ್ರ ಚಾಲನೆ ದೊರೆಯಲಿದೆ ಎಂದ ಅವರು, ಕೇಂದ್ರ ಸರ್ಕಾರ ಭಾರತ್ ನಿರ್ಮಾಣ ಯೋಜನೆಯಡಿ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಬೇಕಾದ ಅನುದಾನ ನೀಡುತ್ತಿದೆ. ರಾಜ್ಯ ಸರ್ಕಾರ ಸಹ ನೀರಿನ ಭಾಗ್ಯ ಯೋಜನೆ ಅನುಷ್ಠಾನಕ್ಕೆ ತಂದಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗುವುದು.
ಈಗಾಗಲೆ ಪ್ರತಿ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಲು ಬೇಕಾದ ಯೋಜನೆ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ನಾನು ಕ್ಷೇತ್ರಕ್ಕೆ ಮಾತ್ರ ಸೀಮಿತ ಎನ್ನುವ ಮನೋಭಾವ ಹೊಂದಿದವರ ದೃಷ್ಟಿ ಮಂದವಾಗಿರಬೇಕು. ನಾನು ಪ್ರತಿಯೊಂದು ಯೋಜನೆ ಬಗ್ಗೆ ಚಿಂತನೆ ನಡೆಸಿದ್ದರು ಅದರಲ್ಲಿ ರಾಜ್ಯದ ಸಮಗ್ರ ಚಿಂತನೆ ಅಡಗಿರುತ್ತದೆ.
ಆಧಾರ್ ಕಾರ್ಡ್: ಆಧಾರ್ ಕಾರ್ಡ್ ಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ.
ಗುತ್ತಿಗೆದಾರರ ಅನುಕೂಲಕ್ಕೆ ತಕ್ಕಂತೆ ನಿಗಧಿತ ಸ್ಥಳವೊಂದರಲ್ಲಿ ಆಧಾರ್ ಕಾರ್ಡ್ ನೊಂದಾವಣೆ ನಡೆಯುತ್ತಿದೆ.
ಅದನ್ನು ಪ್ರತಿ ಗ್ರಾಮ ಮಟ್ಟದಲ್ಲೂ ವಿಸ್ತರಿಸುವ ಕುರಿತು ಪತ್ರ ಬರೆದಿದ್ದು, ಇದು ರಾಜ್ಯದ ಜನರ ಹಿತದೃಷ್ಟಿಯಿಂದ ಕೈಗೊಂಡ ನಿರ್ಣಯವಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

