ಶಿವಮೊಗ್ಗ

ಬೆಳೆಹಾನಿ ವರದಿ ಕೇಂದ್ರಕ್ಕೆ ಕಳುಹಿಸಲಿ: ಆಯನೂರು

Published On :

ಶಿವಮೊಗ್ಗ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿಯಿಂದ ಅಡಕೆ ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಬೆಳೆಹಾನಿ ಬಗ್ಗೆ ಸಂಪೂರ್ಣ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಸೂಕ್ತ ಪರಿಹಾರಕ್ಕೆ ಆಗ್ರಹಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಆಯನೂರು ಮಂಜುನಾಥ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅವರು, ರಾಜ್ಯದಲ್ಲಾಗಿರುವ ಬೆಳೆ ಹಾನಿ ಕುರಿತು ಬಿಜೆಪಿ ಸಂಸದರು ಸಂಸತ್‌ನಲ್ಲಿ ವಿಷಯ ಪ್ರಸ್ತಾಪಿಸಿದ್ದು, ಬಿಜೆಪಿ ಸಂಸದರ ನಿಯೋಗ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕೃಷಿ ಸಚಿವ ಶರದ್‌ಪವಾರ್ ಅವರಿಗೆ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಈ ಕೆಲಸ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮುಂದಾಗಬೇಕು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ರಾಜ್ಯದ ಸ್ಥಿತಿ ಬಗ್ಗೆ ಮಾಹಿತಿ ನೀಡಿದಾಗ, ರಾಜ್ಯ ಸರ್ಕಾರದಿಂದ ಈ ಬಗ್ಗೆ ಯಾವುದೇ ವರದಿ ಬಂದಿಲ್ಲ. ರಾಜ್ಯ ಸರ್ಕಾರದಿಂದ ಈ ಕುರಿತು ವರದಿ ಬಂದಲ್ಲಿ, ಒಂದು ವಾರದೊಳಗೆ ಕೇಂದ್ರದಿಂದ ತಂಡವೊಂದನ್ನು ಪರಿಶೀಲನೆಗಾಗಿ ಕಳುಹಿಸಿ ನಂತರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ಕೇಂದ್ರಕ್ಕೆ ಬೆಳೆಹಾನಿ ಕುರಿತು ವರದಿ ಸಲ್ಲಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ನಿರ್ಲಕ್ಷ್ಯ: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಹೆಚ್ಚು ಪರಿಹಾರ ನೀಡಲು ಸಿದ್ದವಿದೆ. ಆದರೆ, ರಾಜ್ಯ ಸರ್ಕಾರ ಅತಿವೃಷ್ಟಿ ವರದಿ ಸಲ್ಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದು, ರಾಜ್ಯದಲ್ಲಾಗಿರುವ ಬೆಳೆಹಾನಿಗೆ ಸೂಕ್ತ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಬೇಕು, ಕನಿಷ್ಠ 3 ಸಾವಿರ ಕೋಟಿ ರುಪಾಯಿ ಪರಿಹಾರ ನೀಡುವಂತೆ ಬೇಡಿಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಬಂದಾಗ ಜಿಲ್ಲೆಗೆ 73 ಕೋಟಿ ರುಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಈ ಮೊತ್ತ ಜಿಲ್ಲೆಗೆ ಸಾಕಾಗುವುದಿಲ್ಲ. ಈ ಮೊತ್ತವನ್ನು ಹೆಚ್ಚಿಸಬೇಕು ಎಂದ ಅವರು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೆಳೆಹಾನಿ ಪರಿಹಾರಕ್ಕೆ ಒತ್ತಾಯಿಸಿ ದೆಹಲಿಗೆ ನಿಯೋಗ ತೆರಳುವುದಾದರೆ, ರಾಜ್ಯದ ಎಲ್ಲಾ ಸಂಸದರು ಪಕ್ಷಬೇಧ ಮರೆತು ಬರುತ್ತೇವೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಸೂಡಾ ಮಾಜಿ ಅಧ್ಯಕ್ಷ ಎಸ್. ಜ್ಞಾನೇಶ್ವರ್, ಎಸ್. ದತ್ತಾತ್ರಿ, ಬಾ.ರಾ. ಮಧುಸೂದನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.