ಚುನಾವಣಾ ಪ್ರಚಾರದಲ್ಲೊಬ್ಬ ಸರ್ಕಾರಿ ಎಂಜಿನಿಯರ್!
ಶಿವಮೊಗ್ಗ: 'ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಎಂಜಿನಿಯರ್ ವರ್ಗಾಯಿಸಿ...'
ಹೀಗೊಂದು ದೂರು ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿಗೆ ಬಿಜೆಪಿ ಸಲ್ಲಿಸಿದೆ.
ಕರ್ನಾಟಕ ನೀರಾವರಿ ನಿಗಮದ ಬಿಆರ್ಪಿ ಶಾಖೆಯಲ್ಲಿ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ವಿ. ಶ್ರೀನಿವಾಸ ಅವರನ್ನು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.
ಈ ಅಧಿಕಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರವಾಗಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ತಮ್ಮ ಕೆಳಗಿನ ಅಧಿಕಾರಿಗಳಿಗೂ ಈ ರೀತಿಯ ಸೂಚನೆಗಳನ್ನು ನೀಡುತ್ತಿರುವುದಾಗಿ ತಿಳಿದುಬಂದಿದೆ. ಈ ಅಧಿಕಾರಿಯನ್ನು ಈಗಾಗಲೇ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಇಂತಹವರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಅಸಾಧ್ಯ ಎನಿಸುತ್ತದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಭವಾನಿರಾವ್ ಮೋರೆ ಮತ್ತಿತರರು ಹಾಜರಿದ್ದರು.
ಯಡಿಯೂರಪ್ಪ ಸ್ಟಾರ್ ಕ್ಯಾಂಪೇನರ್
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಆಗಿದ್ದು, ಅವರು ಹೆಲಿಕಾಪ್ಟರ್ಗಳಲ್ಲಿ ಸಂಚರಿಸುವ ಲೆಕ್ಕಶೀರ್ಷಿಕೆಯನ್ನು ಲೋಕಸಭಾ ಕ್ಷೇತ್ರದ ಲೆಕ್ಕ ಶೀರ್ಷಿಕೆಗೆ ಸಲ್ಲಿಸಲು ಬರುವುದಿಲ್ಲ ಎಂದು ಜಿಲ್ಲಾ ಬಿಜೆಪಿಯಿಂದ ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿಗೆ ಮನವರಿಕೆ ಮಾಡಲಾಯಿತು.
ಮಂಗಳವಾರ ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಪಕ್ಷದ ಪ್ರಮುಖರು, ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿದ್ದಾರೆ. ಅವರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ಕಾರ್ಯಕ್ಕೆ ಹೆಲಿಕಾಪ್ಟರ್ ಮತ್ತಿತರೆ ವಾಹನಗಳಲ್ಲಿ ಪ್ರವಾಸ ಕೈಗೊಳ್ಳಬೇಕಾಗುತ್ತದೆ. ಹಾಗಾಗಿ, ಸ್ಟಾರ್ ಕ್ಯಾಂಪೇನ್ ಸಂದರ್ಭದಲ್ಲಿ ತಗಲಬಹುದಾದ ಖರ್ಚು ವೆಚ್ಚಗಳನ್ನು ಅಭ್ಯರ್ಥಿಯಾಗಿರುವ ಬಿ.ಎಸ್. ಯಡಿಯೂರಪ್ಪ ಅವರ ಚುನಾವಣಾ ಲೆಕ್ಕಕ್ಕೆ ಹಾಕಲು ಬರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ ಎಂದು ಮನವರಿಕೆ ಮಾಡಿಕೊಟ್ಟರು.
ಜಿಲ್ಲಾ ಬಿಜೆಪಿಯು ರಾಜ್ಯ ಚುನಾವಣಾ ಆಯೋಗವನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಸ್ಟಾರ್ ಕ್ಯಾಂಪೇನರ್ಗಳ ವೆಚ್ಚವು ರಾಜ್ಯ ಕಾರ್ಯಾಲಯದ ಲೆಕ್ಕ ಶೀರ್ಷಿಕೆಗೆ ಬರುತ್ತದೆ. ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿ ಅಥವಾ ಅಭ್ಯರ್ಥಿಯ ಲೆಕ್ಕಪತ್ರಕ್ಕೆ ಸ್ಟಾರ್ ಕ್ಯಾಂಪೇನರ್ಗಳ ವೆಚ್ಚ ನಮೂದಿಸಲು ಅವಕಾಶ ಇರುವುದಿಲ್ಲ ಎಂದು ಮನವಿ ಸಲ್ಲಿಕೆ ಸಂದರ್ಭ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

