ಸಿಎಂ ವಿರುದ್ಧ ರೈತ ಸಂಘ ಗರಂ
ಕ.ಪ್ರ.ವಾರ್ತೆ , ಶಿವಮೊಗ್ಗ , ಏ. 4
ಬೆಳಗಾವಿ ಸುವರ್ಣ ಸೌಧದ ಎದುರು ಆತ್ಮಹತ್ಯೆ ಮಾಡಿಕೊಂಡ ರೈತ ವಿಠಲ್ ಅರಬಾವಿಯವರ ಸಾವಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘ ಆರೋಪಿಸಿದೆ.
ಜಿಲ್ಲಾಧಿಕಾರಿ ಕಚೇರಿಗೆ ಶುಕ್ರವಾರ ಆಗಮಿಸಿದ ರೈತ ಸಂಘದ ನಿಯೋಗ ಸಾಂಕೇತಿಕ ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿತು.
ವಿಠಲ್ ಅರಬಾವಿ ಸಾವು ಸರ್ಕಾರದ ನೀತಿಯಿಂದ ಆಗಿದ್ದು, ತಾವು ಅಧಿಕಾರ ವಹಿಸಿಕೊಂಡಾಗಿನಿಂದಲೂ ರೈತರಿಗೆ ವೈಜ್ಞಾನಿಕ ಬೆಲೆ ನೀಡಲು ಕೃಷಿ ಆಯೋಗ ರಚಿಸುವುದಾಗಿ ಬಾಯಿ ಮಾತಿನಲ್ಲಿ ಹೇಳಿದಿರೆ ವಿನಹ ಈವರೆಗೂ ಕಾರ್ಯಗತವಾಗಿಲ್ಲ ಎಂದು ಮುಖ್ಯಮಂತ್ರಿಯವರನ್ನು ರೈತ ಸಂಘ ತನ್ನ ಮನವಿ ಪತ್ರದಲ್ಲಿ ತಿವಿದಿದೆ.
ಕೇಂದ್ರ ಸರ್ಕಾರದಲ್ಲಿ ಸಿಎಸಿಪಿ(ಬೆಲೆ ವೆಚ್ಚ ಮತ್ತು ನಿಗದಿ) ಕೃಷಿ ಉತ್ಪನ್ನಗಳ ಬೆಲೆಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತಿದೆ. ಆದರೆ, ಕೇಂದ್ರ ಸರ್ಕಾರವು ಇದಾವುದನ್ನೂ ಪರಿಗಣನೆಗೆ ತೆಗೆದುಕೊಳ್ಳದೆ ರೈತನಿಗೆ ಉತ್ಪಾದನಾ ವೆಚ್ಚ ದೊರಕದಂತಹ ಕನಿಷ್ಠ ಬೆಂಬಲ ಬೆಲೆ ಪ್ರಕಟ ಮಾಡುತ್ತಿದೆ. ಇದರಿಂದ ಸಾಲಗಾರರಾಗಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ಟೀಕಿಸಲಾಗಿದೆ.
ಹಣ ಕೊಟ್ಟಿಲ್ಲ: ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಬತ್ತ, ಮೆಕ್ಕೆಜೋಳ ಖರೀದಿ ಮಾಡಿದ ರೈತರಿಗೆ 15 ದಿನಗಳೊಳಗೆ ಹಣ ಪಾವತಿಸುವುದಾಗಿ ತಿಳಿಸಿ ಈಗ ತಿಂಗಳಾದರೂ ಹಣ ಕೊಟ್ಟಿಲ್ಲ. ರಾಜ್ಯದಲ್ಲಿ ಸಾವಿರಾರು ಕೋಟಿ ರುಪಾಯಿ ಹಣ ಕೊಡಬೇಕಾಗಿದೆ. ರಾಜ್ಯಾದ್ಯಂತ ಪ್ರತಿಭಟನೆ ಮಾಡಿದರೂ ಸರ್ಕಾರ ಎಚ್ಚರವಾಗಿಲ್ಲ ಎಂದು ರೈತ ಸಂಘದ ಮುಖಂಡರು ಟೀಕಿಸಿದರು.
ಸಕ್ಕರೆ ಕಾರ್ಖಾನೆಗಳಿಗೆ ರೈತರು ಸರಬರಾಜು ಮಾಡುವ ಕಬ್ಬಿಗೆ ಅವೈಜ್ಞಾನಿಕ ಬೆಲೆ ನಿಗದಿಯಾಗಿದ್ದು, ಈ ಹಣವನ್ನು ಸಹ ಕಾರ್ಖಾನೆಗಳಿಂದ ಬೆಳೆಗಾರರಿಗೆ ಸರ್ಕಾರದಿಂದ ಬಾಕಿ ಹಣ ಕೊಡಿಸಲಾಗದೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗಾವಿ ಸುವರ್ಣ ಸೌಧದ ಎದುರು ಚಳವಳಿ ಮಾಡುವ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳದ ಸರ್ಕಾರದ ವಿಳಂಬ ನೀತಿಯಿಂದ ವಿಠಲ್ ಅರಬಾವಿ ಆತ್ಮಹತ್ಯೆಯಾಗಿದೆ. ಆದ್ದರಿಂದ ಸರ್ಕಾರ ಈ ವಿಚಾರದಲ್ಲಿ ನುಣುಚಿಕೊಳ್ಳಲು ಸಾಧ್ಯವಿಲ್ಲ.
ಮುಖ್ಯಮಂತ್ರಿಯಾಗಿ ಈ ರೀತಿ ಹೇಳಿಕೆ ಕೊಡುವುದು ಶೋಭೆ ತರುವುದಿಲ್ಲ. ಸರ್ಕಾರ ಪರಿಹಾರ ಘೋಷಣೆ ಮಾಡಿ ರೈತನ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ಕೊಟ್ಟ ಮೇಲೆ ಸರ್ಕಾರದ ಅನಾಹುತ ಎಂದು ತಾವು ಒಪ್ಪಿಕೊಳ್ಳಬೇಕು ಮತ್ತು ಮಾತು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಏಪ್ರಿಲ್ 10ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸಮಿತಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಎಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

