ಬಿಜೆಪಿಗೆ ಅಧಿಕಾರ ಕೇವಲ ಹಗಲುಗನಸು: ಸುದರ್ಶನ್
ಕ.ಪ್ರ.ವಾರ್ತೆ , ಚಿಕ್ಕಮಗಳೂರು , ಏ. 5
ಬಿಜೆಪಿಯ ಕೆಲವು ನಾಯಕರು ವೈಯಕ್ತಿಕ ವರ್ಚಸ್ಸು ಕಳೆದುಕೊಂಡಿದ್ದರಿಂದ ಮೋದಿಯವರ ಹೆಸರಿನಲ್ಲಿ ವೋಟ್ ಕೇಳುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ವಿ.ಆರ್. ಸುದರ್ಶನ್ ಆರೋಪಿಸಿದ್ದಾರೆ.
ರಾಜ್ಯದ ಜನತೆಯ ಎದುರು ಮತ ಕೇಳುವ ನೈತಿಕತೆಯನ್ನು ಬಿಜೆಪಿ ಕಳೆದುಕೊಂಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.
ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂಬ ಹಗಲುಗನಸು ಬಿಜೆಪಿ ಕಾಣುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಲವು ಹಗರಣಗಳು ನಡೆದಿದ್ದವು. ಹಲವರು ಇದರಲ್ಲಿ ಭಾಗಿಯಾಗಿದ್ದರು. ಇದರಿಂದಾಗಿ ಬೇಸತ್ತಿರುವ ಜನರು ಈ ಬಾರಿ ಕಾಂಗ್ರೆಸ್ಗೆ ಮತ ನೀಡಿದರು. ಬಿಜೆಪಿಯ ದುರಾಡಳಿತ ಜನ ಇನ್ನೂ ಮರೆತಿಲ್ಲ. ಆದ್ದರಿಂದ ತಮಗೆ ಮತ ನೀಡುವಂತೆ ಜನರಿಗೆ ಕೇಳಿಕೊಳ್ಳುವ ನೈತಿಕತೆಯನ್ನು ಬಿಜೆಪಿ ಕಳೆದುಕೊಂಡಿದೆ. ಈ ಕಾರಣದಿಂದಲೇ ಮೋದಿಯವರಿಗೆ ವೋಟ್ ಕೊಡಿ ಎಂದು ಕೇಳಿಕೊಳ್ಳುತ್ತಿದ್ದಾರೆ ಎಂದರು.
ಭ್ರಷ್ಟಾಚಾರ ತಡೆಗಟ್ಟಬೇಕೆಂದು ಮೋದಿಯವರು ಹಲವೆಡೆ ಭಾಷಣದಲ್ಲಿ ಹೇಳಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಜಾರಿಗೆ ತಂದಿರುವ ಲೋಕಪಾಲ್ ಮಸೂದೆ, ಗುಜರಾತ್ನಲ್ಲಿ ಜಾರಿಗೆ ತರಲು ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕಾಯಿತು. ಆಡಳಿತದಲ್ಲಿ ಪಾರದರ್ಶಕತೆ ಇರಬೇಕೆಂಬ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ತರಲಾಗಿದೆ. ಈ ಕಾಯ್ದೆ ಗುಜರಾತ್ನಲ್ಲಿ ಈವರೆಗೆ ಜಾರಿಗೆ ತರಲು ಅಲ್ಲಿನ ಸರ್ಕಾರ ಮುಂದಾಗಿಲ್ಲ. ಈ ಕಾಯ್ದೆ ಜಾರಿಗೆ ಬಂದರೆ ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಉದ್ದೇಶ ಇದರ ಹಿಂದಿರುವುದು ಸ್ಪಷ್ಟವಾಗುತ್ತದೆ ಎಂದರು.
ಧೋರಣೆ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಕಾರ್ನಾಡ್, ಡಾ. ಯು.ಆರ್. ಅನಂತಮೂರ್ತಿ ಅವರು ಸಮಾಜವಾದದ ಚಿಂತನೆಯ ಹಿನ್ನೆಲೆಯಲ್ಲಿ ಮಾತನಾಡುತ್ತಾರೆ. ಅವರು ಯಾವ ಪಕ್ಷದ ಸದಸ್ಯತ್ವ ಪಡೆದವರಲ್ಲ. ನಿರ್ದಿಷ್ಟ ವಿಷಯದ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಅವರ ಬಗ್ಗೆ ಬಿಜೆಪಿಯ ಮುಖಂಡರು ಲಘುವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಸುದರ್ಶನ್ ಹೇಳಿದರು.
ಚಿದಾನಂದಮೂರ್ತಿಯವರು ಬಲಪಂಥಿಯರು ಅವರ ನಿಲುವು ಬಿಜೆಪಿ ಪರವಾಗಿರುತ್ತವೆ. ಹಾಗಿದ್ದ ಮಾತ್ರಕ್ಕೆ ಅವರ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಎಲ್ಲರೂ ಸ್ವತಂತ್ರರು. ಹಾಗೆಯೇ ಗಿರೀಶ್ ಕಾರ್ನಾಡ್, ಯು.ಆರ್. ಅನಂದಮೂರ್ತಿಯವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಎಂದು ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ ಸುದರ್ಶನ್, ಟೀಕಿಸುವ ಧೋರಣೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಪಂ ಸದಸ್ಯೆ ಹೇಮಾವತಿ ದೇವೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

