ಶಿವಮೊಗ್ಗ

ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ: ಕಾಗೋಡು ತಿಮ್ಮಪ್ಪ

Published On :

ಕನ್ನಡಪ್ರಭ ವಾರ್ತೆ ಟಿ ಸಾಗರ ಟಿ ಏ.25ತಾಲೂಕಿನ 35 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿಯ ಅಂದಾಜು ಪಟ್ಟಿ ತಯಾರಿಸಲು ಸೂಚನೆ ನೀಡಲಾಗಿದೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನರು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು. ತಾಲೂಕಿನ ಭಾರಂಗಿ ಹೋಬಳಿಯ ತಲವಾಟ, ಭಾನ್ಕುಳಿ, ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಿ, ಅರಲಗೋಡಿನಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಭೆಯಲ್ಲಿ, ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಕೋರಲಾಗಿದೆ ಎಂದು ತಿಳಿಸಿದರು.ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಾರದು. ಅದಕ್ಕಾಗಿ ಬಾವಿಗಳು ಬತ್ತಿದ್ದರೆ ಅದನ್ನು ಶುಚಿಗೊಳಿಸುವುದು, ಹೂಳು ತೆಗೆಯಲು ಸೂಚನೆ ನೀಡಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು. ಬಿದರೂರು- ಇಂದ್ರೋಡಿಮನೆ ಹಾಗೂ ಕುಡುಗುಂಜಿ ಗ್ರಾಮಕ್ಕೆ 2 ಕೋಟಿ ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ನಿಗಮದ ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದ್ದು, ಕಾರ್ಗಲ್ ಚೌಡೇಶ್ವರಿ ದೇವಸ್ಥಾನದಿಂದ ಲಿಂಗನಮಕ್ಕಿವರೆಗೆ 2 ಕೋಟಿ ವೆಚ್ಚದಲ್ಲಿ ಹೊಸದಾಗಿ ರಸ್ತೆ ನಿರ್ಮಾಣ ಮಾಡಲು ಕೆಪಿಸಿಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.475 ಕೋಟಿ ಬಿಡುಗಡೆ: ಕೇಂದ್ರದಿಂದ ಉದ್ಯೋಗ ಖಾತ್ರಿ ಕೂಲಿ ಪಾವತಿಗೆ ಬರಬೇಕಾಗಿದ್ದ 475 ಕೋಟಿ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ಪಾಟೀಲ್ ಅವರ ಮೇಲೆ ಒತ್ತಡ ಹಾಕಿದ್ದರಿಂದ ಹಣ ಬಿಡುಗಡೆ ಬೇಗ ಆಗಿದೆ. ಜಿಲ್ಲೆಗೆ 13 ಕೋಟಿ ಹಣ ಬಂದಿದೆ. ಇದರಿಂದ ಕಳೆದ ಎರಡು ಮೂರು ತಿಂಗಳಿನಿಂದ ಕೂಲಿ ಹಣ ಬಾಕಿ ಇರುವವರಿಗೆ ಅನುಕೂಲವಾಗಿದೆ. ಈ ಸಾಲಿನಲ್ಲಿ ಸಹ ಉದ್ಯೋಗ ಖಾತ್ರಿ ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದರು.ತಾಲೂಕಿನ ಎಣ್ಣೆಹೊಳೆ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ತಿಂಗಳು ಲೋಕಾರ್ಪಣೆಗೊಳಿಸಲಾಗುವುದು. ಇದರಿಂದ ಭಟ್ಕಳ- ಕೋಗಾರು ಮೂಲಕ ಸಿಗಂದೂರು, ತುಮರಿ ಭಾಗಕ್ಕೆ ಹೋಗುವವರಿಗೆ ಹೆಚ್ಚು ಅನುಕೂಲವಾಗಲಿದೆ. ಮಳೆಗಾಲ ಆರಂಭದೊಳಗೆ ಬಾಕಿ ಉಳಿದಿರುವ ಕಾಮಗಾರಿ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಲಲಿತಾ ನಾರಾಯಣ್, ತಾಲೂಕು ಪಂಚಾಯಿತಿ ಸದಸ್ಯೆ ಗಿರಿಜಮ್ಮ, ಅರಲಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ದಿನೇಶ್ ಆರೋಡಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.