ಶಾಲೆ, ದೇಗುಲ ಸಮೀಪದ ಮದ್ಯದಂಗಡಿ ಸ್ಥಳಾಂತರಿಸಿ
ಸಾಗರ: ಶಾಲೆ ಹಾಗೂ ದೇವಸ್ಥಾನದ ಸಮೀಪವಿರುವ ಮದ್ಯದಂಗಡಿಗಳಿಗೆ ತಕ್ಷಣ ನೋಟಿಸ್ ಜಾರಿಗೊಳಿಸಿ ಅವುಗಳನ್ನು ಬೇರೆ ಕಡೆ ಸ್ಥಳಾಂತರಿಸಿ. ನೋಟಿಸ್ ನೀಡುವಾಗ ಸಹ ಎಚ್ಚರಿಕೆಯಿಂದ ಇರಿ. ಮದ್ಯದಂಗಡಿ ಮಾಲೀಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರುವ ಸಾಧ್ಯತೆ ಇರುತ್ತದೆ. ಕಾನೂನು ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸುವ ಬಗ್ಗೆ ಗಮನ ಹರಿಸಿ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅಬ್ಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ, ತಾಪಂ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರು, ತಹಸೀಲ್ದಾರರು, ಸಾರ್ವಜನಿಕರು ಮದ್ಯದಂಗಡಿ ತೆರವುಗೊಳಿಸುವಂತೆ ಒತ್ತಾಯ ಮಾಡುತ್ತಿದ್ದರೂ, ನೀವೇಕೆ ಸುಮ್ಮನೆ ಇದ್ದೀರಿ. ತಕ್ಷಣ ನೋಟಿಸ್ ಜಾರಿಗೊಳಿಸಿ, ಅಂಗಡಿಯನ್ನು ಬೇರೆ ಕಡೆ ಸ್ಥಳಾಂತರಿಸಿ ಎಂದು ಎಚ್ಚರಿಕೆ ನೀಡಿದರು.
ಪುನರ್ ಸರ್ವೆ ನಡೆಸಿ: ಗ್ರಾಮಾಂತರ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳಿವೆ. ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಅಬ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಗೈರು ಹಾಜರಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೋಟಿಸ್ ಜಾರಿ ಮಾಡುವಂತೆ ಸೂಚನೆ ನೀಡಿ, ತಾಲೂಕಿನಲ್ಲಿ ಶಾಲೆ ಬಿಟ್ಟ ಮಕ್ಕಳ ಅಂಕಿಸಂಖ್ಯೆ ಕುರಿತು ಪುನರ್ ಸರ್ವೆ ಕಾರ್ಯ ನಡೆಸುವಂತೆ ಸೂಚನೆ ನೀಡಿದರು.
ತಾಲೂಕಿನಲ್ಲಿ ನಿರ್ಮಾಣ ಮಾಡಿರುವ ಅಕ್ಷರ ದಾಸೋಹದ ಅಡುಗೆ ಮನೆ ಕೊಠಡಿಗಳು ತೀರ ಕಳಪೆಯಾಗಿದ್ದು, ನಿರ್ಮಾಣವಾದ ಎರಡು ವರ್ಷಗಳಲ್ಲಿಯೇ ಅನೇಕ ಕೊಠಡಿಗಳು ಸೋರುತ್ತಿದೆ. ಕಿಟಕಿ ಬಾಗಿಲುಗಳು ಮುರಿದು ಹೋಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸುವಂತೆ ಜಿಪಂ ಸದಸ್ಯರಾದ ರತ್ನಾಕರ ಹೊನಗೋಡು, ಸುಮಂಗಲ ರಾಮಕೃಷ್ಣ ಮತ್ತು ಲಲಿತಾ ನಾರಾಯಣ್ ಒತ್ತಾಯಿಸಿದರು.
ಅಡುಗೆ ಕೋಣೆ ದುರಸ್ತಿಗೆ ಸೂಚನೆ: ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು, ಮಕ್ಕಳ ವಿಷಯದಲ್ಲಿ ಕೈಬಾಯಿ ಶುದ್ಧವಾಗಿರಬೇಕು. ಮಕ್ಕಳ ಆಹಾರ ತಯಾರಿಸುವ ಸ್ಥಳಗಳಲ್ಲಿ ಇಂತಹ ಅವ್ಯವಸ್ಥೆ ಇರಬಾರದು. ತಕ್ಷಣ ಅಡುಗೆ ಕೋಣೆಗಳನ್ನು ದುರಸ್ತಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಪಂ ಸದಸ್ಯೆ ಪದ್ಮಾವತಿ ಮಾತನಾಡಿ, ತಾಲೂಕಿನ ಕಬ್ಬೂರು-ಬರುವೆ ನಡುವಿನ ಕಗ್ಗುಂಡಿ ಸಮೀಪ ಸುಮಾರು ಒಂದೂವರೆ ವರ್ಷದ ಹಿಂದೆ ವಿದ್ಯುತ್ ತಂತಿ ಕಳ್ಳತನವಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈತನಕ ತನಿಖೆ ಕೈಗೊಂಡಿಲ್ಲ ಎಂದು ತಿಳಿಸಿದರು.
ತನಿಖೆ ಚುರುಕುಗೊಳಿಸುವಂತೆ ಆದೇಶಿಸಿದ ಕಾಗೋಡು, ಕೋಳೂರು ಗ್ರಾಮ ಪಂಚಾಯ್ತಿಯಿಂದ ಸಿಗಂದೂರಿಗೆ ಹೋಗುವ ರಸ್ತೆಯ ಇಕ್ಕೆಲಗಳಲ್ಲಿರುವ ವಿದ್ಯುತ್ ಕಂಬಗಳಿಂದ ಅಪಘಾತ ಸಂಭವಿಸುತ್ತಿರುವ ದೂರುಗಳಿರುವ ಹಿನ್ನೆಲೆಯಲ್ಲಿ ಅದನ್ನು ಸ್ವಲ್ಪ ದೂರಕ್ಕೆ ಸ್ಥಳಾಂತರಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇಷ್ಟು ದಿನಗಳ ಕಾಲ ನಮಗೆ ಬಳ್ಳಿಗಾವಿಯಿಂದ ವಿದ್ಯುತ್ ಪೂರೈಕೆಯಾಗುತಿತ್ತು. ಅದನ್ನು ಸಾಗರ ಸಬ್ ಸ್ಟೇಷನ್ನಿಂದಲೇ ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜೊತೆಗೆ ನಗರದಲ್ಲಿ 10 ಎಂಎವಿ ಪರಿವರ್ತಕ ಅಳವಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಇರುವುದಿಲ್ಲ ಎಂದರು.
ತಾಪಂ ಅಧ್ಯಕ್ಷ ಹರೀಶ್ ಗಂಟೆ, ಉಪಾಧ್ಯಕ್ಷೆ ಗೌರಮ್ಮ, ತಹಸೀಲ್ದಾರ್ ಸಾಜಿದ್ ಅಹ್ಮದ್ ಮುಲ್ಲಾ, ಕಾರ್ಯನಿರ್ವಹಣಾಧಿಕಾರಿ ಟಿ. ಸಿದ್ದಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

