ಶಿವಮೊಗ್ಗ

ಜನತಾ ನ್ಯಾಯಾಲಯ ಬಳಸಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಫೆ.7
ಏಪ್ರಿಲ್ 12 ವರೆಗೆ ದೇಶಾದ್ಯಂತ ರಾಷ್ಟ್ರ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಬೇರೆ ಬೇರೆ ಹಂತಗಳಲ್ಲಿ ಲೋಕ್ ಅದಾಲತನ್ನು ಪ್ರತಿದಿನ ನಡೆಸಲಾಗುತ್ತಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಶರಶ್ಚಂದ್ರ ಬ. ಅಂಗಡಿ ಹೇಳಿದರು.
ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ಜನವರಿ 6 ರಿಂದ ಏಪ್ರಿಲ್ 12ರವರೆಗೆ ಹಮ್ಮಿಕೊಂಡಿರುವ ಬೃಹತ್ ಲೋಕ ಅದಾಲತ್ (ಜನತಾ ನ್ಯಾಯಾಲಯ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ನ್ಯಾಯ: ಲೋಕ್ ಅದಾಲತ್‌ನಲ್ಲಿ ಮಾತ್ರ ಅತ್ಯಂತ ಕಡಮೆ ಖರ್ಚಿನಲ್ಲಿ ಶೀಘ್ರ ನ್ಯಾಯ ವಿತರಣೆ ಸಾಧ್ಯ. ಹಾಗೆಯೇ, ಸಾಮಾಜಿಕ ನ್ಯಾಯ ನೀಡುವುದರಲ್ಲಿ ಇದೊಂದು ಮೈಲಿಗಲ್ಲು ಎಂದು ಹೇಳಿದರು.
ಸರ್ವೋಚ್ಚ ನ್ಯಾಯಾಲಯ, ಉಚ್ಚ ನ್ಯಾಯಾಲಯಗಳ ಆದೇಶದನ್ವಯ ಹಮ್ಮಿಕೊಂಡಿರುವ ಜನರಿಗೆ ಶೀಘ್ರ ನ್ಯಾಯ ವಿತರಣೆಯ ಲೋಕ ಅದಾಲತ್ ಬೃಹತ್ ಆಂದೋಲನ ಅತ್ಯಂತ ಜನ ಸ್ನೇಹಿಯಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯಗಳನ್ನು ಲೋಕ ಅದಾಲತ್‌ನಲ್ಲಿ ಅಥವಾ ಮಧ್ಯಸ್ಥಿಕಾ ಕೇಂದ್ರಗಳಲ್ಲಿ ಯಾವುದೇ ಶುಲ್ಕವಿಲ್ಲದೆ, ಕಡಮೆ ವೆಚ್ಚದಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.  
ಜನತಾ ನ್ಯಾಯಾಲಯ ಕುರಿತ ಕೈಪಿಡಿ ಬಿಡುಗಡೆ ಮಾಡಿದ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ  ಎಚ್.ಎಂ. ನಂಜುಂಡಸ್ವಾಮಿ ಮಾತನಾಡಿ, ರಾಜಿ ಸಂಧಾನದ ಮೂಲಕ ಸ್ವಾಸ್ತ್ಯ ಸಮಾಜದ ನಿರ್ಮಾಣದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ಸಾರ್ವಜನಿಕರಿಗೆ ಶೃತಿ ಹಾಗೂ ಸ್ಮೃತಿಯ ಜಾಗೃತಿ ಮಾಡಬೇಕಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ್ ಜಿ. ಭಟ್, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಉಪಸ್ಥಿತರಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶ ಗುರುರಾಜ್ ಶಿರೋಳ್ ಸ್ವಾಗತಿಸಿದರು. ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ್ ರೈ ನಿರೂಪಿಸಿದರು.
ಬಗೆಹರಿದ 1600 ಪ್ರಕರಣ
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟಾರೆ 37,000 ಪ್ರಕರಣ ಬಾಕಿ ಇವೆ. ಸರಿಸುಮಾರು 20,000 ಕ್ರಿಮಿನಲ್ ಪ್ರಕರಣ, 17,000 ಸಿವಿಲ್ ಪ್ರಕರಣ ಇದ್ದು, ಈ ಪೈಕಿ 10,000 ಪ್ರಕರಣಗಳನ್ನು ಜನತಾ ನ್ಯಾಯಾಲಯದಲ್ಲಿ ಬಗೆಹರಿಸುವ ಗುರಿಹಾಕಿಕೊಳ್ಳಲಾಗಿದೆ ಎಂದು ನ್ಯಾ. ಶರಶ್ಚಂದ್ರ ಬ. ಅಂಗಡಿ ತಿಳಿಸಿದರು.
ಜನತಾ ನ್ಯಾಯಾಲಯ ಕಳೆದ ಒಂದು ತಿಂಗಳ ಅವಧಿಯಲ್ಲೇ 1,600 ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಬಗೆಹರಿಸಲಾಗಿದೆ. ಇದು ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಿದ ಬಗ್ಗೆ ಶಿವಮೊಗ್ಗ ನ್ಯಾಯಾಲಯದ ಲೋಕ್ ಅದಾಲತ್ ಪ್ರಶಂಸೆಗೆ ಪಾತ್ರವಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.