ಮತಯಾಚಿಸುವ ನೈತಿಕ ಹಕ್ಕು ಕಾಂಗ್ರೆಸಿಗಿಲ್ಲ: ಬಿಎಸ್ವೈ ಟೀಕೆ
ಕ.ಪ್ರ.ವಾರ್ತೆ, ಭದ್ರಾವತಿ, ಫೆ.11
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಯಾಚಿಸಲು ನೈತಿಕ ಹಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.
ಪಟ್ಟಣದ ಬಸವೇಶ್ವರ ಸಭಾಭವನದಲ್ಲಿ ಮಂಗಳವಾರ ನಡೆದ ಭಾಜಪ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹತ್ತಿರ ಬಂದಿರುವ ಹಿನ್ನೆಲೆಯಲ್ಲಿ ದೇಶದ ಏಕತೆ, ಅಖಂಡತೆ ಮತ್ತು ಸಮಗ್ರತೆಗೆ ಧಕ್ಕೆ ಬಂದಿರುವ ಬಗ್ಗೆ ಗಂಭೀರ ಚಿಂತನೆ ನಡೆಸುವ ಅಗತ್ಯವಿದೆ ಎಂದರು.
ಮೊದಲ ಬಾರಿಗೆ ದೇಶದ ಶೇ.70 ರಷ್ಟು ಜನ ನರೇಂದ್ರ ಮೋದಿ ಈ ದೇಶದ ಮುಂದಿನ ಪ್ರಧಾನಿಯಾಗಬೇಕೆಂಬ ನಿಲುವು ತಳೆದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ದೇಶದ ಸ್ವಾತಂತ್ರ್ಯ ಪುನಹ ಕಾಪಾಡುವ ಹೋರಾಟವಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ವಿಧಾನಸಭೆಯಲ್ಲಿ ಕೇವಲ 8 ಸ್ಥಾನ ಮತ್ತು ಲೋಕಸಭೆಯಲ್ಲಿ 7 ಸ್ಥಾನಗಳನ್ನು ಉಳಿಸಿಕೊಂಡಿದೆ. ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಅವರು ನುಡಿದರು.
ಸರಿಯಾಗಿ ತನಿಖೆ ಆಗುತ್ತಿಲ್ಲ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿ ಎದ್ದಿದೆ. ಅಭಿವೃದ್ಧಿಯಲ್ಲಿ 11ನೇ ಸ್ಥಾನದಲ್ಲಿದೆ. 224 ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಹಿನ್ನಡೆ ಸಾಧಿಸಿದೆ. 2013-14ರಲ್ಲಿ ರಾಜ್ಯದ ಅಭಿವೃದ್ಧಿ ಶೂನ್ಯ. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪತ್ರಿಕಾ ಪ್ರಕಟಣೆ ನೀಡಿದ್ದಾರೆ ಎಂದ ಅವರು, ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಸಾವಿನ ಬಗ್ಗೆ ಸರಿಯಾದ ತನಿಖೆ ನಡೆಯುತ್ತಿಲ್ಲ. ವೈಫಲ್ಯಗಳ ಬಗ್ಗೆ ಈ ರೀತಿಯ ಅನೇಕ ಉದಾಹರಣೆಗಳನ್ನು ನೀಡಬಹುದು ಎಂದು ಬಿಎಸ್ವೈ ಆಪಾದಿಸಿದರು.
ಚುನಾಯಿಸಿ: ರಾಜ್ಯದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮಾತನಾಡಿ, ಭದ್ರಾವತಿಯ ಮತದಾರರು ಲೋಕಸಭಾ ಚುನಾವಣೆಯಲ್ಲಿ ಯಾವತ್ತೂ ಭಾಜಪ ಪಕ್ಷವನ್ನು ಬೆಂಬಲಿಸಿದ್ದಾರೆ. ಮೋದಿ ಅವರು ಪ್ರಧಾನಿಯಾಗುವ ಸಚಿವ ಸಂಪುಟಕ್ಕೆ ಯಡಿಯೂರಪ್ಪ ಅವರನ್ನು ಕೇಂದ್ರ ಸಚಿವರನ್ನಾಗಿ ಕಳುಹಿಸಲು ಅವರನ್ನು ಶಿವಮೊಗ್ಗ ಲೋಕಸಭೆ ಸದಸ್ಯರನ್ನಾಗಿ ಚುನಾಯಿಸಬೇಕಾಗಿದೆ ಎಂದರು.
ಭದ್ರಾವತಿ ತಾಲೂಕು ಭಾಜಪ ಘಟಕದ ಅಧ್ಯಕ್ಷ ಎಂ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಭಾಜಪ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಮಾಜಿ ಮಹಿಳಾ ಆಯೋಗ ಸದಸ್ಯೆ ಮಂಜುಳಾ, ಭಾಜಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ, ಕಾರ್ಮಿಕ ಮುಖಂಡ ಎಸ್.ಎನ್. ಬಾಲಕೃಷ್ಣ, ಸುನಿತಾ, ವಿ.ಕದಿರೇಶ್, ಕೂಡ್ಲಿಗೆರೆ ಹಾಲೇಶ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಅರಳಿಹಳ್ಳಿ ಪ್ರಕಾಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮಂಜಪ್ಪ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

