ಶಿವಮೊಗ್ಗ

ಪೋಲಿಯೋ ಮುಕ್ತವಾಗಿಸಲು ಶ್ರಮಿಸೋಣ

Published On :

ಕ.ಪ್ರ.ವಾರ್ತೆ, ಸಾಗರ, ಜ.10  ಭಾರತ ದೇಶವನ್ನು ಪೋಲಿಯೋ ಮುಕ್ತವಾಗಿಸುವಲ್ಲಿ ಆರೋಗ್ಯ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಂಘಸಂಸ್ಥೆಗಳ ಪಾತ್ರ ಪ್ರಮುಖವಾಗಿದ್ದು, ಜ.19ರಂದು ನಡೆಯಲಿರುವ ಪಲ್ಸ್ ಪೋಲಿಯೋ ಲಸಿಕಾ ಶಿಬಿರವನ್ನು ಶೇ.100 ಯಶಸ್ವಿಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಉಪವಿಭಾಗಾಧಿಕಾರಿ ಡಾ. ಉದಯಕುಮಾರ್ ಶೆಟ್ಟಿ ಹೇಳಿದರು.
ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಪಲ್ಸ್ ಪೋಲಿಯೋ ಶಿಬಿರದ ತಾಲೂಕು ಚಾಲನಾ ಸಮಿತಿ ಸಭೆಯಲ್ಲಿ ಮಾತನಾಡಿ, ಭಾರತದಲ್ಲಿ ಕಳೆದೆರಡು ವರ್ಷದಿಂದ ಪೋಲಿಯೋ ಕಂಡು ಬಂದಿಲ್ಲ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಪಿ. ಅಚ್ಚುತ್ ಮಾತನಾಡಿ, ತಾಲೂಕಿನ ಪ್ರತಿ ಹೋಬಳಿ ವ್ಯಾಪ್ತಿಯ ಪಂಚಾಯ್ತಿ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆಲವು ಶಾಲೆಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ.
  ಇದರ ಜೊತೆಗೆ ರೈಲು ಹಾಗೂ ಬಸ್ಸು ನಿಲ್ದಾಣದಲ್ಲಿಯೂ ಕೇಂದ್ರಗಳನ್ನು ತೆರೆಯುವ ಮೂಲಕ ಅಲ್ಲಿಯೂ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದು ಹೇಳಿದರು.
ತಹಸೀಲ್ದಾರ್ ಸಾಜಿದ್ ಅಹ್ಮದ್ ಮುಲ್ಲ, ಸಿವಿಲ್ ಸರ್ಜನ್ ಡಾ. ಬಿ.ಜಿ.ಸಂಗಮ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಜಿ. ಜೋಯಪ್ಪ, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ರಮೇಶ್, ಜಿಲ್ಲಾ ಪರಿಷತ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಲಿಂಗಪ್ಪ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಗುರುಪ್ರಸಾದ್, ಡಾ.ಪುಟ್ಟಪ್ಪ ಬೇತೂರು, ಆನಂದರಾವ್ ಮೊದಲಾದವರು ಹಾಜರಿದ್ದರು.

ಪೋಲಿಯೋ  ನಿರ್ಮೂಲನೆಗೆ ಮುಂದಾಗಿ: ಡಾ. ನಾಗರಾಜ್
ಕ.ಪ್ರ.ವಾರ್ತೆ, ಶಿಕಾರಿಪುರ, ಜ.10
ದೇಶವನ್ನು ಸಂಪೂರ್ಣ ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸುವ ಅಂತಿಮ ಹಂತವಾಗಿ ಇದೇ 19 ರಂದು ನಡೆಯುವ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ತೊಡಗಿಸಿಕೊಂಡು ಯಶಸ್ಸಿಗೆ ಸಹಕರಿಸುವಂತೆ ತಾಲೂಕು ವೈದ್ಯಾಧಿಕಾರಿ ಡಾ. ನಾಗರಾಜ ನಾಯ್ಕ್ ಮನವಿ ಮಾಡಿದರು.
ಶುಕ್ರವಾರ ಪಟ್ಟಣದ ತಾಲೂಕು ಕಚೇರಿಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಯಶಸ್ಸಿಗಾಗಿ ನಡೆದ ಸರ್ಕಾರಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ 127 ಬೂತ್‌ಗಳನ್ನು ನಿರ್ಮಿಸಲಾಗಿದ್ದು, 508 ಸಿಬ್ಬಂದಿ ನಿಯೋಜಿಸಲಾಗಿದೆ. 283 ತಂಡಗಳನ್ನು ರಚಿಸಲಾಗಿದೆ ಎಂದರು.
ಅದ್ಯಕ್ಷತೆಯನ್ನು ವಹಿಸಿದ್ದ ತಹಸೀಲ್ದಾರ್ ಧರ್ಮೋಜಿರಾವ್ ಮಾತನಾಡಿ, ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತಮ್ಮ ಕರ್ತವ್ಯವನ್ನು ನಿಭಾಯಿಸಬೇಕಾಗಿದ್ದು, ಸರ್ಕಾರಿ ವಾಹನಗಳನ್ನು 19 ರಂದು ಕಡ್ಡಾಯವಾಗಿ ನೀಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿಗಳು ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಬಗ್ಗೆ ನಿರ್ದಾಕ್ಷ್ಯಿಣ್ಯ ಕ್ರಮಕ್ಕೆ ಸೂಚಿಸಿದ್ದು, ಈ ದಿಸೆಯಲ್ಲಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ಸಿಗೆ ಸಹಕರಿಸುವಂತೆ ತಿಳಿಸಿದರು.
ಬಿಇಒ ಸಿದ್ದಲಿಂಗಪ್ಪ, ಮೆಸ್ಕಾಂ ಎಇ ಚಿದಾನಂದ್, ಸಹಾಯಕ ಕೃಷಿ ನಿರ್ದೇಶಕ ಡಾ. ಪ್ರಭಾಕರ್, ಲೋಕೋಪಯೋಗಿ ಇಲಾಖೆ ಎಇಇ ರಮೇಶ್ ಬಾಣದ್, ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ. ಜಯಣ್ಣ, ಪುರಸಭಾ ಮುಖ್ಯಾಧಿಕಾರಿ ಮನೋಹರ್, ಸಿಡಿಪಿಒ ಲಿಂಗಾನಾಯ್ಕ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಿನ್ನಪ್ಪ, ದೇನ್ಯಾನಾಯ್ಕ್, ಕಂದಾಯ ಅಧಿಕಾರಿ ಮಂಜುನಾಥ್, ರಾಜೀವ್, ರೋಟರಿ ಅಧ್ಯಕ್ಷ ರಮೇಶ್ ಸಾನು ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.