ಶಿವಮೊಗ್ಗ

31ಕ್ಕೆ ದೆಹಲಿಯಲ್ಲಿ ರೈತ ಸಂಘದ ಧರಣಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಜ.17
ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮಘಟ್ಟ ವ್ಯಾಪ್ತಿಯ 10 ಜಿಲ್ಲೆಗಳ ಜನರಿಗೆ ತೊಂದರೆಯಾಗಲಿದ್ದು, ಈ ವರದಿಯನ್ನು ಸಮಗ್ರವಾಗಿ ಪುನರ್ ಪರಿಶೀಲಿಸಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಒತ್ತಾಯಿಸಿದ್ದಾರೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿ ಜಾರಿಗೆ ಈಗಾಗಲೇ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದ್ದು, ಕೇವಲ ಬಾಯಿ ಮಾತಿನಲ್ಲಿ ವರದಿ ಅನುಷ್ಠಾನಗೊಳಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನು ವಿರೋಧಿಸಿ ಜ.31 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ. ಈ ಧರಣಿಯಲ್ಲಿ ರಾಜ್ಯದ 500 ರೈತರು ಸೇರಿದಂತೆ ಪಶ್ಚಿಮಘಟ್ಟ ವ್ಯಾಪ್ತಿಯ 50 ಸಾವಿರ ರೈತರು ಭಾಗವಹಿಸಲಿದ್ದಾರೆ ಎಂದರು.
ಟೀಕೆ:  ಕಸ್ತೂರಿ ರಂಗನ್ ವರದಿ ಜಾರಿಯಾದರೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ದೊಡ್ಡ ತೊಡಕಾಗಲಿದೆ. ಈ ಬಗ್ಗೆ ಅರಿವಿಲ್ಲದಂತೆ ಸರ್ಕಾರ ವರ್ತಿಸುತ್ತಿರುವುದು ಸರಿ ಅಲ್ಲ. ಕೇಂದ್ರ ಸರ್ಕಾರವು 2008-11ರ ಅವಧಿಯಲ್ಲಿ ಈವರೆಗೆ 1,82,389 ಹೆಕ್ಟೇರ್ ಪ್ರದೇಶವನ್ನು ಬೇರೆ ಚಟುವಟಿಕೆಗೆ ಡಿನೋಟಿಫೈ ಮಾಡಿಕೊಟ್ಟಿದೆ. ಮತ್ತೊಂದೆಡೆ ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗಿದೆ. ಕಂಪನಿಗಳಿಗೆ ಭೂಮಿ ಕೊಡಲು ಮುಂದಾಗಿರುವ ಸರ್ಕಾರ ಸಾಮಾನ್ಯ ರೈತರನ್ನು ಕಡೆಗಣಿಸಿದೆ. ಇದಕ್ಕಾಗಿ ವರದಿ ಜಾರಿಗೊಳಿಸಿ ಆದಿವಾಸಿಗಳ ಎತ್ತಂಗಡಿಗೆ ಮುಂದಾಗಿದೆ ಎಂದು ಟೀಕಿಸಿದರು.
ಅವಕಾಶ ನೀಡಬೇಕು:  ಅರಣ್ಯ ಹಕ್ಕು ಕಾಯ್ದೆ ಸಮರ್ಪಕವಾಗಿ ಜಾರಿಯಾಗದೇ ಆದಿವಾಸಿಗಳಿಗೆ ಭೂಮಿಯ ಹಕ್ಕು ಸಿಕ್ಕಿಲ್ಲ. ಈ ಕಾಯ್ದೆ ತಿದ್ದುಪಡಿ ಮಾಡಿ 75 ವರ್ಷಗಳ ದಾಖಲೆ ಬದಲಾಗಿ 25 ವರ್ಷಗಳ ದಾಖಲೆ ಸಲ್ಲಿಸಲು ಅವಕಾಶ ನೀಡಬೇಕು. ಕೇಂದ್ರ ಪರಿಸರ ಸಚಿವ ವೀರಪ್ಪ ಮೊಯ್ಲಿ ಅವರು ರಾಜ್ಯದವರೇ ಆಗಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅರಣ್ಯ ಹಕ್ಕು ಕಾಯ್ದೆ ಪ್ರಕಾರ ಭೂಮಿ ಕೊಡಲು ಗ್ರಾಮ ಸಭೆಗಳಿಗೆ ಅಧಿಕಾರ ಇದೆ. ಆದರೆ, ಇದಕ್ಕೆ ತಿದ್ದುಪಡಿ ತದು ಜಿಲ್ಲಾಧಿಕಾರಿಯವರಿಗೆ ಅಧಿಕಾರ ಕೊಡಲು ನಿರ್ಧರಿಸಿರುವುದು ಅನಾಹುತಕಾರಿ ಬೆಳವಣಿಗೆ ಎಂದರು. ಸರ್ಕಾರದ ಬೇಜವಾಬ್ದಾರಿ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯ ಎಂದು ಅವರು ಹೇಳಿದರು. ಗೋಷ್ಠಿಯಲ್ಲಿ ಸಂಘದ ಜಿಲ್ಲಾ ಸಂಚಾಲಕ ಶಿವಶಂಕರ್, ಶೇಖರ್, ವೇಲು ಮತ್ತಿತತರರು ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.