ಶಿವಮೊಗ್ಗ

ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಹಕರಿಸಿ

Published On :

ಕ.ಪ್ರ.ವಾರ್ತೆ ,  ಶಿವಮೊಗ್ಗ  ,  ಜ. 26
ರಾಷ್ಟ್ರೀಯ ಸ್ವಾಸ್ಥ್ಯಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ತಮ್ಮ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಸ್ವಾಸ್ಥ್ಯಬಿಮಾ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿದ ಅವರು, ಬಿಪಿಎಲ್ ಕಾರ್ಡ್ ಹೊಂದಿರುವ ಬಡತನ ರೇಖೆಗಿಂತ ಕೆಳಗಿನ 3,28,158 ಕುಟುಂಬಗಳು ಹಾಗೂ 2013 ಮಾರ್ಚ್‌ನಲ್ಲಿ ಕನಿಷ್ಠ 15 ದಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರು ಈ ಯೋಜನೆ ವ್ಯಾಪ್ತಿಗೆ ಬರುತ್ತಿದ್ದು, ಈ ಎಲ್ಲರಿಗೂ ಯೋಜನೆಯ ಅನುಕೂಲ ಆಗಬೇಕು. ಈ ನಿಟ್ಟಿನಲ್ಲಿ ಆರೋಗ್ಯಾಧಿಕಾರಿಗಳು ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಐಸಿಐಸಿಐ ಲೊಂಬರ್ಡ್ ಜನರಲ್ ಇನ್ಶೂರೆನ್ಸ್ ಕಂಪನಿ ಸಹಯೋಗದಲ್ಲಿ ಕಾರ್ಮಿಕ ಇಲಾಖೆ ಈ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ವ್ಯಾಪ್ತಿಗೆ ಬರುವ ಎಲ್ಲ ಇಲಾಖೆಗಳು ಅನುಷ್ಠಾನಕ್ಕೆ ಸಹಕರಿಸಬೇಕು ಎಂದರು.
ಫೆಬ್ರವರಿ ಮೊದಲ ವಾರದಿಂದ 90 ದಿನಗಳ ಕಾಲ ಪ್ರತಿ ಗ್ರಾಮದಲ್ಲೂ ನೋಂದಣಿ ಕಾರ್ಯಕ್ರಮ ನಡೆಯಲಿದೆ. ಮೊದಲ ಹಂತದಲ್ಲಿ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನಲ್ಲಿ ನೋಂದಣಿ ನಡೆಯಲಿದೆ. ನಂತರ ಎಲ್ಲ ತಾಲೂಕುಗಳಲ್ಲೂ ನಡೆಯಲಿದೆ ಎಂದರು.
ಜಿಲ್ಲಾ ಪಂಚಾಯ್ತಿ ಸಿಇಓ ಸಸಿಕಾಂತ್ ಸೆಂಥಿಲ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ. ವಿಶ್ವನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಿವಣ್ಣರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಕಾಂತಮ್ಮ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಾಜಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.