ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆ ಜನರಿಗೆ ತಲುಪಿಸಿ
ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ 8 ತಿಂಗಳೊಳಗೆ ಜನತೆಗೆ ಅದ್ಭುತವಾದ ಕೊಡುಗೆ ನೀಡಿರುವುದನ್ನು ಪ್ರತಿ ಮನೆ ಮನೆಗೆ ಮುಟ್ಟಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡುವ ಮೂಲಕ ಕೋಮುವಾದಿ ಬಿಜೆಪಿ ವ್ಯವಸ್ಥಿತ ಸಂಚನ್ನು ಭಗ್ನಗೊಳಿಸುವಂತೆ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಎಂ.ಜಯಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.
ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜಯಣ್ಣ, ಭಾರತದಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗುತ್ತಿದೆ. ಕೋಮುವಾದಿ ಪ್ರಭಾವವನ್ನು ತಾಕತ್ತಿನಿಂದ ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಬೇಕಿದೆ. ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರು ಎಲ್ಲರೂ ಒಂದಾಗಬೇಕಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಮಾಡಿದ ಪಕ್ಷ ಕಾಂಗ್ರೆಸ್ನಿಂದ ಮಾತ್ರ ಸರ್ವರ ಏಳಿಗೆ ಸಾಧ್ಯವೆಂದು ಹೇಳಿದರು.
ಕಾಂಗ್ರೆಸ್ ಗೆಲ್ಲಿಸಲು ಮನವಿ: ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಟಿ. ಜಗದೀಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 8 ತಿಂಗಳೊಳಗೆ ಅನ್ನಭಾಗ್ಯ, ಕ್ಷೀರಭಾಗ್ಯ ಮತ್ತು ಅಲ್ಪಸಂಖ್ಯಾತರಿಗೆ ಮಾಹಿತಿ ಕೇಂದ್ರವನ್ನು ತೆರೆದಿದೆ. ಕೇಂದ್ರ ಸರ್ಕಾರ ಯಾರೂ ಹಸಿವಿನಿಂದ ನರಳಬಾರದೆಂದು ಆಹಾರ ಭದ್ರತೆ ಯೋಜನೆ ಜಾರಿಗೆ ತಂದಿದೆ.
ಇಂತಹ ಮಹತ್ತರ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವಂತೆ ಮನವಿ ಮಾಡಿದರು.
ಸವಲತ್ತು ಸದ್ಬಳಕೆಯಾಗಲಿ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಡಿ.ಎಸ್. ಸೈಯದ್ ವಲಿ ಖಾದ್ರಿ ಮಾತನಾಡಿ, ಅಲ್ಪಸಂಖ್ಯಾತರು ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಬಲಿಷ್ಠರಾಗಬೇಕಿದೆ. ಸರ್ಕಾರದ ವಿವಿಧ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವ ಉದ್ದೇಶದಿಂದ ನಗರದ ಏರೋಪ್ಲೇನ್ ಬಿಲ್ಡಿಂಗ್ನಲ್ಲಿ ಮಾಹಿತಿ ಕೇಂದ್ರವನ್ನು ತೆರೆಯಲಾಗಿದೆ.
15 ಅಂಶಗಳ ಕಾರ್ಯಕ್ರಮಗಳ ಯೋಜನೆಯಡಿ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡು ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಅವರು ತಿಳಿಸಿದರು.
ನೇಮಕಕ್ಕೆ ಒತ್ತಾಯ: ಕೆಪಿಎಸ್ಸಿ ವತಿಯಿಂದ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉಚಿತವಾಗಿ ಹೈದರಾಬಾದ್ನಲ್ಲಿ ತರಬೇತಿ ಆರಂಭಿಸಲಾಗುವುದು. ಇದರಲ್ಲಿ ನೂರು ಅಭ್ಯರ್ಥಿಗಳು ತರಬೇತಿ ಪಡೆಯಬಹುದು. ಪ್ರತಿ ತಿಂಗಳು 1500 ಸ್ಟೈಫಂಡ್ ಕೂಡ ನೀಡಲಾಗುವುದು.
ರಾಜ್ಯ ಸರ್ಕಾರದ ಮಹತ್ತರ ಯೋಜನೆ ಇಂದಿರಾ ಆವಾಜ್ನಲ್ಲಿ ಬಡವರಿಗೆ ಮನೆ, ಗ್ರಾಮೀಣ ರೋಜ್ಗಾರ್ ಯೋಜನೆಯಲ್ಲಿ ದೊರಕುವ ಹಲವಾರು ತರಬೇತಿಗಳ ಮಾಹಿತಿ ಮಾಹಿತಿ ಕೇಂದ್ರದಲ್ಲಿ ಪಡೆಯುವ ಹಕ್ಕನ್ನು ಸರ್ಕಾರ ಅಲ್ಪಸಂಖ್ಯಾತರಿಗೆ ನೀಡಿದೆ ಎಂದು ಸರ್ಕಾರದ ಕೊಡುಗೆ ವಿವರಿಸಿ ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಲ್ಪಸಂಖ್ಯಾತರಿಗೆ ಮಾಹಿತಿ ನೀಡಲು ಅಲ್ಪಸಂಖ್ಯಾತ ಅಧಿಕಾರಿಯನ್ನು ನೇಮಕ ಮಾಡುವಂತೆ ಒತ್ತಾಯಿಸಿದರು.
ಕೋಮುವಾದಿ ಬಿಜೆಪಿ ನರೇಂದ್ರ ಮೋದಿಯನ್ನು ಮುಂದಿನ ಪ್ರಧಾನಿಯನ್ನಾಗಿ ಈಗಾಗಲೇ ಬಿಂಬಿಸುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಮೋದಿ ಪ್ರಧಾನಿಯಾಗಲು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಜಿ.ಶ್ರೀನಿವಾಸ್, ಉಪಾಧ್ಯಕ್ಷ ಶಬ್ಬೀರ್ ಅಹಮದ್, ಅಲ್ಲಾಭಕ್ಷಿ, ಪರಿಶಿಷ್ಟ ಜಾತಿ ಪರಿಶಿಷ್ಟ ವಿಭಾಗದ ಅಧ್ಯಕ್ಷ ಓ.ಶಂಕರ್, ಸೈಯದ್ ಖುದ್ದೂಸ್, ಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ ಕುಮಾರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

