ಸ್ವಾಸ್ಥ್ಯ ಬಿಮಾ ಸಮರ್ಪಕ ಅನುಷ್ಠಾನವಾಗಲಿ: ಡಿಸಿ
ಕ.ಪ್ರ.ವಾರ್ತೆ, ಶಿವಮೊಗ್ಗ, ಜ.31
ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಅನುಷ್ಠಾನಕ್ಕೆ ತರಲು ಜಿಲ್ಲಾಡಳಿತ ಮುಂದಾಗಿದೆ.
ಶುಕ್ರವಾರ ಯೋಜನೆ ಹಾಗೂ ಜಿಲ್ಲೆಯಲ್ಲಿ ಅನುಷ್ಠಾನದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಸಮಾಜದ ಅಸಂಘಟಿತ, ನಿಮ್ನ ಹಾಗೂ ಕೆಳವರ್ಗದ ಬಡಕುಟುಂಬಗಳ ಸದಸ್ಯರ ಆರೋಗ್ಯ ರಕ್ಷಣೆಗೆ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ವರದಾನವಾಗಿದೆ. ಕಳೆದ ಸಾಲಿನಲ್ಲಿ ಈ ಯೋಜನೆ ಅನುಷ್ಠಾನದಲ್ಲಿ ಎದುರಾದ ಅನೇಕ ಸಮಸ್ಯೆಗಳನ್ನು ಮಾರ್ಪಡಿಸಿ ವ್ಯವಸ್ಥಿತವಾಗಿ ಅನಷ್‌ಠಾನಗೊಳಿಸಲಾಗಿದೆ ಎಂದರು.
ಈ ಯೋಜನೆಯಡಿ ಉದ್ಯೋಗ ಖಾತ್ರಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಕನಿಷ್ಠ 15 ದಿನಗಳಿಗೆ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸಿರುವ 50,047 ಕಾರ್ಮಿಕ ಕುಟುಂಬಗಳು ಹಾಗೂ 2013ರ ಅ.8 ರೊಳಗಾಗಿ ಹೆಸರು ನೋಂದಾಯಿಸಿ, ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ್ ಪಡೆದಿರುವ 2,78,111 ಕುಟುಂಬಗಳು ಸೇರಿದಂತೆ ಒಟ್ಟು 3,28,158 ಕುಟುಂಬಗಳು ಯೋಜನೆಯ ವ್ಯಾಪ್ತಿಗೊಳಪಡಲಿವೆ. ಒಟ್ಟಾರೆ ಜಿಲ್ಲೆಯ ಗ್ರಾಮೀಣ ಭಾಗದ ಶೇ.90 ರಷ್ಟು ಮಂದಿ ಫಲಾನುಭವಿಗಳಾಗಲಿದ್ದಾರೆ ಎಂದು ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾತನಾಡಿ, ಫೆ.9 ರಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಹಾಗೂ ಫೆ.11 ರಿಂದ ಸಾಗರ ತಾಲೂಕಿನಲ್ಲಿ ಈ ಯೋಜನೆಯ ನೋಂದಣಿ ಕಾರ್ಯ ಆರಂಭಗೊಳ್ಳಲಿದೆ. ನೋಂದಣಿ ಕಾರ್ಯಕ್ಕೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಯಲ್ಲಿ ಪ್ರಕಟಿಸಲಾಗುತ್ತದೆ. ಒಟ್ಟಾರೆ ಜಿಲ್ಲೆಯ 7 ತಾಲೂಕುಗಳ 268 ಗ್ರಾಪಂ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ನೋಂದಣಿ ಕಾರ್ಯ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ ಐಸಿಐಸಿಐ ಲಾಂಬಾರ್ಡ್ ಜನರಲ್ ಇನ್ಶೂರೆನ್ಸ್ ಕಂಪನಿ ಈ ಕಾರ್ಯಕ್ಕಾಗಿ ನೇಮಕವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

