ಕಾಂಗ್ರೆಸ್ ಸರ್ಕಾರ ವಿಫಲ: ಈಶ್ವರಪ್ಪ ಕಿಡಿ
ಶಿವಮೊಗ್ಗ: ವರ್ಷದಿಂದ ಆಳ್ವಿಕೆ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ರಾಜ್ಯದಲ್ಲಿ ಸರ್ಕಾರ ಬದುಕಿದೆಯೇ, ಸತ್ತಿದೆಯೇ ಎಂದೇ ಅರ್ಥವಾಗುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು.
ಪರಿಷತ್ತಿನ ವಿಪಕ್ಷ ನಾಯಕರಾಗಿ ಆಯ್ಕೆಯಾದ ನಂತರ ಶನಿವಾರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ್ದ ಅವರು, ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ರಾಜ್ಯದಲ್ಲಿ ಬರಗಾಲ ಆವರಿಸಿದೆ. ಯಾವೊಬ್ಬ ಉಸ್ತುವಾರಿ ಸಚಿವರು ಸಹ ಜಿಲ್ಲಾ ಪ್ರವಾಸ ಕೈಗೊಂಡಿಲ್ಲ. ಗಂಜಿ ಕೇಂದ್ರ, ಗೋಶಾಲೆ, ಆರಂಭಿಸುವುದಕ್ಕೆ ಕ್ರಮ ಕೈಗೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಜನತೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರೀಯ: ಪೊಲೀಸರ ಮೇಲೆ ಕಾಂಗ್ರೆಸ್ ಶಾಸಕರು ಮತ್ತು ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಇವರ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರೀಯವಾಗಿದೆ ಎಂದು ದೂರಿದರು.
ಕಳೆದ 20 ವರ್ಷಗಳ ವಿಧಾನಸಭೆಯ ಕಲಾಪದಲ್ಲಿ ಇಂಥ ಸರ್ಕಾರವನ್ನು ನಾನೆಂದೂ ನೋಡಲಿಲ್ಲ ಎಂದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ 4,182 ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಇದರಲ್ಲಿ 132 ಆರೋಪಿಗಳಿಗೆ ಮಾತ್ರ ಶಿಕ್ಷೆಯಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರ ರೈತರನ್ನು ಹಾಗೂ ಹೆಣ್ಣು ಮಕ್ಕಳನ್ನು ಕಡೆಗಣಿಸಿರುವುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವನ್ನು ಎಚ್ಚರಿಸುವ ದಿಸೆಯಲ್ಲಿ ಹೋರಾಟ ರೂಪಿಸುತ್ತೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಸಂಘಟಿಸಿ ಜನತೆಗೆ ಆಗಬೇಕಾಗಿರುವ ಕೆಲಸಗಳ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.
ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಆರಗ ಜ್ಞಾನೇಂದ್ರ, ನಗರಸಭೆ ಮಾಜಿ ಅಧ್ಯಕ್ಷ ಎನ್.ಜೆ. ರಾಜಶೇಖರ್, ಸೂಡಾ ಮಾಜಿ ಅಧ್ಯಕ್ಷ ಜ್ಞಾನೇಶ್ವರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ, ಡಿ.ಎಸ್. ಅರುಣ್ ಇತರರು ಇದ್ದರು.
ಗೂಂಡಾಗಳಿಗೆ ರಕ್ಷಣೆ: ಪೊಲೀಸರ ಮೇಲೆ ಹಲ್ಲೆ ನಡೆಸಿದ ಗೂಂಡಾಗಳನ್ನು ರಕ್ಷಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ, ಮಾನ, ಮರ್ಯಾದೆ ಯಾವುದೂ ಇಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಕಟು ಟೀಕೆ ಮಾಡಿದರು.
ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದು ನಾಲ್ಕು ದಿನ ಕಳೆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಸರ್ಕಾರದ ಕುಮ್ಮಕ್ಕಿನಿಂದಲೇ ಪೊಲೀಸರು ನಿರ್ಭಯವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಆರೋಪಿಗಳು ಕಾನೂನಿನ ಬಲೆಯಿಂದ ತಪ್ಪಿಸಿ ಕೊಂಡಿದ್ದಾರೆ. ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಪುಂಡರನ್ನು ಬಂಧಿಸಲು, ಅವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ಸರಿಯಲ್ಲ, ಜನ ಇದನ್ನು ಒಪ್ಪುವುದಿಲ್ಲ ಎಂದರು.
ಪೊಲೀಸರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಒತ್ತಾಯಿಸಿ ನಮ್ಮ ಹೋರಾಟ ಸದನದ ಒಳಗೆ, ಸದನದ ಹೊರಗೆ ಮುಂದುವರಿಯಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

