ಕೂಡಿಗೆ ಗೋಲಿಬಾರ್ ಖಂಡಿಸಿ ರೈತಸಂಘ ಸದಸ್ಯರ ಪ್ರತಿಭಟನೆ
ಶಿವಮೊಗ್ಗ: ಕೂಡಿಗೆಯಲ್ಲಿ ರೈತರ ಮೇಲಿನ ಗೋಲಿಬಾರ್ ಘಟನೆ ಖಂಡಿಸಿ ರೈತಸಂಘದ ಪ್ರತಿನಿಧಿಗಳು ಸೋಮವಾರ ನಗರದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆ ಖಂಡಿಸಿ ರೈತರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಇವರ ಮೇಲೆ ಪೊಲೀಸರು ವಿನಾಕಾರಣ ಹಲ್ಲೆ ನಡೆಸಿದರಲ್ಲದೇ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲು ಮುಂದಾದರು. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದಾಗ ಏಕಾಏಕಿ ರೈತರ ಮೇಲೆ ಲಾಠಿ ಪ್ರಹಾರ ನಡೆಸಿದರಲ್ಲದೇ ಗೋಲಿಬಾರ್ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರು ಅಮಾಯಕ ರೈತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ರಾಜ್ಯದಲ್ಲಿ ಪದೇಪದೇ ರೈತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ರಾಯಚೂರಿನಲ್ಲಿ ಉಷ್ಣ ವಿದ್ಯುತ್ ಸ್ಥಾವರದಿಂದ ಸಾವಿರಾರು ಎಕರೆ ರೈತರ ಭೂಮಿ ಹಾಳಾಗುತ್ತದೆ. ಹಾರುಬೂದಿ ಸ್ಥಳೀಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ, ಬೆಳೆ ಇಳುವರಿ ಕಡಿಮೆಯಾಗುತ್ತದೆ ಎಂದಿದ್ದಾರೆ.
ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸ್ಥಳೀಯರ ತೀವ್ರ ವಿರೋಧವಿದೆ. ಅಲ್ಲದೇ ಹಾರುಬೂದಿಯಿಂದ ನಿವಾಸಿಗಳ ಆರೋಗ್ಯ ಹಾಳಾಗುತ್ತಿದೆ ಎಂದು ಈಗಾಗಲೇ ವಿಜ್ಞಾನಿಗಳು ವರದಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಉದ್ದೇಶಿತ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿದರು. ಪೊಲೀಸರು ಗೋಲಿಬಾರ್ ಮಾಡಿದ್ದು ಖಂಡನೀಯ. ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತಸಂಘದ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ್, ಮುಖಂಡ ವೀರೇಶ್, ಗಂಗಾಧರಪ್ಪ ಗೌಡ, ಯಶವಂತರಾವ್ ಘೋರ್ಪಡೆ ಸೇರಿದಂತೆ ಹಲವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

