ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
ಸಾಗರ: ರಾಜ್ಯದಲ್ಲಿ ನಿರಂತರ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಮಂಗಳವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಭಾರ್ಗವಿ, ರಾಜ್ಯದಲ್ಲಿ ಮಹಿಳೆಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ದೌರ್ಜನ್ಯ ಎಸಗಿದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಹಿಳೆಯರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡುತ್ತಿಲ್ಲ. ಸೌದಿ ಅರೇಬಿಯಾದಲ್ಲಿ ಮಹಿಳೆಯ ಮೇಲೆ ದೌರ್ಜನ್ಯ, ಅತ್ಯಾಚಾರ ಕೃತ್ಯ ಎಸಗಿದವರನ್ನು ಸಾರ್ವಜನಿಕವಾಗಿ ಕಲ್ಲು ಹೊಡೆದು ಸಾಯಿಸುವ ಪರಿಪಾಠವಿದೆ. ಅದನ್ನು ನಮ್ಮಲ್ಲೂ ಜಾರಿಗೆ ತರಬೇಕು. ಇದರಿಂದ ಅತ್ಯಾಚಾರಿಗಳು ಮಹಿಳೆಯರ ತಂಟೆಗೆ ಹೋಗಲು ಹೆದರುತ್ತಾರೆ. ರಾಜ್ಯ ಸರ್ಕಾರ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಎಪಿವಿಪಿ ಮುಖಂಡ ಶ್ರೀಕರ ಭಟ್ ಮಾತನಾಡಿ, ಅತ್ಯಾಚಾರ ಪ್ರಕರಣಗಳ ಕುರಿತು ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಇದರ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ರೆ ಮಾಡುತ್ತಿರುತ್ತಾರೆ. ರಾಜ್ಯ ಸರ್ಕಾರಕ್ಕೆ ಮಹಿಳಾ ಸುರಕ್ಷತೆ ಬಗ್ಗೆ ಯಾವುದೆ ಕಾಳಜಿ ಇಲ್ಲ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯರ ಕುಟುಂಬವನ್ನು ಗೃಹ ಸಚಿವರು ಖುದ್ದು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳುವ ಕೆಲಸ ಮೊದಲು ಆಗಬೇಕು ಎಂದು ಒತ್ತಾಯಿಸಿದರು.
ಅತ್ಯಾಚಾರ ಕುರಿತು ಸದನದಲ್ಲಿ ಕೇವಲ ಚರ್ಚೆ ನಡೆಸುವುದು, ಕಠಿಣ ಕಾನೂನು ಜಾರಿಗೆ ತರುತ್ತೇವೆ ಎಂದು ಆಶ್ವಾಸನೆ ನೀಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಸ್ತುತ ಇರುವ ಕಾನೂನಿಗೆ ತಿದ್ದುಪಡಿ ತಂದು ಮಹಿಳೆಯರ ರಕ್ಷಣೆ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಲು ಪ್ರಬಲ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿನಿ ವಿಭಾ, ಮೇಘಾ, ಸಹನಾ, ಉಷಾ, ಶ್ವೇತಾ, ವಿನುತಾ, ಅನ್ನಪೂರ್ಣ, ಎಪಿವಿಪಿ ಜಿಲ್ಲಾ ಸಂಚಾಲಕ ಪ್ರಕಾಶ್, ಪ್ರಮುಖರಾದ ಕೆ.ವಿ.ಪ್ರವೀಣಕುಮಾರ್, ಪವನ್, ರಾಜು ಮಡಿವಾಳ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

