ಶಿವಮೊಗ್ಗ

ಸಕಾಲ ಅನುಷ್ಠಾನಕ್ಕೆ ಗ್ರಾಪಂಗಳ ಉದಾಸೀನ

ಸಕಾಲ ಅನುಷ್ಠಾನಕ್ಕೆ ಗ್ರಾಪಂಗಳ ಉದಾಸೀನ
Published On :

-ಶ್ರೀಕಾಂತ ಭಟ್
ಶಿವಮೊಗ್ಗ:
ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ಜಾರಿಗೆ ಬಂದ ಸಕಾಲ ಸೇವೆ ವ್ಯವಸ್ಥೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಕಾಲ ಸರಾಗ ನಿರ್ವಹಣೆಗೆ ವ್ಯವಸ್ಥೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದ 5627 ಗ್ರಾಮ ಪಂಚಾಯಿತಿಗಳಲ್ಲಿ 2012ರ ಏಪ್ರಿಲ್ 2ರಿಂದ ಸಕಾಲ ಸೇವೆ ಜಾರಿಯಲ್ಲಿದೆ. ಸಕಾಲದಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ ಸಂಬಂಧಿಸಿದಂತೆ 13 ಸೇವೆ ಒದಗಿಸುವಂತೆ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿತ್ತು.
ಹಾಗೆಯೇ ಸಕಾಲದಡಿ ಸೇವೆಗಳನ್ನು ಸಾರ್ವಜನಿಕರಿಗೆ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಗೊತ್ತುಪಡಿಸಿದ ಅಧಿಕಾರಿಯಾಗಿ ಮತ್ತು ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ಪ್ರಾಧಿಕಾರಿಯನ್ನಾಗಿ ಹಾಗೂ ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ(ಗ್ರಾಮ ಪಂಚಾಯಿತಿ ಆಡಳಿತ ವಿಷಯಗಳನ್ನು ನಿರ್ವಹಿಸುವವರು) ಮೇಲ್ಮನವಿ ಪ್ರಾಧಿಕಾರವನ್ನಾಗಿ ಮಾಡಲಾಗಿದೆ.
ಅಸಮಾಧಾನ: ಜೂನ್ 5ರಂದು ನಡೆದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಆಡಳಿತ ಸುಧಾರಣೆ)ಯವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸಕಾಲ ಯೋಜನೆಯಡಿ ಬಾಕಿ ಇರುವ ಅರ್ಜಿಗಳು ಮತ್ತು ಮೇಲ್ಮನವಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಿಯಾದ ರೀತಿಯಲ್ಲಿ ಯೋಜನೆ ಅನುಷ್ಠಾನವಾಗದ ಬಗ್ಗೆ ಬೇಸರ ವ್ಯಕ್ತಪಡಿಸುವ ಜತೆಗೆ ಈ ಬಗ್ಗೆ ಜರೂರಾಗಿ ಕ್ರಮ ಕೈಗೊಂಡು ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿಯವರು ಆದೇಶವೊಂದನ್ನು ಹೊರಡಿಸಿ ಸಕಾಲ ಸೇವೆಗಳ ಅಧಿನಿಯಮ- 2011ನ್ನು ಪರಿಣಾಮಕಾರಿಯಾಗಿ ಹಾಗೂ ಕ್ರಮಬದ್ಧವಾಗಿ ಜಾರಿಗೊಳಿಸಲು ತಮ್ಮ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ಕಾರ್ಯದರ್ಶಿ(ಅಭಿವೃದ್ಧಿ), ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ ಆದೇಶಿಸಿದ್ದಾರೆ.
ನಿಗದಿಪಡಿಸಿರುವ ಅವಧಿಯೊಳಗೆ ಗ್ರಾಪಂ ಸಕಾಲ ಅಧಿನಿಯಮದಡಿ ಸೇವೆ ಒದಗಿಸಬೇಕು, ಸಕಾಲ ಸೇವೆಯಡಿ ಅರ್ಜಿ ತಿರಸ್ಕರಿಸಿದರೆ ಯಾವ ಕಾರಣಕ್ಕಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂಬುದರ ಬಗ್ಗೆ ವಿಳಂಬ ಮಾಡದೆ ಅರ್ಜಿದಾರರಿಗೆ ಹಿಂಬರಹ ನೀಡಬೇಕು. ಸಂಬಂಧಪಟ್ಟ ತಾಪಂ ಕಾರ್ಯನಿರ್ವಾಹಕ ಅಧಿಕಾರಿಯನ್ನು ಸಕ್ಷಮ ಪ್ರಾಧಿಕಾರಿಯನ್ನಾಗಿ ಮಾಡಲಾಗಿದ್ದು, ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ವಿಲೇ ಮಾಡಲೇಬೇಕು.
ಮುಖ್ಯವಾಗಿ ಸಕಾಲ ಸೇವೆಗಳ ನಿಯಮಗಳು 2012ರ ನಿಯಮ 16ರಂತೆ ಹೆಚ್ಚು ವಿಳಂಬ, ವಿಫಲತೆ ಹೊಂದಿರತಕ್ಕಂತಹ ಸರ್ಕಾರಿ ನೌಕರರಿಗೆ ಇ-ಮೇಲ್ ಮೂಲಕ ಕಾರಣ ಕೇಳಿ ನೋಟಿಸ್ ನೀಡುವಂತೆ, ಉತ್ತರ ಸಮಪರ್ಕವಾಗದೇ ಇದ್ದ ಸಂದರ್ಭದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಸಕ್ಷಮ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರ ತನ್ನ ಸಮಯ ಮಿತಿಯನ್ನು ಮೀರಿದ್ದರೆ ಅವರಿಗೂ ಇ-ಮೇಲ್ ಮುಖಾಂತರ ಕಾರಣ ಕೇಳುವ ನೋಟಿಸ್ ನೀಡಬೇಕು, ತಿಂಗಳ ಅಂತ್ಯಕ್ಕೆ ಇ ವಿಚಾರವನ್ನು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗೆ ವರದಿ ಮಾಡುವಂತೆ ತಿಳಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಕಡ್ಡಾಯವಾಗಿ ಸಕಾಲ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರತಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಪರಿಶೀಲಿಸಲೂ ಸೂಚಿಸಲಾಗಿದೆ.

ವಸ್ತುಸ್ಥಿತಿ
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಕಾಲ ನಿಖರವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂಬುದನ್ನು ಅಧಿಕಾರಿಗಳು ಒಪ್ಪಿಕೊಳ್ಳುತ್ತಾರೆ. 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಹಿರಿಯ ಅಧಿಕಾರಿಗಳು, ಸಕಾಲದಡಿ ಅರ್ಜಿ ಸಲ್ಲಿಸಿದ ಗ್ರಾಮೀಣ ಜನರು ಮೇಲ್ಮನವಿ ಹೋಗಲು ಹಿಂದೇಟು ಹಾಕುತ್ತಾರೆ. ಹೀಗಾಗಿ ಹೇಗಿದ್ದರೂ ಮೇಲ್ಮನವಿ ಹೋಗುವುದಿಲ್ಲ ಎಂಬ ಕಾರಣಕ್ಕೆ ಗ್ರಾಪಂ .ಮಟ್ಟದಲ್ಲಿ ಸಕಾಲ ಸೌಲಭ್ಯ ಬಳಕೆಯಾಗುತ್ತಿಲ್ಲ ಎಂದು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.