ಪೌರ ಕಾರ್ಮಿಕರ ಕಾಯಂಗೆ ಆಗ್ರಹ
ಕ.ಪ್ರ. ವಾರ್ತೆ, ಶಿವಮೊಗ್ಗ, ಜೂ.19
ಹೊರಗುತ್ತಿಗೆ ಅಡಿ ನೇಮಕ ಮಾಡಿಕೊಂಡಿರುವ ಶಿವಮೊಗ್ಗ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಗುರುವಾರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಗುರುವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿತು.
ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ಪೌರ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಅರ್ಪಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮಹಾನಗರ ಪಾಲಿಕೆಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಸುಮಾರು 500ಕ್ಕೂ ಹೆಚ್ಚು ಗುತ್ತಿಗೆ ಪೌರ ಕಾರ್ಮಿಕರು ವಿವಿಧ ವಿಭಾಗಗಳಡಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗರದ ಸ್ವಚ್ಛತಾ ಕಾರ್ಯ, ಪಾಲಿಕೆಯ ದೈನಂದಿನ ಆಡಳಿತ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಪಾತ್ರ ನಿರ್ವಹಿಸುತ್ತಾ ಬಂದಿದ್ದಾರೆ. ಆದರೆ, ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.
ಗುತ್ತಿಗೆ ಕಾರ್ಮಿಕರಿಗೆ ನೀಡುತ್ತಿರುವ ವೇತನ ಅತ್ಯಲ್ಪವಾಗಿದೆ. ಇದನ್ನೂ ಸಮರ್ಪಕವಾಗಿ ನೀಡುತ್ತಿಲ್ಲ. ಇದರ ಜತೆಗೆ ರಜೆ, ವೈದ್ಯಕೀಯ ಭತ್ಯೆ, ಸೇವಾ ಭದ್ರತೆ ಇಲ್ಲವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಶೋಚನೀಯ: ನಗರದ ಆರೋಗ್ಯಕರ ವಾತಾವರಣಕ್ಕೆ ಶ್ರಮಿಸುತ್ತಿರುವ ತಮಗೆ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ. ಇದರಿಂದ ನಮ್ಮಗಳ ಸ್ಥಿತಿ ಅತ್ಯಂತ ಶೋಚನೀಯವಾಗಿದೆ ಎಂದು ಪ್ರತಿಭಟನಾನಿರತ ಪೌರಕಾರ್ಮಿಕರು ತಮ್ಮ ಅಳಲು ತೋಡಿಕೊಂಡರು.
ಕೂಡಲೇ ಗುತ್ತಿಗೆ ವ್ಯವಸ್ಥೆ ರದ್ದುಪಡಿಸಿ ಸೇವೆ ಕಾಯಂಗೊಳಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ, ಸಂಪೂರ್ಣ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.
ಇತ್ತೀಚೆಗೆ ಉಚ್ಚ ನ್ಯಾಯಾಲಯವು ಆದೇಶವೊಂದನ್ನು ಹೊರಡಿಸಿ, ಆರು ತಿಂಗಳೊಳಗೆ ಗುತ್ತಿಗೆ ಪೌರ ಕಾರ್ಮಿಕರಿಗೆ ಅನ್ಯಾಯವಾಗದಂತೆ ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದರ ಆಧಾರದ ಮೇಲೆ ಮಹಾನಗರ ಪಾಲಿಕೆಯಲ್ಲಿರುವ ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ದಿನಗೂಲಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಂಘದ ಗೌರವಾಧ್ಯಕ್ಷ ಪಂಚಾಲಯ್ಯ, ಅಧ್ಯಕ್ಷ ಮುರುಗನ್, ಮೂರ್ತಿ, ನಾಗರಾಜು, ಶಿವು, ರವೀಶ್, ಗುರುಮೂರ್ತಿ, ರವಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

