ಕುಮಾರ ಪ್ರಚಾರಕ್ಕೆ ಬರುತ್ತಾರೆ: ಭಂಡಾರಿ
ಕ.ಪ್ರ.ವಾರ್ತೆ, ಶಿವಮೊಗ್ಗ, ಮಾ.26
ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್ ಪರ ಪ್ರಚಾರ ನಡೆಸುವುದಾಗಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎಂದು ಹೇಳಿರುವ ಕುಮಾರ್ ಅವರು ಯಾವುದೇ ಷರತ್ತು ವಿಧಿಸಿಲ್ಲ. ಮುಂದಿನ ಪ್ರಚಾರ ಸಭೆಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸಿ ಕಾಂಗ್ರೆಸ್ ಪರ ಮತ ಯಾಚಿಸಲಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಹೊಳೆಹೊನ್ನೂರು, ಸಾಗರ, ರಿಪ್ಪನ್ಪೇಟೆ, ಹೊಸನಗರ, ಬೈಂದೂರು ಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ, ಮುಖಂಡರ ಹಲವಾರು ಸಭೆಗಳನ್ನು ನಡೆಸಲಾಗಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕನಿಷ್ಠ 5 ಸಾವಿರ ಸಕ್ರಿಯ ಕಾರ್ಯಕರ್ತರು ಚುನಾವಣೆ ಮುಗಿಯುವವರೆಗೂ ಕಾರ್ಯ ನಿರ್ವಹಿಸಲಿದ್ದಾರೆ. ಮತದಾರರ ಭೇಟಿ ಮಾಡಿ, ಕಾಂಗ್ರೆಸ್ ಪರವಾಗಿ ಮತ ಹಾಕುವಂತೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದರು.
ಭದ್ರಾವತಿ ಮಾಜಿ ಶಾಸಕ ಬಿ.ಕೆ. ಸಂಗಮೇಶ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಅವರು ಪಕ್ಷದ ಪರವಾಗಿ ಕೆಲಸ ಮಾಡುವುದಾಗಿ ಈಗಾಗಲೇ ಹೇಳಿದ್ದಾರೆ. ಅವರ ಬಗ್ಗೆ ಪಕ್ಷದ ವರಿಷ್ಠರು. ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಕಾರ್ಯಕರ್ತರ ಸಭೆ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾ.29ರಂದು ಮಧ್ಯಾಹ್ನ 3ಕ್ಕೆ ನಗರದ ಲಗನ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಕೇಂದ್ರ ಹಾಗೂ ರಾಜ್ಯದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪಾದಯಾತ್ರೆ, ಸಮಾವೇಶ, ಕಾರ್ಯಕರ್ತರ ಸಭೆ, ಹೀಗೆ ಹಲವು ರೀತಿಯಲ್ಲಿ ಕಾಂಗ್ರೆಸ್ ಪ್ರಚಾರದಲ್ಲಿ ನಿರತವಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಕೆಪಿಸಿಸಿ ಉಪಾಧ್ಯಕ್ಷ ಟಿ. ಕರಿಯಣ್ಣ, ಮುಖಂಡರಾದ ತೀ.ನಾ. ಶ್ರೀನಿವಾಸ್, ಎನ್. ರಮೇಶ್, ವೈ.ಎಚ್. ನಾಗರಾಜ್, ಎಸ್.ಪಿ. ದಿನೇಶ್, ಖಾಜಿ ಉಸ್ಮಾನ್, ಕಲಗೋಡು ರತ್ನಾಕರ್, ಕೆ. ದೇವೇಂದ್ರಪ್ಪ, ಶಿವಾನಂದ್, ವಿಜಯಕುಮಾರ್ ಮತ್ತಿತರರು ಇದ್ದರು.
ಸಿಂಧ್ಯಾ, ಶಾಂತವೀರನಾಯ್ಕ್ ಕಾಂಗ್ರೆಸ್ಗೆ ವಾಪಸ್
ಪಕ್ಷಾಂತರ ಪರ್ವ ಮುಂದುವರಿದಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭದ್ರಾವತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿ.ಪಂ. ಮಾಜಿ ಸದಸ್ಯ ಶಿವಾಜಿರಾವ್ ಸಿಂಧ್ಯಾ ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಶಾಂತವೀರನಾಯ್ಕ ಅವರು ಬುಧವಾರ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಶಿವಾಜಿರಾವ್ ಸಿಂಧ್ಯಾ, ಬಿಜೆಪಿ ಸೇರಿ ಯಾತನೆ ಪಟ್ಟಿದ್ದೇನೆ. ಚುನಾವಣೆಗಳಲ್ಲಿ ಸೋಲು, ಗೆಲವು ಸಹಜ. ಆದರೆ ಬಿಜೆಪಿ ಮುಖಂಡರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಕಾಂಗ್ರೆಸ್ ಎಲ್ಲಾ ವರ್ಗದ ಜನರ ಹಿತ ಕಾಯುವ ಪಕ್ಷ. ರಾಜಕೀಯದಲ್ಲಿ ದೂರದೃಷ್ಟಿ ಹೊಂದಿರುವ ಮಂಜುನಾಥ ಭಂಡಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಜಿಲ್ಲೆಯ ಅಭಿವೃದ್ಧಿ ಬಗ್ಗೆ ಹಲವು ಕನಸು ಹೊಂದಿದ್ದಾರೆ. ಅವರನ್ನು ಬೆಂಬಲಿಸಲು ಕಾಂಗ್ರೆಸ್ ಸೇರಿದ್ದೇನೆ ಎಂದು ತಿಳಿಸಿದರು.
ಶಾಂತವೀರನಾಯ್ಕ, ಕಾಂಗ್ರೆಸ್ ಪಕ್ಷ ನನಗೆ ತಾಯಿ ಇದ್ದಂತೆ. ರಾಜಕೀಯ ಸ್ಥಾನ ಮಾನ ನೀಡಿದ್ದ ಈ ಪಕ್ಷವನ್ನು ಬಿಟ್ಟಿದ್ದಕ್ಕೆ ವಿಷಾದವಿದೆ. ಇನ್ನುಮುಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

