ಶಿವಮೊಗ್ಗ

ಕಡಿಮೆ ಅಂಕ ಗಳಿಕೆಗೆ ಶಿಕ್ಷಕರೇ ಹೊಣೆ

Published On :

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕಡಿಮೆ ಅಂಕ ಯಾವ ವಿಷಯದಲ್ಲಿ ಬಂದಿದೆಯೋ ಆ ಶಿಕ್ಷಕರನ್ನು ಹೊಣೆ. ಹೀಗೊಂದು ಎಚ್ಚರಿಕೆ ಸಂದೇಶವನ್ನು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ರವಾನಿಸಿದ್ದಾರೆ.
ಪ್ರತಿ ಸರ್ಕಾರಿ ಶಾಲೆಯ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ವಿಷಯವಾರು ಫಲಿತಾಂಶ ಮತ್ತು ಶಿಕ್ಷಕರು- ಉಪನ್ಯಾಸಕರ ಮೊಬೈಲ್ ನಂಬರನ್ನು ಸಂಗ್ರಹಿಸಿ ತಮಗೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಈ ವಿಷಯ ತಿಳಿಸಿದರು.
2013- 14ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಮಾಹಿತಿ ಪಡೆದು, ಯಾವ ಕಾರಣಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಅಲ್ಲದೆ, ಯಾವ ವಿಷಯದಲ್ಲಿ ಕಡಿಮೆ ಅಂಕ ಗಳಿಕೆಯಾಗಿದೆ ಎಂಬ ಮಾಹಿತಿಯನ್ನು ಕ್ರೋಢೀಕರಿಸಿ ಸಲ್ಲಿಸಬೇಕು. ಇನ್ನು ಮುಂದೆ ಕಡಿಮೆ ಅಂಕ ಬಂದ ವಿಷಯದ ಶಿಕ್ಷಕರನ್ನೂ ಹೊಣೆ ಮಾಡಲಾಗುವುದು ಎಂದರು.
ಎಲ್ಲ ಸೌಲಭ್ಯ ನೀಡಿದಾಗ್ಯೂ ಸರ್ಕಾರಿ ಶಾಲೆಗಳಲ್ಲಿ ಕಡಿಮೆ ಫಲಿತಾಂಶ ಏಕೆ ಬರಬೇಕು ಎಂಬ ಹಿನ್ನೆಲೆ ಕೆಲವು ವಿಷಯಗಳಲ್ಲಿ ಕಡಿಮೆ ಅಂಕಗಳು ಬಂದಿರುವ ಬಗ್ಗೆ ಸಭೆಯಲ್ಲಿ ವ್ಯಕ್ತವಾಯಿತು. ಜಿಲ್ಲೆಯಲ್ಲಿ ಕಡಿಮೆ ಅಂಕ ಬಂದಿರುವ ವಿಷಯಗಳು ಯಾವುವು ಹಾಗೂ ಅಂತಹ ಶಿಕ್ಷಕರ ಪಟ್ಟಿ ಮಾಡಿ ಸಲ್ಲಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ನೋಟಿಸ್ ಜಾರಿ ಮಾಡಿ: ಪ್ರತಿ ಶಾಲೆಯಲ್ಲಿ ತಮ್ಮ ವಿಷಯದ ಸಾಧನೆ ತೋರಿಸಬೇಕು. ಈ ವಿಷಯ ಆಯಾ ಎಸ್‌ಡಿಎಂಸಿ ಸಭೆಯಲ್ಲಿ ಚರ್ಚೆಯಾಗಬೇಕು. ಇಲ್ಲವಾದರೆ ಅಂತಹ ಶಿಕ್ಷಕರಿಗೆ ಜವಾಬ್ದಾರಿ ಬರುವುದಿಲ್ಲ. ಅತಿ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳನ್ನು ಪಟ್ಟಿ ಮಾಡಿ ಮಾನ್ಯತೆ ರದ್ದುಪಡಿಸುವ ಬಗ್ಗೆ ಸಂಬಂಧಿತ ಶಿಕ್ಷಣ ಸಂಸ್ಥೆಗೆ ನೋಟಿಸ್ ಜಾರಿ ಮಾಡಿ ಎಂದು ಸಚಿವರು ಸೂಚಿಸಿದರು.
ಜುಲೈ ತಿಂಗಳಾಂತ್ಯಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಆಯಾ ಮುಖ್ಯೋಪಾಧ್ಯಾಯರು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಆಯಾ ಪ್ರಾಂಶುಪಾಲರಿಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಾಗಾರ ಏರ್ಪಡಿಸಬೇಕು ಎಂದರು.
ಕಾರ್ಯಯೋಜನೆ ರೂಪಿಸಿ: ಇದೇ ಸಂದರ್ಭದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಹಂತ- ಹಂತವಾಗಿ ಕಾರ್ಯಯೋಜನೆ ರೂಪಿಸುವಂತೆ ವಿಧಾನಪರಿಷತ್ ಸದಸ್ಯ ಕೃಷ್ಣಭಟ್ ಸಲಹೆ ನೀಡಿದರು.
ಶಾಲಾ- ಕಾಲೇಜುಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ 6 ಸಾವಿರ ಕೋಟಿ ಅಗತ್ಯವಿದ್ದು, ಇದಕ್ಕಾಗಿ ಸಂಪನ್ಮೂಲ ಕ್ರೋಢೀಕರಣ ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಶೈಕ್ಷಣಿಕ ಪ್ರಗತಿ, ಅಕ್ಷರ ದಾಸೋಹ, ಕ್ಷೀರಭಾಗ್ಯ, ಗ್ರಂಥಾಲಯ, ವಯಸ್ಕರ ಶಿಕ್ಷಣ ಇಲಾಖೆಗಳ ಪ್ರಗತಿಯ ಮಾಹಿತಿಯನ್ನು ಸಚಿವರು ಪಡೆದರು.
ಶಾಸಕ ಕೆ.ಬಿ. ಪ್ರಸನ್ನಕುಮಾರ್, ಅಪ್ಪಾಜಿಗೌಡ, ವಿಧಾನಪರಿಷತ್ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಉಪಾಧ್ಯಕ್ಷೆ ಹೇಮ ಪಾವನಿ, ಶಾಸಕ ಎಂ.ಜೆ. ಅಪ್ಪಾಜಿ, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪಂಚಾಯಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.