ಶಿವಮೊಗ್ಗ

ಹಕ್ಕುಪತ್ರಕ್ಕೆ ಅರ್ಜಿ: ಅವಧಿ ವಿಸ್ತರಣೆಗೆ ಆಗ್ರಹ

Published On :

ಸಾಗರ: ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಿದ್ದು, ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಗ್ರಾಮ ಲೆಕ್ಕಾಧಿಕಾರಿಗಳು ತಕ್ಷಣ ಸರ್ಕಾರಿ ಜಮೀನಿನಲ್ಲಿ ವಾಸವಿದ್ದವರಿಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, 94ಸಿ ಅಡಿ ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಲು ಜೂ. 3 ಕೊನೆ ದಿನವಾಗಿತ್ತು. ಅದನ್ನು ಮುಂದಿನ ಆರು ತಿಂಗಳು ವಿಸ್ತರಿಸುವಂತೆ ಕಂದಾಯ ಸಚಿವರಿಗೆ ಪತ್ರ ಬರೆಯಲಾಗಿದೆ. ಅಷ್ಟರೊಳಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯ ಮುಗಿಯಬೇಕು ಎಂದು ಸೂಚನೆ ನೀಡಿದರು.
ಮಾರಕ ಪರಿಣಾಮ: ಭೂಮಿಗೆ ಸಂಬಂಧಪಟ್ಟಂತೆ 2007ರಲ್ಲಿ 192 ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಏಳು ವರ್ಷವಾದರೂ ಕಾಯ್ದೆ ಅನುಷ್ಠಾನಕ್ಕೆ ಬಂದಿಲ್ಲ. ಈ ಕಾಯ್ದೆ ಯಥಾವತ್ತಾಗಿ ಜಾರಿಗೆ ಬಂದರೆ ಮಲೆನಾಡು ಪ್ರದೇಶದ ಮೇಲೆ ಮಾರಕ ಪರಿಣಾಮ ಬೀರಲಿದೆ. ಕಾಯ್ದೆಯನ್ನು ತಕ್ಷಣ ವಾಪಸ್ ಪಡೆಯುವಂತೆ ಕಂದಾಯ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದರು.
ಕಾಯ್ದೆ ಯಥಾವತ್ತಾಗಿ ಜಾರಿಗೆ ಬರುವುದರಿಂದ ಅನುಕೂಲಕ್ಕಿಂತ ಅನಾನುಕೂಲವೆ ಹೆಚ್ಚು. ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳಲು ಇಲ್ಲಿ ಸಾಕಷ್ಟು ಅವಕಾಶವಿದೆ. ಕಾಯ್ದೆಯನ್ನು ಉಪಯೋಗಿಸಿ ಅಮಾಯಕರನ್ನು ಸುಲಭವಾಗಿ ತುಳಿಯುವ ಅವಕಾಶ ಇರುವುದರಿಂದ ಕಾಯ್ದೆಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರಬಾರದು ಎಂದು ಪತ್ರ ಬರೆಯಲಾಗಿದೆ ಎಂದು ಹೇಳಿದರು.
ಶೌಚಾಲಯ ನಿರ್ಮಾಣ: ತಾಲೂಕಿನಲ್ಲಿ ಒಟ್ಟು ಐದು ಸಾವಿರ ಶೌಚಾಲಯ ನಿರ್ಮಾಣ ಮಾಡುವ ಗುರಿ ಹೊಂದಲಾಗಿತ್ತು. ಈತನಕ ಮೂರು ಸಾವಿರ ಶೌಚಾಲಯ ಮಾತ್ರ ನಿರ್ಮಾಣವಾಗಿದೆ. ಯಾರ್ಯಾರು ಶೌಚಾಲಯ ನಿರ್ಮಾಣ ಮಾಡಿಕೊಂಡಿಲ್ಲವೋ ಅವರಿಗೆ ಇತರೆ ಸೌಲಭ್ಯ ನೀಡುವುದಿಲ್ಲ ಎಂಬ ಎಚ್ಚರಿಕೆ ನೀಡಿ ಎಂದು ಆದೇಶಿಸಿದ ಕಾಗೋಡು ಆಶ್ರಯ ನಿವೇಶನಕ್ಕೆ ಸಂಬಂಧಪಟ್ಟಂತೆ ತಕ್ಷಣ ಅರ್ಜಿ ಪಡೆದು, ಫಲಾನುಭವಿಗಳಿಗೆ ನಿವೇಶನ ಹಂಚಲು ಜಾಗ ಗುರುತಿಸಿ. ಅರಣ್ಯಹಕ್ಕು ಕಾಯ್ದೆ ಜಾರಿಗೆ ತರುವಲ್ಲಿ ಅಧಿಕಾರಿಗಳು ಇನ್ನಷ್ಟು ಆಸಕ್ತಿ ವಹಿಸಬೇಕು. ಗ್ರಾಮ ಸಭೆಗಳಿಗೆ ತಾಲೂಕುಮಟ್ಟದ ಅಧಿಕಾರಿಗಳು ಗೈರಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳಿದ್ದು, ಅಧಿಕಾರಿಗಳು ಸಭೆಗೆ ಹಾಜರಾಗದೆ ಹೋದರೆ ಸ್ಥಳೀಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಆಗುವುದಿಲ್ಲ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ವಿತರಣೆಗೆ ಕ್ರಮ: ಬಸವ ವಸತಿ ಯೋಜನೆಯಡಿ 500 ಮನೆಗಳ ಜತೆಗೆ ಹೆಚ್ಚುವರಿಯಾಗಿ 160 ಮನೆಗಳು ಬಂದಿದ್ದು, ಅದನ್ನು ತಕ್ಷಣ ಪಟ್ಟಿ ಮಾಡಿ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲು ಸೂಚಿಸಿದ ಅವರು, ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟಂತೆ ಅಗತ್ಯ ಕೆಲಸ ಬಾಕಿ ಇದ್ದರೆ ಪೂರ್ಣಗೊಳಿಸಿ. ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿ ಎಲ್ಲೂ ಬಾಕಿ ಹಣ ಬಿಡುಗಡೆಯಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ನಡೆಸಲಾಗಿದ್ದು, ಇನ್ನು ಎರಡ್ಮೂರು ದಿನದಲ್ಲಿ ಹಣ ಬಿಡುಗಡೆ ಆಗಲಿದೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ.ಸಿದ್ದಪ್ಪ, ತಹಸೀಲ್ದಾರ್ ಜಿ.ಎಂ. ಬೋರ್ಕರ್, ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಇನ್ನಿತರ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.