ತುಮಕೂರು

ಸಿದ್ಧಗಂಗಾ ಶ್ರೀಗಳಿಗೆ ಹುಟ್ಟುಹಬ್ಬದ ಸಡಗರ

Published On :

ಕನ್ನಡಪ್ರಭ ವಾರ್ತೆ   ತುಮಕೂರು   ಏ.1
106ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಶತಾಯುಷಿ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ವಿವಿಧ ಮಠಾಧೀಶರು ಸೋಮವಾರ ಬೆಳಗಿನ ಜಾವ ಪಾದಪೂಜೆ ನೆರವೇರಿಸಿದರು.
ಸಿದ್ಧಗಂಗೆಯ ಕಿರಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಹಲವಾರು ಮಠಾಧೀಶರು ಸಿದ್ಧಗಂಗಾ ಶ್ರೀಗಳಿಗೆ ಪಾದಪೂಜೆ ಮಾಡಿದರು. ಈ ಕಾರ್ಯಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.
ಶ್ರೀಗಳ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಳೆದ ರಾತ್ರಿಯಿಂದಲೇ ರಾಜ್ಯದ ಬೇರೆ ಬೇರೆ ಭಾಗಗಳಿಂದ ಸಾವಿರಾರು ಭಕ್ತರು ಶ್ರೀ ಮಠಕ್ಕೆ ಆಗಮಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ, ಸಂಸದ ಜಿ.ಎಸ್. ಬಸವರಾಜು ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದರು.
ಸ್ವಾಮೀಜಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಠದಲ್ಲಿ ಹಬ್ಬದ ವಾತಾವರಣವಿತ್ತು. ತಳಿರು ತೋರಣಗಳಿಂದ ಶ್ರೀ ಮಠವನ್ನು ಸಿಂಗಾರ ಮಾಡಲಾಗಿತ್ತು. ಬೆಳಗ್ಗೆಯಿಂದ ಮಠದಲ್ಲಿ ವಿವಿಧ ಕಾರ್ಯ ನಡೆಯುತ್ತಿದ್ದವು.
ಭಕ್ತರಿಗೆ ಆಶೀರ್ವಾದ: ಪಾದಪೂಜೆ ಬಳಿಕ ಸ್ವಾಮೀಜಿ ಅವರು ಭಕ್ತರ ಬಳಿ ಬಂದರು. ಆಗ ಸಾವಿರಾರು ಮಂದಿ ಭಕ್ತರು ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕಳೆದ ರಾತ್ರಿಯಿಂದಲೇ ಸಾವಿರಾರು ಭಕ್ತರು ಶ್ರೀ ಮಠಕ್ಕೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಈಗಾಗಲೇ ಸ್ವಾಮೀಜಿ ಅವರಿಗೆ ಗುರುವಂದನಾ ಕಾರ್ಯಕ್ರಮವನ್ನು ಏ.13 ರಂದು ನೆರವೇರಿಸಲು ತೀರ್ಮಾನಿಸಲಾಗಿದೆ. ಸ್ವಾಮೀಜಿ ಅವರು ಎಂದಿನಂತೆ ಶಾಂತಚಿತ್ತರಾಗಿ ಭಕ್ತರಿಗೆ ದರ್ಶನ ನೀಡಿದರು.ಮಠದ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು, ತುಮಕೂರಿನ ಗಣ್ಯರು, ವಿದ್ಯಾರ್ಥಿಗಳು, ಎಲ್ಲಾ ವಯೋವಾನದವರು ಕೂಡ ಶ್ರೀ ಮಠಕ್ಕೆ ಆಗಮಿಸಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ರಾಜ್ಯದ ಬೇರೆ ಬೇರೆ ಭಾಗಗಳಿಂದ ಬಂದ ಭಕ್ತರು ಸೇರಿದಂತೆ ಸ್ಥಳೀಯರಿಗೆಲ್ಲಾ ದಾಸೋಹದ ವ್ಯವಸ್ಥೆಯನ್ನು ಶ್ರೀ ಮಠದಲ್ಲಿ ಕಲ್ಪಿಸಲಾಗಿತ್ತು.


ರಾಕ್ಷಸೀ ಪ್ರವೃತ್ತಿ ಬಿಡಿ
ಭಕ್ತ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ ಅವರು ದೇಶದಲ್ಲಿ ಶಾಂತಿ ನೆಲೆಸಬೇಕು. ಮನುಷ್ಯ ಒಳ್ಳೆತನ ರೂಢಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಮನುಷ್ಯರಲ್ಲಿ ರಾಕ್ಷಸಿ ಪ್ರವೃತ್ತಿ ಬೆಳೆಯುತ್ತದೆ. ಇದನ್ನು ಸಂಪೂರ್ಣವಾಗಿ ನಿವಾರಿಸಕೊಳ್ಳುವ ನಿಟ್ಟಿನಲ್ಲಿ ಮನುಷ್ಯರು ಯೋಚಿಸಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.