ತುಮಕೂರು

ರಸ್ತೆಯಲ್ಲೇ ಸಸಿನೆಟ್ಟು ಪ್ರತಿಭಟನೆ

Published On :

ಕ.ಪ್ರ.ವಾರ್ತೆ  ಶಿರಾ ಆ. 1
ನಗರದ ದರ್ಗಾ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿ 4 ರವರೆಗೆ ಇರುವ ಈ ಹಿಂದಿನ ಹೆದ್ದಾರಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಿಸುವಂತೆ ಆಗ್ರಹಿಸಿ ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ರಸ್ತೆಯಲ್ಲೇ ಸಸಿನೆಟ್ಟು ಪ್ರತಿಭಟಿಸಿದರು.
ಸಂಘದ ಅಧ್ಯಕ್ಷ ಉಮೇಶ್‌ಗೌಡ ಮಾತನಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಮತ್ತು ಸಾರ್ವಜನಿಕರು ಓಡಾಡಲು ತುಂಬಾ ತೊಂದರೆಯಾಗುತ್ತಿದೆ. ರಸ್ತೆಯಲ್ಲಿನ ಈ ಗುಂಡಿಗಳನ್ನು ಮುಚ್ಚದೆ ಹಾಗೆ ಬಿಟ್ಟಿರುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಈ ಹಿಂದಿನ ರಸ್ತೆಯು ರಾಷ್ಟ್ರೀಯ ಹೆದ್ದಾರಿ ಆಗಿದ್ದು ಇದಕ್ಕೆ ಬೈಪಾಸ್ ರಸ್ತೆ ನಿರ್ಮಾಣವಾಗಿರುವುದರಿಂದ ಈ ರಸ್ತೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ರಸ್ತೆ ಯಾರಿಗೆ ಸೇರಿದ್ದು ಈ ರಸ್ತೆಯಲ್ಲೇ ಅತಿ ಹೆಚ್ಚು ವಾಹನಗಳು ಓಡಾಡುತ್ತಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದರೂ ರಸ್ತೆ ನಿರ್ವಹಣೆ ತಮ್ಮ ಇಲಾಖೆಗೆ ಸೇರುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತದೆ ಎನ್ನುತ್ತಾರೆ. ನಗರಸಭೆಯವರನ್ನು ವಿಚಾರಿಸಿದರೆ ಅವರೂ ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟಂತಹ ಈ ರಸ್ತೆಯನ್ನು ತಾವು ಸರಿಪಡಿಸಲು ಸಾಧ್ಯವಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ರಾಷ್ಟ್ರೀಯ ಪ್ರಾಧಿಕಾರದವರು ಈ ರಸ್ತೆಯನ್ನು ನಗರಸಭೆಗೆ ಬಿಟ್ಟುಕೊಟ್ಟಿದ್ದು ಅವರೇ ಇದನ್ನು ದುರಸ್ತಿಪಡಿಸಬೇಕೆನ್ನುತ್ತಿದ್ದಾರೆ. ಇದೇ ರೀತಿ ಒಬ್ಬರ ಮೇಲೊಬ್ಬರು ಸಬೂಬು ಹೇಳುತ್ತಲೇ ಕಾಲ ಕಳೆಯುತ್ತಿದ್ದಾರೆ. ಇಂತಹ ಹದಗೆಟ್ಟ ರಸ್ತೆಯಲ್ಲಿ ಓಡಾಡುವುದು ಸಾಕಷ್ಟು ಸಮಸ್ಯೆಗೆ ಕಾರಣವಾಗಿದೆ. ಆದ್ದರಿಂದ ತಕ್ಷಣವೇ ಸಂಬಂಧಪಟ್ಟ ಇಲಾಖೆಯವರು ಈ ರಸ್ತೆಯನ್ನು ಇನ್ನು ಒಂದು ವಾರದಲ್ಲಿ ದುರಸ್ತಿ ಮಾಡಿಸಿ, ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಕಲ್ಪಿಸಬೇಕು. ಇಲ್ಲವಾದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಂಘದ ಕಾರ್ಯದರ್ಶಿ ರಘು, ಸುರೇಶ್, ಎಚ್.ಸಿ.ಉಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.