ತುಮಕೂರು

ಅಂಬೇಡ್ಕರ್ ಭವನ ಅವ್ಯವಸ್ಥೆ: ರಫೀಕ್ ತರಾಟೆ

Published On :

ಕ.ಪ್ರ.ವಾರ್ತೆ ತುಮಕೂರು ಆ.3
ಆಧಾರ್ ನೊಂದಣಿ ಕಾರ್ಯ ನಡೆಯುತ್ತಿರುವ ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಅವ್ಯವಸ್ಥೆಯನ್ನು ಕಣ್ಣಾರೆ ಕಂಡ ತುಮಕೂರು ಶಾಸಕ ಡಾ.ರಫೀಕ್ ಅಮಹದ್ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಿಡಿಕಿಡಿಯಾದರು.
ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿದ ಶಾಸಕರು ಇಡೀ ಕಟ್ಟಡ ಕಸದ ರಾಶಿಯಿಂದ ತುಂಬಿರುವುದನ್ನು ಕಂಡು ಬೇಸರ  ವ್ಯಕ್ತಪಡಿಸಿದರಲ್ಲದೆ, ಕೂಡಲೇ ಜಿಲ್ಲಾಧಿಕಾರಿಗಳಿಗೆ ದೂರವಾಣಿಯಲ್ಲಿ ಮಾತನಾಡಿ ಅಂಬೇಡ್ಕರ್ ಭವನಕ್ಕೆ ಭೇಟಿ ನೀಡುವಂತೆ ಸೂಚಿಸಿದರು. ಶಾಸಕರ ಸೂಚನೆ ಮೇರೆಗೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಶಾಸಕರೊಂದಿಗೆ ಇಡೀ ಕಟ್ಟಡವನ್ನು ಒಮ್ಮೆ ಸುತ್ತ ಹಾಕಿ, ಕಸದ ರಾಶಿಯನ್ನು ಕಂಡು ಆಕ್ರೋಶ ಭರಿತರಾಗಿ ಸ್ಥಳದಲ್ಲಿಯೇ ಇದ್ದ ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ ಅವರ ವಿರುದ್ಧ ಹರಿಹಾಯ್ದರು.
ಹಾರಿಕೆ ಉತ್ತರ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಈ ಕಟ್ಟಡದ ಸ್ವಚ್ಛತೆಯ ಜವಾಬ್ದಾರಿ ಯಾರಿಗೆ ಸೇರಿದ್ದು ಎಂದು ಪ್ರಶ್ನಿಸಿದಾಗ ನಮಗೆ ಇದುವರೆಗೂ ಬಿಟ್ಟುಕೊಟ್ಟಿಲ್ಲ ಎಂದು ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹಾರಿಕೆಯ ಉತ್ತರ ನೀಡಿದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿಯ ಉತ್ತರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರಲ್ಲದೆ, ಸಂಬಂಧಪಟ್ಟವರೊಂದಿಗೆ ಮಾತನಾಡಿ ಕಟ್ಟಡವನ್ನು ನಿಮ್ಮ ಸುಪರ್ದಿಗೆ ನೀಡಲು ವ್ಯವಸ್ಥೆ ಮಾಡುತ್ತೇನೆ. ಕೂಡಲೇ ಕಟ್ಟಡದ ಒಳಗೆ ಮತ್ತು ಹೊರಗೆ ಸ್ವಚ್ಛತೆಗೆ ಕ್ರಮ ಕೈಗೊಳ್ಳಿ ಎಂದು ತಾಕೀತು ಮಾಡಿದ ಜಿಲ್ಲಾಧಿಕಾರಿಗಳು ಸಂಜೆ ವೇಳೆಗೆ ಮತ್ತೊಮ್ಮೆ ಭೇಟಿ ನೀಡಿ ಪರಿಶೀಲಿಸಲಿದ್ದು, ಆ ವೇಳೆ ಸಂಪೂರ್ಣ ಆವರಣವನ್ನು ಸ್ವಚ್ಛವಾಗಿಡಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ.ರಫೀಕ್ ಅಹಮದ್ ನಗರದಲ್ಲಿ ಸ್ವಚ್ಛತೆ ಕಾಪಾಡಲು ನಗರಸಭೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿ ಹಾಜರಿದ್ದ ನಗರಸಭೆಯ ಆಯುಕ್ತ ನಾರಾಯಣಪ್ಪ ಅವರಿಗೆ ನಿರ್ದೇಶನ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.