ಕೌಟುಂಬಿಕ ಪ್ರಕರಣ ಇತ್ಯರ್ಥ ತ್ವರಿತವಾಗಲಿ
ಕ.ಪ್ರ.ವಾರ್ತೆ ತುಮಕೂರು ಆ. 24
ನ್ಯಾಯಾಲಯದಲ್ಲಿ ಬಾಕಿ ಇರುವ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ತ್ವರಿತವಾಗಿ ಇತ್ಯರ್ಥವಾಗುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂರಕ್ಷಣಾಧಿಕಾರಿ ಹಾಗೂ ಕಾನೂನು ಸಲಹೆಗಾರರು ನ್ಯಾಯಾಲಯಕ್ಕೆ ಮನವಿಗಳನ್ನು ಸಲ್ಲಿಸುವ ಮೂಲಕ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥವಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕುಗಳಲ್ಲಿ ದಾಖಲಾದ ಪ್ರಕರಣಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸೂಕ್ತ ಗಮನಹರಿಸಿ ಪ್ರಕರಣಗಳನ್ನು ತಮ್ಮ ಹಂತದಲ್ಲಿಯೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಮೊದಲ ಹಂತದಲ್ಲೇ ಪರಿಹಾರಕ್ಕೆ ಯತ್ನಿಸಿ: ನೊಂದ ಮಹಿಳೆಯರು ತಮ್ಮ ದೂರುಗಳನ್ನು ಸಂರಕ್ಷಣಾಧಿಕಾರಿಗಳಲ್ಲಿ ದಾಖಲಿಸಿಕೊಂಡಾಗ ಸಂರಕ್ಷಣಾಧಿಕಾರಿ ಮತ್ತು ಕಾನೂನು ಸಲಹೆಗಾರರು ತಮ್ಮ ಹಂತದಲ್ಲಿಯೇ ಸಮಾಲೋಚನೆ ಮುಖಾಂತರ ಇತ್ಯರ್ಥಪಡಿಸಬೇಕು. ಸಾಧ್ಯವಾಗದ ಪ್ರಕರಣಗಳಿಗೆ ಕೌಟುಂಬಿಕ ಘಟನಾ ವರದಿ (ಡಿಐಆರ್) ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅವರು ಸೂಚಿಸಿದರು.
ಕಡ್ಡಾಯ ಸೂಚನೆ: ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಬಾಕಿ ಇರುವ ಪ್ರಕರಣಗಳ ಬಗ್ಗೆ ತಾಲೂಕುವಾರು ಮತ್ತು ವರ್ಷವಾರು ಪಟ್ಟಿಮಾಡಿ ಮುಂದಿನ ಸಭೆಗೆ ಕಡ್ಡಾಯವಾಗಿ ತರುವಂತೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸುಜಾತ ಮಾತನಾಡಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ನಿಯಮ 2006 ರಡಿ ಕೌಟುಂಬಿಕ ಸಂಬಂಧದಿಂದ ದೈಹಿಕ, ಲೈಂಗಿಕ, ಆರ್ಥಿಕ ಮತ್ತು ಭಾವನಾತ್ಮಕವಾಗಿ ಹಿಂಸೆಗೊಳಗಾದ ಮಹಿಳೆಯರನ್ನು ಈ ಕಾಯ್ದೆಯಡಿ ಸಂರಕ್ಷಿಸುವುದು ಕಾಯ್ದೆಯ ಮುಖ್ಯ ಉದ್ದೇಶವಾಗಿದ್ದು, ಜಿಲ್ಲೆಯಲ್ಲಿ 2007ರಿಂದ ಈ ಕಾಯ್ದೆಯು ಅನುಷ್ಟಾನಗೊಂಡಿದ್ದು, ಜಿಲ್ಲೆಯ 10 ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ಸಂರಕ್ಷಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ಕಾಯ್ದೆಯಡಿ ಹಿಂಸೆ, ನೊಂದ ಮಹಿಳೆಯರು ಸಂರಕ್ಷಣಾಧಿಕಾರಿಗಳು, ನ್ಯಾಯಾಲಯದ ಮ್ಯಾಜಿಸ್ಟ್ರೇಟ್, ಪೋಲಿಸ್ ಅಧಿಕಾರಿ ಅಥವಾ ಸೇವಾ ನೀಡಿಕೆದಾರರನ್ನು ಸಂಪರ್ಕಿಸಿ ಅವರ ಬಳಿ ಅಹವಾಲನ್ನು ಸಲ್ಲಿಸಬಹುದು. ಮಹಿಳೆಯರಿಗೆ ಎಲ್ಲಾ ರೀತಿಯಲ್ಲಿ ರಕ್ಷಣೆ, ಆರ್ಥಿಕ ಪರಿಹಾರ ನೀಡಲಾಗುವುದು. ಪ್ರಕರಣಕ್ಕೆ ಸಂಬಂಧಪಟ್ಟಂತೆ 60 ದಿನಗಳಲ್ಲಿ ಇತ್ಯರ್ಥಪಡಿಸಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವುದು ಈ ಕಾಯ್ದೆಯ ಪ್ರಮುಖ ಉದ್ದೇಶವಾಗಿರುತ್ತದೆ ಎಂದು ವಿವರಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಸರ್ಕಾರಿ ವಕೀಲರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ, ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಇತರೆ ಸಂಘ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

