ಚಿತ್ರಕಲೆಯಿಂದ ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಸಾಧ್ಯ
ತುಮಕೂರು: ಚಿತ್ರಕಲೆಯ ಮೂಲಕ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಹೊರತರಲು ಸಾಧ್ಯವಿದೆ ಎಂದು ಕೆ.ಪಿ.ಸಿ.ಸಿ.ಅಧ್ಯಕ್ಷ ಹಾಗೂ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ನಗರದ ಶ್ರೀ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶಿಕ್ಷಣ ಭೀಷ್ಮ ದಿ. ಡಾ.ಎಚ್.ಎಂ. ಗಂಗಾಧರಯ್ಯ ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ 20 ನೇ ವರ್ಷದ ಚಿತ್ರಕಲಾ ಸ್ಪರ್ಧೆಯ ವೇಳೆ ಮಕ್ಕಳ ರಚಿಸಿದ್ದ ವಿವಿಧ ಕಲಾಕೃತಿಗಳನ್ನು ವೀಕ್ಷಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಅಡಗಿರುವ ಈ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಿದರೆ ವಿದ್ಯಾರ್ಥಿ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ನಮ್ಮ ತಂದೆಯವರಾದ ದಿ. ಡಾ.ಎಚ್.ಎಂ. ಗಂಗಾಧರಯ್ಯ ಅವರು ಚಿತ್ರಕಲಾ ಶಿಕ್ಷಕರಾಗಿದ್ದುಕೊಂಡೇ ಸಮಾಜಕ್ಕೆ ನೀಡಿರುವ ಕೊಡುಗೆ ಅದ್ಭುತ. ಅದ್ದರಿಂದ ಅವರ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಬೆಳೆಸಿಕೊಂಡು ಹೋಗುವ ಉದ್ದೇಶ ನಮಗಿದೆ. ಇಂದಿನ ಈ ಸ್ಪರ್ಧೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಭಾವನೆಗಳಿಗೆ ಬಣ್ಣ ಹಚ್ಚುವ ಮೂಲಕ ಸಂಸ್ಥೆಯ ಮೇಲಿಟ್ಟಿರುವ ವಿಶ್ವಾಸ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ಡಾ.ಜಿ. ಪರಮೇಶ್ವರ್ ನುಡಿದರು.
ಅಚ್ಚರಿ ಮೂಡುತ್ತದೆ: ಸ್ವಾಭಾವಿಕವಾಗಿ ಒಬ್ಬ ವ್ಯಕ್ತಿಯಲ್ಲಿ ಅನೇಕ ರೀತಿಯ ಭಾವನೆಗಳು ಇರುತ್ತವೆ. ಅದನ್ನು ಚಿತ್ರಕಲೆಯ ಮೂಲಕ ಅಭಿವ್ಯಕ್ತಿಸಲು ಅವಕಾಶ ನೀಡಿದಾಗ ಆತ ಮುಂದೆ ಏನಾಗಬಲ್ಲ ಎಂಬುದನ್ನು ಸುಲಭವಾಗಿ ಹೇಳಬಹುದು. ಮಕ್ಕಳ ಚಿತ್ರಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಚ್ಚರಿ ಮೂಡುತ್ತದೆ. ಆಯಾಯ ವಯಸ್ಸಿಗೆ ತಕ್ಕಂತೆ ಮಕ್ಕಳು ಹಾಳೆಯ ಮೇಲೆ ತಮ್ಮ ಭಾವನೆಗಳನ್ನು ಚಿತ್ರರೂಪದಲ್ಲಿ ತಂದಿದ್ದಾರೆ. ಹೆಲಿಕ್ಯಾಪ್ಟರ್, ಮಾನವನ ದೇಹ ರಚನೆ, ಗಿಡ, ಮರ, ಪಕ್ಷಿ ಎಲ್ಲವೂ ಇಲ್ಲಿ ಮೂಡಿಬಂದಿವೆ. ಇಂತಹ ಒಂದು ಅವಕಾಶ ಕಲ್ಪಿಸಿಕೊಟ್ಟಿರುವ ಶ್ರೀಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜು ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುವುದಾಗಿ ಪರಮೇಶ್ವರ್ ತಿಳಿಸಿದರು.
ಸಹಕಾರಿ: ಡ್ರಾಯಿಂಗ್ಗೆ ಹೆಚ್ಚು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸುತ್ತಿದ್ದು, ಇದರಲ್ಲಿ ಪರಿಣಿತಿ ಹೊಂದಿರುವ ಅಶೋಕ್ರಂತಹ ಹಿರಿಯರ ಕೈಯಲ್ಲಿ ಮಕ್ಕಳಿಗೆ ಮಾರ್ಗದರ್ಶನ ಕೊಡಿಸುವ ಮೂಲಕ ಅವರು ಇದನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಸಹಕಾರಿಯಾಗಲಿದೆ ಎಂದರು.
ರವೀಂದ್ರಕಲಾನಿಕೇತನದ ಚಿತ್ರಕಲಾ ಶಿಕ್ಷಕ ಎಸ್.ಕೆ. ಅಶೋಕ್, ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ. ಶಿವಪ್ರಸಾದ್, ಕನ್ನಿಕಾ ಪರಮೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

