ಸಾಂಸ್ಕೃತಿಕ ಚಟುವಟಿಕೆಯಿಂದ ಹೆಚ್ಚುವ ಮಕ್ಕಳ ಕೌಶಲ್ಯ
ತಿಪಟೂರು: ಮಕ್ಕಳ ಮನಸ್ಸು ಉತ್ತಮ ಸಾಂಸ್ಕೃತಿಕ ಚಟುವಟಿಕೆಗಳ ಕಡೆಗೆ ಹರಿದರೆ ಶಿಕ್ಷಣದ ಜೊತೆಗೆ ಕೌಶಲ್ಯ ನಾಗರಿಕ ಪ್ರಜ್ಞೆ ಹೆಚ್ಚುವುದಲ್ಲದೆ ಮಕ್ಕಳು ಸದಾಕಾಲ ಆನಂದದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಶಿಕ್ಷಣ ಪಡೆಯುವುದರ ಜೊತೆಗೆ ಪ್ರತಿಭೆಗಳ ಅನಾವರಣ ಮಾಡಲು ಇಂತಹ ಕಾರ್ಯಕ್ರಮಗಳು ಬಹಳ ಅನುಕೂಲಕರವಾಗುವುದಲ್ಲದೆ ಮಕ್ಕಳಿಗೆ ಸ್ಪರ್ಧಾ ಮನೋಭಾವನೆಯ ಜೊತೆಗೆ ಸಂಪೂರ್ಣ ಭಾಗವಹಿಸುವಿಕೆ ಮತ್ತು ಅಭಿವ್ಯಕ್ತಿಗೆ ಹೆಚ್ಚಿನ ನೆರವು ನೀಡುತ್ತದೆ. ಸ್ಥಳೀಯ ಕಲೆಗಳ ಪ್ರದರ್ಶನದ ಜೊತೆಗೆ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸಿಕೊಂಡು ಪೋಷಿಸುವ ಕಾರ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರತಿಭೆ ಅನಾವರಣ ಮಾಡುವತ್ತ ಗಮನಹರಿಸಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ಪ್ರಭುಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿ ಶ್ರೇಷ್ಠ ಶಿಕ್ಷಣ ತಜ್ಞರ ಪ್ರಕಾರ ಮಕ್ಕಳಲ್ಲಡಗಿರುವ ಸೂಕ್ತ ಪ್ರತಿಭೆಗಳನ್ನು ಹೊರಹಾಕುವುದೇ ಶಿಕ್ಷಣ ಎಂದು ತಿಳಿಸಿದ್ದಾರೆ. ಶಿಕ್ಷಣ ಮಗುವನ್ನು ಪರಿಪೂರ್ಣತೆ, ವೈಜ್ಞಾನಿಕತೆ ಮತ್ತು ಆನಂದದಾಯಕ ಕಲಿಕೆಗೆ ಅನುವು ಮಾಡಿಕೊಡುವುದಲ್ಲದೆ ಮನಸ್ಸಿನ ಭಾವನೆಗಳನ್ನು ಬಿಂಬಿಸುವ ಕಾರ್ಯ ಇಂತಹ ಕಾರ್ಯಕ್ರಮಗಳಿಂದ ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಇಲಾಖೆಯು ಮಕ್ಕಳ ಪ್ರತಿಭೆಗಳನ್ನು ಬೆಳೆಸಲು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿದ್ದು, ಇದರ ಪ್ರಯೋಜನವನ್ನು ಪ್ರತಿಯೊಂದು ಮಗು ಪಡೆಯುವಂತಾಗಬೇಕೆಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ರೇಣುಕಯ್ಯ, ಹಿರಿಯ ಸಹಶಿಕ್ಷಕಿ ಪಾರ್ವತಮ್ಮ ಉಪಸ್ಥಿತರಿದ್ದರು. ಸಿ.ರಾಮಚಂದ್ರಪ್ಪ ಸ್ವಾಗತಿಸಿ, ಪ್ರಭು ನಿರೂಪಿಸಿ, ಸೋಮಶೇಖರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

