ಅಧಿಕಾರಿಗಳ ಗ್ರಾಮ ಭೇಟಿ ಕಡ್ಡಾಯ
ಕ.ಪ್ರ.ವಾರ್ತೆ , ತುಮಕೂರು , ಡಿ.13
ತಾಪಂ ಕಾರ್ಯನಿರ್ವಹಣಾಧಿಕಾರಿ ಕಾಲಕಾಲಕ್ಕೆ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ನರೇಗಾ ಪ್ರಗತಿ ಪರಿಶೀಲಿಸುವ ಪರಿಪಾಠ ರೂಢಿಸಿಕೊಂಡಾಗ ಮಾತ್ರ ನರೇಗಾ ಕಾರ್ಯಕ್ರಮ ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯ ಎಂದು ಜಿಪಂ ಅಧ್ಯಕ್ಷೆ ಸಾಕಮ್ಮ ನಾಗರಾಜ್ ಸೂಚಿಸಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಪಂ ಸಿಇಒ ಕಡ್ಡಾಯವಾಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿದಾಗ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳಲ್ಲಿ ಕರ್ತವ್ಯ ಪ್ರಜ್ಞೆ ಜಾಗೃತಗೊಂಡು ನರೇಗಾ ಯೋಜನೆಗಳು ಯಶಸ್ವಿಯಾಗಿ ಜಾರಿಗೊಳ್ಳುತ್ತವೆ ಎಂದ ಅವರು, ಈ ನಿಟ್ಟಿನಲ್ಲಿ ಗ್ರಾಮ ಸಭೆಗಳಲ್ಲಿ ಕಡ್ಡಾಯವಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಗ್ರಾಮೀಣ ಜನರಿಗೆ ಮಾಹಿತಿ ದೊರಕಲು ಸಾಧ್ಯ ಎಂದು ತಿಳಿಸಿದರು.
ಎಚ್ಚೆತ್ತುಕೊಳ್ಳದಿದ್ದಲ್ಲಿ ಕಷ್ಟ: ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ರೈತರಿಗೆ ದೊರಕುವಂತಹ ಸಬ್ಸಿಡಿ, ರಸಗೊಬ್ಬರ, ಬಿತ್ತನೆ ಬೀಜ ಮುಂತಾದ ಯೋಜನೆಗಳ ಕುರಿತು ವ್ಯಾಪಕ ಪ್ರಚಾರ ಮಾಡಿದಲ್ಲಿ ಮಾತ್ರ ರೈತರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ದೊರಕುತ್ತದೆ. ಈ ಕುರಿತಂತೆ ಈ ಎರಡೂ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಾರ್ಮಿಕರ ಹಿತಾಸಕ್ತಿ ಕಾಪಾಡಿ: ಅಸಂಘಟಿತ ಕಾರ್ಮಿಕರ ನೋಂದಣಿ, ಜನಪರ ಯೋಜನೆಗಳು, ಆರೋಗ್ಯ ಯೋಜನೆಗಳು, ಸರ್ಕಾರಿ ಸೌಲಭ್ಯಗಳ ಬಗ್ಗೆ ಕಾರ್ಮಿಕ ಇಲಾಖೆ ವತಿಯಿಂದ ವ್ಯಾಪಕ ಪ್ರಚಾರ ಮಾಡಬೇಕು. ಕಾರ್ಮಿಕ ಇಲಾಖೆ ನಿರೀಕ್ಷಕರು ಯಾವ ದಿನಾಂಕದಂದು ಯಾವ ಊರಿಗೆ ಹೋಗುತ್ತಾರೆ ಎಂಬುದರ ಬಗ್ಗೆ ಮುಂಚಿತವಾಗಿ ಪ್ರಚಾರ ಮಾಡಿದಲ್ಲಿ ಅಸಂಘಟಿತ ಕಾರ್ಮಿಕರಿಗೆ ನೆರವಾಗುತ್ತದೆ ಎಂದು ಅವರು ತಿಳಿಸಿದರು.
ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹುಚ್ಚಯ್ಯ ಅವರು ಮಾತನಾಡಿ, ಗ್ರಾಮ ಪಂಚಾಯತಿಗಳಲ್ಲಿ ಅಭಿವೃದ್ದಿ ಕೆಲಸ ಆಗುತ್ತಿಲ್ಲ. ಕಾರ್ಯನಿರ್ವಹಣಾ ಅಧಿಕಾರಿಗಳು ಗ್ರಾಮಪಂಚಾಯತಿ ಅಧಿಕಾರಿಗಳ ಮೇಲೆ ನಿಯಂತ್ರಣ ಮಾಡುತ್ತಿಲ್ಲ, ಕೃಷಿ, ತೋಟಗಾರಿಕೆ ಮುಂತಾದ ಜನಕಲ್ಯಾಣ ಯೋಜನೆಗಳಿರುವ ಪ್ರಮುಖ ಇಲಾಖೆಗಳಿಗೆ ಗ್ರಾಮಪಂಚಾಯತಿ ಸಿಬ್ಬಂದಿ ಸರಿಯಾಗಿ ಸಹಕಾರ ನೀಡುತ್ತಿಲ್ಲ. ನರೇಗಾ ಯೋಜನೆಗಳಿಗೆ ಸಕಾಲದಲ್ಲಿ ಪಾವತಿಯಾಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಜಿಲ್ಲಾ ಪಂಚಾಯತ್ ಯೋಜನೆ ಹಾಗೂ ಯೋಜನೇತರ ಹಣದ ಸದ್ಬಳಕೆ ಅನುಮಾನಾಸ್ಪದ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋವಿಂದರಾಜು ಅವರು ಸಭೆಗೆ ಮಾಹಿತಿ ನೀಡುತ್ತಾ, ತುಮಕೂರು ಜಿಲ್ಲೆಗೆ ಶುದ್ದ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಒಟ್ಟು 149 ಡಿಪ್ಲೋರೈಡ್ ಘಟಕಗಳನ್ನು ಸ್ಥಾಪಿಸಲು ಅನುಮೋದನೆ ದೊರಕಿದ್ದು, ಪಾವಗಡ, ಶಿರಾ, ಮಧುಗಿರಿ, ಕೊರಟಗೆರೆ ಸೇರಿದಂತೆ ವಿವಿಧೆಡೆ ಘಟಕ ಸ್ಥಾಪಿಸಲಿದೆ.
ಕೆಆರ್‌ಐಡಿಎಲ್ ಸಂಸ್ಥೆಗೆ ಈ ಯೋಜನೆ ಅನುಷ್ಠಾನದ ಹೊಣೆ ನೀಡಲಾಗಿದೆ ಎಂದರು. ಜನವರಿ 15, 2014 ರೊಳಗೆ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಲ್ಯಾಂಡ್ ಆರ್ಮಿಗೆ ಈಗಾಗಲೇ ಈ ನಿಟ್ಟಿನಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಅನುಪ್ ಮಾತನಾಡಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸುನಿತಾ ಮಾತನಾಡಿ, ಜಿಲ್ಲೆಯಲ್ಲಿ 54.527 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾಳಾಗಿದ್ದು, 97.214 ಸಾವಿರ ಫಲಾನುಭವಿಗಳನ್ನು ಗುರುತಿಸಲಾಗಿದೆ. ತೆಂಗು ಇಳುವರಿ ಕುಸಿತ, ಕಪ್ಪುತಲೆ ಹುಳು, ಕಾಂಡ ಸೋರಿಕೆ ಮುಂತಾದ ರೋಗಗಳಿಂದ ನಾಶವಾಗಿರುವ ತೆಂಗು ಬೆಳೆ ಪರಿಹಾರಕ್ಕೆ ಕೇಂದ್ರದಿಂದ ರಾಜ್ಯಕ್ಕೆ ರು. 40 ಕೋಟಿ ವಿಶೇಷ ಪ್ಯಾಕೇಜ್ ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಜಿಲ್ಲೆಗೆ ಅನುದಾನ ಹಂಚಿಕೆಯಾಗಲಿದೆ ಎಂದು ವಿವರಿಸಿದರು.
ಪಶುಪಾಲನಾ ಇಲಾಖೆ ಉಪನಿರ್ದೇಶಕರು ಮಾತನಾಡಿ ಜಿಲ್ಲೆಯಲ್ಲಿ 3 ಸಾವಿರ ಜಾನುವಾರುಗಳು ಕಾಲುಬಾಯಿ ಜ್ವರದಿಂದ ನರಳುತ್ತಿದ್ದು, ಈ ಪೈಕಿ 2800 ಜಾನುವಾರುಗಳು ನೀಡಲಾಗಿರುವ ಚಿಕಿತ್ಸೆಯಿಂದ ಚೇತರಿಸಿಕೊಂಡಿವೆ. 450 ಜಾನುವಾರುಗಳು ಮರಣ ಹೊಂದಿವೆ. ಮರಣ ಹೊಂದಿದ ಜಾನುವಾರುವಿಗೆ 25 ಸಾವಿರ ಪರಿಹಾರ ನೀಡಲಾಗುತ್ತಿದ್ದು, ಕುರಿ ಮತ್ತು ಮೇಕೆಗಳು ಸಾವನಪ್ಪಿದಲ್ಲಿ ರು. 3 ಸಾವಿರ ನೀಡಲಾಗುವುದು ಎಂದು ವಿವರಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

