ಕೊರಟಗೆರೆಗೆ ಮುಗಿಯದ ನೀರಿನ ಸಮಸ್ಯೆ
ಕೊರಟಗೆರೆ: ತಾಲೂಕಿನ 50-60 ಹಳ್ಳಿಗಳು ಮೂಲಭೂತ ಸೌಕರ್ಯದ ಒಂದು ಭಾಗವಾದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವುದು ತಾಲೂಕಿನ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಡಿ.ವೈ.ಎಫ್.ಐ ರಾಜ್ಯ ಕಾರ್ಯದರ್ಶಿ ಬಿ. ರಾಜಶೇಖರಮೂರ್ತಿ ಅಭಿಪ್ರಾಯ ಪಟ್ಟರು.
ಅವರು ಕೊರಟಗೆರೆಯ ಸಾದರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕೊರಟಗೆರೆ ತಾಲೂಕಿನ 2ನೇ ತಾಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಘಟಾನುಘಟಿ ನಾಯಕರುಗಳೇ ಕೊರಟಗೆರೆ ಕ್ಷೇತ್ರವನ್ನು ಪ್ರತಿನಿಧಿಸಿ ಅಧಿಕಾರ ಉಂಡು ಈ ಭಾಗದ ಜನರ ಸಮಸ್ಯೆಗಳ ಕಡೆ ಗಮನ ಹರಿಸದೆ ಇರುವುದೇ ಕೊರಟಗೆರೆ ಕ್ಷೇತ್ರ ಉತ್ತರ ಕರ್ನಾಟಕಕ್ಕಿಂತ ಹಿಂದೆ ಉಳಿದಿರುವುದು ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದರು. ಇಲ್ಲಿನ ಯುವಜನರ ಉದ್ಯೋಗಗಳನ್ನು ಅರಸಿ ದೂರದ ಊರುಗಳಿಗೆ ವಲಸೆ ಹೊಗುತ್ತಿರುವುದನ್ನು ಪ್ರಸ್ತಾಪಿಸಿದ ಅವರು ಇಲ್ಲಿನ ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿ ಕೈಗಾರಿಕೆಗಳನ್ನು ಸ್ಥಾಪಿಸುವಂತಹ ಕೆಲಸವನ್ನು ಮಾಡಬೇಕಾಗಿದೆ. ಜನರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಎಂದ ಅವರು ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಭಿವೃದ್ಧಿಯ ಹೆಸರಿನಲ್ಲಿ ರೈತರ ಭೂಮಿಗಳನ್ನು ಪರಬಾರೆ ಮಾಡುತ್ತಿವೆ. ಡಿ.ವೈ.ಎಫ್.ಐ ಸಂಘಟನೆ ಇಂತಹ ಸಮಸ್ಯೆಗಳ ವಿರುದ್ಧ ಹೋರಾಟವನ್ನು ರೂಪಿಸಬೇಕು ಎಂದರು.
ಓಟ್ ಬ್ಯಾಂಕ್: ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಕೀಲರು ಹಾಗೂ ಎ.ಐ.ಎಲ್.ಯು ಜಿಲ್ಲಾ ಉಪಾಧ್ಯಕ್ಷ ಎಂ.ನಾರಾಯಣ್ ಅವರು ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಯುವಜನರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕೆ ಮಾತ್ರ ಬಳಸಿಕೊಳ್ಳುತ್ತಿದ್ದು ಅವರ ಮೂಲಭೂತ ಹಕ್ಕಾದ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿವೆ. ಯುವಜನತೆಯ ಹೆಸರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ರಾಜಕೀಯ ಪಕ್ಷಗಳು ಬಜೆಟ್ನಲ್ಲಿ ಯುವಜನ ಪರವಾದ ನೀತಿಗಳನ್ನು ಜಾರಿಗೆ ತರುತ್ತಿಲ್ಲ ಎಂದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಸುಬ್ರಹ್ಮಣ್ಯ ಮಾತನಾಡಿ ಇಂದು ದೇಶದ ಪ್ರಧಾನಿ ಯಾರಾಗಬೇಕು ಎಂಬ ಚರ್ಚೆಗಳು ನಡೆಯುತ್ತಿದೆ. ಆದರೆ ದೇಶ ಎದುರಿಸುತ್ತಿರುವ ಬೆಲೆ ಏರಿಕೆಯಂತಹ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲವೇಕೆ ಎಂದ ಅವರು ಕೇವಲ ಕಾರ್ಪೊರೇಟ್ ಕಂಪನಿಗಳ ಮಾಲೀಕರು ಉದ್ಧಾರವಾದರೆ ದೇಶ ಅಭಿವೃದ್ಧಿಯಾಗುತ್ತದೆಯೇ ಎಂದು ಪ್ರಶ್ನಿಸಿದರು. ಜನಸಾಮಾನ್ಯರ ಪರವಾದ ಹೋರಾಟಗಳನ್ನು ನಡೆಸುತ್ತಿರುವ ಡಿ.ವೈ.ಎಫ್.ಐ ಸಂಘಟನೆಯನ್ನು ಬಲಿಷ್ಠಗೊಳಿಸಬೇಕು ಎಂದರು. ಡಿ.ವೈ.ಎಫ್.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಕಾರ್ಯದರ್ಶಿ ಆದಿಮೂರ್ತಿ, ಜಿಲ್ಲಾ ಉಪಾಧ್ಯಕ್ಷೆ ಲಕ್ಷ್ಮೀ, ಜಿಲ್ಲಾಧ್ಯಕ್ಷ ಎಂ.ಆರ್. ನಾಗರಾಜು ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಡಿ.ವೈ.ಎಫ್.ಐ ತಾ.ಅಧ್ಯಕ್ಷ ಎಂ. ರಂಗನಾಥ್ ವಹಿಸಿದ್ದರು. ಎಂ.ಜಿ. ಮಂಜುನಾಥ್ ನಿರೂಪಿಸಿ ವಿಶ್ವನಾಥ್ ವಂದಿಸಿದರು ರವಿಕುಮಾರ್ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

