ಗುಣಮಟ್ಟದ ಅಂಗನವಾಡಿ ಕಟ್ಟಡ ನಿರ್ಮಿಸಿ
ಕ.ಪ್ರ.ವಾರ್ತೆ ತುಮಕೂರು ಡಿ.26
ಆರ್.ಐ.ಡಿ.ಎಫ್. ಯೋಜನೆಯಡಿ ಜಿಲ್ಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ 63 ಅಂಗನವಾಡಿ ಕಟ್ಟಡಗಳ ಕಾಮಗಾರಿ ಸ್ಥಳಕ್ಕೆ ತೆರಳಿ ಸ್ವತಃ ಪ್ರಗತಿ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಐ.ಸಿ.ಡಿ.ಎಸ್. ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ನಿರ್ಮಿತಿ ಕೇಂದ್ರಕ್ಕೆ ನೀಡಲಾಗಿರುವ 44 ಅಂಗನವಾಡಿ ಕಟ್ಟಡಗಳ ಕಾಮಗಾರಿ ಮತ್ತು ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ವಿಭಾಗಕ್ಕೆ ವಹಿಸಿರುವ 19 ಅಂಗನವಾಡಿ ಕಟ್ಟಡಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ತಮಗೆ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.
ಚಿಕ್ಕಮಕ್ಕಳ ಕಲಿಕಾ ಕೇಂದ್ರವಾಗಿರುವ ಅಂಗನವಾಡಿ ಕಟ್ಟಡಗಳ ಸುರಕ್ಷತೆಗೆ ಹೆಚ್ಚು ಒತ್ತು ನೀಡುವ ಮೂಲಕ ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಮಾರ್ಚ್ 2014 ರ ಅಂತ್ಯದೊಳಗಾಗಿ ಕಾಮಗಾರಿಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಇರುವಂತಹ ಕಡೆ ಕಟ್ಟಡ ಕಾಮಗಾರಿ ಯೋಜನೆಯನ್ನು ಬದಲಾಯಿಸಿ, ಬೇಡಿಕೆ ಇರುವಂತಹ ಕಡೆ ನಿವೇಶನ ಪಡೆದು ಕಟ್ಟಡ ನಿರ್ಮಾಣಕ್ಕೆ ಮುಂದಾಗುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮತ್ತೋರ್ವ ಅಧಿಕಾರಿ ನಟರಾಜ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮಗಾರಿ ಪ್ರಗತಿಯಲ್ಲಿದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸುಜಾತಾ ಅವರು ಸಭೆಗೆ ಮಾಹಿತಿ ನೀಡಿ, ನಿರ್ಮಿತಿ ಕೇಂದ್ರ, ತುಮಕೂರು ಇವರಿಗೆ 44 ಅಂಗನವಾಡಿ ಕಟ್ಟಡಗಳ ಕಾಮಗಾರಿ ನೀಡಲಾಗಿದ್ದು, ಈ ಪೈಕಿ 23 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಅಂತೆಯೇ ಜಿ.ಪಂ. ಎಂಜಿನಿಯರಿಂಗ್ ವಿಭಾಗಕ್ಕೆ 19 ಅಂಗನವಾಡಿ ಕಟ್ಟಡಗಳ ಕಾಮಗಾರಿ ನೀಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಪೂರ್ಣ ದುರಸ್ತಿಗೊಳಪಡಬೇಕಿರುವ 126 ಅಂಗನವಾಡಿ ಕಟ್ಟಡಗಳಿದ್ದು, ಅಂದಾಜು 630 ಲಕ್ಷ ವೆಚ್ಚ ತಗಲುವುದು. ಅಂತೆಯೇ ಸಣ್ಣಪುಟ್ಟ ದುರಸ್ತಿಗೆ ಒಳಪಡಬೇಕಿರುವ ಅಂಗನವಾಡಿ ಕೇಂದ್ರಗಳ ಸಂಖ್ಯೆ ಜಿಲ್ಲೆಯಲ್ಲಿ ಒಟ್ಟು 756 ಇದ್ದು, ಇವುಗಳ ದುರಸ್ತಿಗೆ ಅಂದಾಜು 514.65 ಲಕ್ಷ ವೆಚ್ಚವಾಗಲಿದೆ. ಸದರಿ ಮಾಹಿತಿಯನ್ನು ತಾಲೂಕಿನ ಕಾರ್ಯನಿರ್ವಾಹಣಾಧಿಕಾರಿಗಳಿಗೆ ನೀಡಲಾಗಿದ್ದು, ಸಣ್ಣಪುಟ್ಟ ದುರಸ್ತಿ ಹಾಗೂ ಸಂಪೂರ್ಣ ದುರಸ್ತಿಯನ್ನು ಮಾಡಿಕೊಡುವಂತೆ ಕೋರಲಾಗಿದೆ ಎಂದು ಸಭೆಗೆ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

