ರೈತರಿಗೆ ಅನುಕೂಲದ ನೀರಾವರಿ ಯೋಜನೆ ಜಾರಿಗೆ ಯತ್ನ: ಶಾಸಕ
ಕನ್ನಡಪ್ರಭ ವಾರ್ತೆ, ಕೊರಟಗೆರೆ, ಡಿ.28
ಕೊರಟಗೆರೆ ಕ್ಷೇತ್ರದ ರೈತರಿಗೆ ಅನುಕೂಲವಾಗುವ ನೀರಾವರಿ ಯೋಜನೆಗಳು ಸೇರಿದಂತೆ ಇನ್ನಿತರ ಅನುಕೂಲಕರ ಯೋಜನೆಗಳನ್ನು ತರಲು ಶ್ರಮಿಸುವುದಾಗಿ ಶಾಸಕ ಪಿ.ಆರ್. ಸುಧಾಕರಲಾಲ್ ತಿಳಿಸಿದರು.
ಅವರು ತಾಲೂಕಿನ ಕೋಳಾಲ ಹೋಬಳಿಯ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಿ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯಗಳು ಕಡಿಮೆ ಇದ್ದು ಅವುಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದರು.
ಈ ಭಾಗಗಳಲ್ಲಿ ಕುಡಿಯುವ ನೀರಿನ ಕೊರತೆ ಸಾಕಷ್ಟು ಇದ್ದು, ಅವಶ್ಯಕತೆ ಇರುವ ಕಡೆ ನೂತನವಾಗಿ ಕೊಳವೆ ಬಾವಿಗಳನ್ನು ಕೊರೆಸಿ ನೀರು ಸರಬರಾಜು ಮಾಡಲಾಗುವುದು ಹಾಗೂ ಕೊರಟಗೆರೆ ಕ್ಷೇತ್ರ ಬರಪೀಡಿತ ಕ್ಷೇತ್ರವೆಂದು ಘೋಷಿಸಲು ವಿಧಾನ ಸಭೆಯಲ್ಲಿ ನಾನು ಮಾಡಿದ ಒತ್ತಾಯಕ್ಕೆ ಮನ್ನಣೆ ನೀಡಿ ಕ್ಷೇತ್ರವನ್ನು ಬರಗಾಲ ಪಟ್ಟಿಯಲ್ಲಿ ಸೇರಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಶ್ರೀನಿವಾಸ ಪ್ರಸಾದ್, ಕೃಷಿ ಸಚಿವ ಕೃಷ್ಣಬೈರೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ರವರಗೆ ಈ ಸಂದರ್ಭದಲ್ಲಿ ಅಭಿನಂದಿಸಿದರು.
ಗ್ರಾಮೀಣ ಮಕ್ಕಳಿಗೆ ವಿದ್ಯಾಭ್ಯಾಸದ ಮಟ್ಟ ಉತ್ತಮಗೊಳಿಸಲು ಎಜುಸ್ಯಾಟ್ ಯೋಜನೆಯನ್ನು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸುವ ಉದ್ದೇಶ ಹೊಂದಿದ್ದು ಇದರಿಂದ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರಮುಖ್ಯತೆ ನೀಡಿದಂತ್ತಾಗುತದೆ ಎಂದರು.
ಸ್ವಚ್ಛತೆ ಕೊರತೆ: ಜಿ.ಪಂ. ಅಧ್ಯಕ್ಷೆ ಸಾಕಮ್ಮ ಮಾತನಾಡಿ ಗ್ರಾಮೀಣ ಭಾಗಗಳಲ್ಲಿ ಸ್ವಚ್ಛ ವಾತಾವರಣದ ಕೊರತೆ ಇದ್ದು ಪ್ರತಿ ಮನೆಗೂ ಶೌಚಾಲಯ ನಿರ್ಮಿಸಿ ಕೊಳ್ಳಲು ಸಾಕಷ್ಟು ಯೋಜನೆ ನೀಡುತಿದೆ, ಆದರೆ ಹಲವಾರು ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಓ ಕುಂಟು ನೆಪಗಳನ್ನು ನೀಡಿ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣದ ಹಣವನ್ನು ನೀಡದಿರುವುದು ಗಮನಕ್ಕೆ ಬಂದಿದ್ದು ಕೂಡಲೇ ಅವರಿಗೆ ಹಣ ಬಿಡುಗಡೆ ಮಾಡಬೇಕು. ಈ ಪ್ರಕರಣಗಳು ಮುಂದಿನ ದಿನಗಳಲ್ಲಿ ಮರುಕಳಿಸಿದರೆ ಪಿಡಿಓ ಸೇರಿದಂತೆ ಸಂಬಂದಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜೆಡಿಎಸ್ ಮುಖಂಡ ಮಹಾಲಿಂಗಯ್ಯ ಮಾತನಾಡಿ ಶಾಸಕರು ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಜನರ ಹತ್ತಿರ ಬಂದು ಸಮಸ್ಯೆಗಳನ್ನು ಪರಿಹಸುತ್ತಿದ್ದಾರೆ. ತುಮಕೂರು ಜಿಲ್ಲೆಗೆ ಯಾವುದೇ ನೀರಾವರಿ ಯೋಜನೆಗಳ ಬಂದರೂ ಅವು ಕೋಳಾಲದ ಮುಖಾಂತರವೇ ಹಾದು ಹೋಗಬೇಕಾಗಿದೆ. ಆದರೆ ಈ ಯೋಜನೆಗಳು ಸಹಕಾರವಾಗಲು ಹಲವು ವರ್ಷಗಳು ಬೇಕಾಗಿದೆ. ಆದ್ದರಿಂದ ತುಮಕೂರು ಗ್ರಾಮಾಂತರ ಕ್ಷೇತ್ರದ ಉರ್ಡಿಗೆರೆ ಹೋಬಳಿಗೆ ಹರಿಸಿರುವ ಹೇಮಾವತಿ ಕುಡಿಯುವ ನೀರು ಯೋಜನೆಯನ್ನು ಕೊರಟಗೆರೆ ಕ್ಷೇತ್ರದ ಕೋಳಾಲ ಸೇರಿದಂತೆ ಹಲವು ಹೋಬಳಿಗಳಿಗೆ ನೀರು ಹರಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಶಾಸಕರ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಚೌಡಮ್ಮ, ಉಪಾಧ್ಯಕ್ಷೆ ಜಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

