ಶಿಕ್ಷಕರು ಬೋಧನಾ ಕೌಶಲ್ಯ ಪ್ರದರ್ಶಿಸಲಿ
ಕುಣಿಗಲ್: ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳು ಮುಂದಿರುವ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುವ ಮಾನಸಿಕ ಸ್ತೈರ್ಯ ತುಂಬುವ ಜೊತೆಯಲ್ಲಿ, ಮುಂದಿನ ದಿನಗಳಲ್ಲಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಸಕ್ರಿಯವಾಗಿ ತೊಡಗಿಕೊಳ್ಳವ ದಿಸೆಯಲ್ಲಿ ಬೋಧನಾ ಕೌಶಲ್ಯ ಪ್ರದರ್ಶಿಸಬೇಕೆಂದು ಶಾಸಕ ಬಿ.ಬಿ.ರಾಮಸ್ವಾಮಿಗೌಡ ತಿಳಿಸಿದರು.
ಶನಿವಾರ, ತಾಲೂಕಿನ ಕಸಬಾ ಹೋಬಳಿಯ ಭಕ್ತರಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಕಾಲೇಜಿನ ಮೂಲಭೂತ ಸೌಕರ್ಯ ಕಲ್ಪಿಸುವ, ಸರ್ಕಾರದ ವಿವಿಧ ಯೋಜನೆಯ ಅಡಿ 20 ಲಕ್ಷ ರು.ಗಳ ವೆಚ್ಚದಲ್ಲಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಅಸಾಧಾರಣ ಪ್ರತಿಭೆ ಇದೆ. ಇಂತಹ ಪ್ರತಿಭೆಗಳು ಕೇವಲ ಪರೀಕ್ಷಾ ದೃಷ್ಟಿಯಿಂದಷ್ಟೆ ಕಲಿಕಾಪ್ರವೃತ್ತಿ ತೊಡಗಿಕೊಳ್ಳದೆ, ಪಟ್ಟಣ ಪ್ರದೇಶದಲ್ಲಿನ ನಗರ ಪ್ರತಿಭೆಗಳಿಗೆ ಸರಿಸಮಾನರಾಗಿ ಸ್ಫರ್ಧಾತ್ಮಕ ಪರೀಕ್ಷೆಗಳಿಗೂ ತರಬೇತಿಗೊಳ್ಳುವ ದಿಸೆಯಲ್ಲಿ ಶಿಕ್ಷಕರು, ಉಪನ್ಯಾಸಕರು ಶ್ರಮಿಸಬೇಕೆಂದರು.
ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದ ಅವರು, ಈಗಾಗಲೆ ಮುಖ್ಯೋಪಾಧ್ಯಾಯರು, ಪೋಷಕರ ಸಭೆಗಳನ್ನು ನಡೆಸುವುದರ ಜೊತೆಯಲ್ಲಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ದಿಸೆಯಲ್ಲಿ ಮಾನಸಿಕ, ಶೈಕ್ಷಣಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ವೈಯುಕ್ತಿಕವಾಗಿ ಪತ್ರ ಬರೆಯುವ ಮುಖೇನ ವಿದ್ಯಾರ್ಥಿಗಳನ್ನು ಸನ್ನದ್ಧಗೊಳಿಸಲಾಗುತ್ತಿದೆ ಎಂದರು.
ಅಗತ್ಯಕ್ರಮ: ಕಳೆದ ನಾಲ್ಕು ವರ್ಷಗಳಲ್ಲಿ ತಾಲೂಕಿನ ಶೈಕ್ಷಣಿಕ ಪ್ರಗತಿಗೆ ತಾವು ಕೈಗೊಂಡ ಶ್ರಮದ ಫಲವಾಗಿ ಕಳೆದಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ, ಜಿಲ್ಲೆಗೆ ತಾಲೂಕಿನ ವಿದ್ಯಾರ್ಥಿಗಳೇ ಅತಿಹೆಚ್ಚು ಅಂಕಗಳಿಸಿದ್ದು, ಈ ಬಾರಿಯು ಇದೇ ಸಾಧನೆಗೈಯುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ನಿಟ್ಟಿನಲ್ಲಿ ಗ್ರಾಪಂ ವತಿಯಿಂದ ಅಗತ್ಯ ಸಹಕಾರ ನೀಡುತ್ತಿದ್ದು, ಕಾಲಕಾಲಕ್ಕೆ ಸರ್ಕಾರದಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಸವಲತ್ತುಗಳನ್ನು ಕಲ್ಪಿಸಲು ಶಿಕ್ಷಣ ಇಲಾಖೆಯೊಂದಿಗೆ ಸದಾ ಸಂಪರ್ಕದಲ್ಲಿದ್ದು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಪಂ ಅಧ್ಯಕ್ಷ ದೊಡ್ಡಯ್ಯ, ತಾಪಂ ಸದಸ್ಯ ರಾಮಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಜಿ.ಲೋಕೇಶ್, ಪ್ರಾಚಾರ್ಯ ಅನಂತಕೃಷ್ಣ, ಉಪಪ್ರಚಾರ್ಯೆ ಅರುಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭೈರಪ್ಪ, ಪ್ರಮುಖರಾದ ರಘು, ಬಿ.ಡಿ.ಕುಮಾರ್, ಹೇರೂರು ಶಂಕರ್, ರಾಮಣ್ಣ, ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

