ತುಮಕೂರು

ತುರುವೇಕೆರೆ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಅರಳೀಕೆರೆ ರವಿಕುಮಾರ್

Published On :

ಕ.ಪ್ರ. ವಾರ್ತೆ ತುರುವೇಕೆರೆ ಜು.3
ತಾಲೂಕು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ಅರಳೀಕೆರೆ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಟ್ಟಣದ ವಿರಕ್ತ ಮಠದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ಆ ವೇಳೆ ಹಾಜರಿದ್ದ ಪಕ್ಷದ ಚುನಾವಣಾಧಿಕಾರಿ ಓಂ ನಮೋ ನಾರಾಯಣ್ ಅವರ ಸಮ್ಮುಖ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಮಾದಿಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರೂ ಆಗಿರುವ ಅರಳೀಕೆರೆ ರವಿಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಮೊದಲು ತಾಲೂಕು ಅಧ್ಯಕ್ಷರಾಗಿ ಟಿ.ಎಸ್. ಬೋರೇಗೌಡರು ಕಾರ್ಯ ನಿರ್ವಹಿಸುತ್ತಿದ್ದರು.
ಚುನಾವಣಾ ಪ್ರಕ್ರಿಯೆ ಮುಗಿದ ನಂತರ ಮಾತನಾಡಿದ ಓಂ ನಮೋ ನಾರಾಯಣ, ಕಳೆದ ಕೆಲವು ದಿನಗಳಿಂದ ಪಕ್ಷಕ್ಕೆ ಹಿನ್ನೆಡೆಯಾಗಿರುವುದು  ಕಾರ್ಯಕರ್ತರಲ್ಲಿ ನೋವು ತಂದಿದೆ. ಮುಂದಿನ ದಿನಗಳಲ್ಲಿ ಪಕ್ಷ ಉತ್ತಮ ಬೆಳೆವಣಿಗೆ ಕಾಣುವುದರಲ್ಲಿ ಸಂಶಯವೇ ಇಲ್ಲ. ಕಾರ್ಯಕರ್ತರು ದೃತಿಗೆಡದೆ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು.
ಕೃತಜ್ಞತೆ: ನಿಕಟಪೂರ್ವ ಅಧ್ಯಕ್ಷ ಟಿ.ಎಸ್.ಬೋರೇಗೌಡ ಮಾತನಾಡಿ ತಾವು ಕಳೆದ ಸಾಲಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ದುಡಿದಿರುವುದಾಗಿ ಹೇಳಿದರು. ತಮಗೆ ಸಹಕಾರ ನೀಡಿದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
 ನೂತನ ಅಧ್ಯಕ್ಷ ಅರಳೀಕೆರೆ ರವಿಕುಮಾರ್ ಮಾತನಾಡಿ ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು ಕಾರ್ಯಕರ್ತರು ಎಂದೂ ಅಧೈರ್ಯಗೆಡುವ ಅಗತ್ಯವಿಲ್ಲ. ಪಕ್ಷದಲ್ಲಿನ ಕೆಲವು ಗೊಂದಲದಿಂದಾಗಿ ರಾಜ್ಯದಲ್ಲಿ ಪಕ್ಷ ನಿರೀಕ್ಷಿತ ಮಟ್ಟದಲ್ಲಿ ಗೆಲವು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ ಮುಂಬರುವ ಲೋಕಸಭಾ ಚುನಾವಣೆ ಗುಜರಾತ್‌ನ ಮುಖ್ಯಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವುದುರಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲವು ಸಾಧಿಸಲಿದ್ದು ಬಿಜೆಪಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಆದ್ದರಿಂದ ಕಾರ್ಯಕರ್ತರ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.
ಗೈರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ.ಕೆ.ಸೋಮಣ್ಣನವರು ಗೈರು ಹಾಜರಾಗಿದ್ದು ಗಮನಾರ್ಹವಾಗಿತ್ತು.
ತಾಲೂಕು ಮುಖಂಡರಾದ ವಕೀಲ ಡಿ.ಟಿ.ರಾಜಶೇಖರ್, ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಪದ್ಮಾವತಿ ವೆಂಕಟೇಶ್, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಾ, ಯುವ ಮೋರ್ಚಾ ಅಧ್ಯಕ್ಷ ಪಂಚಾಕ್ಷರಿ, ಸಂಪಿಗೆ ಶ್ರೀಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಖಿಲ್, ತಾಲೂಕು ರೈತ ಮೋರ್ಚಾ ಅಧ್ಯಕ್ಷ ಶಿವಯೋಗೀಶ್ವರ ಸ್ವಾಮಿ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.