'ಸಮಾಜ ಸಾಮರಸ್ಯಕ್ಕೆ ಕಾನೂನು ಬಳಸಿ'
ಕ.ಪ್ರ.ವಾರ್ತೆ ತುಮಕೂರು ಜು. 24
ಸಾಮಾನ್ಯ ಮನುಷ್ಯನೂ ಪ್ರಯತ್ನದಿಂದ ಯಶಸ್ಸು ಗಳಿಸಲು ಸಾಧ್ಯ. ಮುಂದೆ ಗುರಿ ಹಾಗೂ ಹಿಂದೆ ಗುರು ಇದ್ದಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ಜಯಶ್ರೀ ಅವರು ಅಭಿಪ್ರಾಯಪಟ್ಟರು.
ನಗರದ ಸಿದ್ಧಗಂಗಾ ಮಹಿಳಾ ಪದವಿಪೂರ್ವ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಹಾಗೂ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಹಿಳೆ ಮತ್ತು ಕಾನೂನು - ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾನೂನು ಇರುವುದು ನಾಗರಿಕರ ಅನುಕೂಲಕ್ಕಾಗಿ. ಅದನ್ನು ಕತ್ತಿಯಾಗಿ ಉಪಯೋಗಿಸದೆ ಗುರಾಣಿಯಂತೆ ಉಪಯೋಗಿಸಿದಲ್ಲಿ ಸಮಾಜದಲ್ಲಿ ಸಾಮರಸ್ಯ ಜೀವನವನ್ನು ಸಾಧಿಸಬಹುದು ಎಂದು ಸಲಹೆ ನೀಡಿದರು. ನಮ್ಮ ಜೀವನದಲ್ಲಿ ವಿದ್ಯಾರ್ಥಿ ದೆಸೆಯು ಅತ್ಯಂತ ಪ್ರಮುಖ ಹಂತವಾಗಿದ್ದು, ಈ ಹಂತದಲ್ಲಿ ಕಾನೂನು ಸೂಕ್ಷ್ಮತೆಗಳ ಬಗ್ಗೆ ಅರಿವನ್ನು ಹೊಂದಿರಬೇಕು ಎಂದು ಹೇಳುತ್ತಾ ಹಲವಾರು ಪ್ರಮುಖ ಕಾಯ್ದೆಗಳಾದ ಹಿಂದೂ ವಾರಸುದಾರ ಕಾಯಿದೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಆಹಾರ ಕಾಯ್ದೆ, ಮೋಟಾರು ವಾಹನ ಕಾಯ್ದೆ, ಭಾರತೀಯ ನೋಂದಣಿ ಕಾಯ್ದೆ, ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.
ತುಮಕೂರು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗಿರಿಜಾ ಕೆ.ಎಸ್. ಅವರು ಮಾತನಾಡಿ, ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಸಮಾನವಾಗಿ ಬೆಳೆಯುವ ಶಕ್ತಿ ಪಡೆದಿದ್ದರೂ ಸಾಮಾಜಿಕವಾಗಿ ಸಮಾನ ಸ್ಥಾನಮಾನಗಳಿಂದ ವಂಚಿತರಾಗಿದ್ದಾರೆ. ಹೆಣ್ಣು ಮಕ್ಕಳು ಕಾನೂನಿನ ಸಹಾಯದಿಂದ ಸಾಮಾಜಿಕ ನ್ಯಾಯವನ್ನು ಪಡೆಯಬಹುದಾಗಿದ್ದು, ಇದಕ್ಕೆ ಸರ್ಕಾರ ಹಾಗೂ ಮಾಧ್ಯಮಗಳು ಸಾಮೂಹಿಕವಾಗಿ ಸಹಕರಿಸುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟರು. ಎ.ಐ.ಎಂ.ಎಸ್.ಎಸ್.ನ ಸಾಂಸ್ಕೃತಿಕ ಸಂಘಟಕಿ ಕಲ್ಯಾಣಿ ಎಂ.ವಿ.ರವರು ಮಾತನಾಡಿ, ಸಮಾಜದಲ್ಲಿ ಉತ್ತಮ ಸಾಂಸ್ಕೃತಿಕ ವಾತಾವರಣ ಸೃಷ್ಟಿಯಾದಾಗ ಮಾತ್ರ ಹೆಣ್ಣು ಮಕ್ಕಳ ಬಗ್ಗೆ ಉತ್ತಮ ಧೋರಣೆ ಹೊಂದಲು ಸಾಧ್ಯ ಎಂದರು. ಅಧ್ಯಕ್ಷೀಯ ನುಡಿಗಳನ್ನಾಡಿದ ಪ್ರಾಂಶುಪಾಲ ಪ್ರೊ. ಜಿ.ಎಸ್. ರೇಣುಕಪ್ಪನವರು ಕಾನೂನಿನಲ್ಲಿ ಕೊಟ್ಟಿರುವ ಹಕ್ಕುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ನ್ಯಾಯಸಮ್ಮತವಾಗಿ ದುಡಿಯುವ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಏರ್ಪಡಿಸಿದ್ದ ಅತಿಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆಸಕ್ತಿಯಿಂದ ಪಾಲ್ಗೊಂಡರು. ಶಿಲ್ಪ ನಿರೂಪಿಸಿದರು. ಲಕ್ಷ್ಮೀದೇವಿ ಮತ್ತು ಸಂಗಡಿಗರು ಪ್ರಾರ್ಥಿಸಿ, ಸಮಾಜಶಾಸ್ತ್ರ ಉಪನ್ಯಾಸಕಿ ಬಿ.ಎಸ್. ಮಂಜುಳಾ ಸ್ವಾಗತಿಸಿ, ರಕ್ಷಿತಾ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

