ತುಮಕೂರು

ಸಿಇಟಿ ಸಮಸ್ಯೆ ಪರಿಹಾರಕ್ಕೆ ಎಬಿವಿಪಿ ಆಗ್ರಹ

Published On :

ಕ. ಪ್ರ. ವಾರ್ತೆ , ತುಮಕೂರು , ಜು.31
ಸಿಇಟಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕ ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಟೌನ್‌ಹಾಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಬುಧವಾರ ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು ಸಿಇಟಿ ಸಮಸ್ಯೆ ಪರಿಹರಿಸುವಂತೆ ಘೋಷಣೆಗಳನ್ನು ಕೂಗಿದರು.
ಟೌನ್‌ಹಾಲ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ವಿದ್ಯಾರ್ಥಿಗಳು ಸಿಇಟಿ ಕೇಂದ್ರ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದ ಸಾವಿರಾರು ವಿದ್ಯಾರ್ಥಿಗಳು ಎಂಜಿನಿಯರಿಂಗ್ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸಿಇಟಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ಸುಪ್ರೀಂಕೋರ್ಟ್ ಇದೇ ಜು.30 ಕ್ಕೆ ಪ್ರವೇಶಾತಿಯನ್ನು ಅಂತಿಮಗೊಳಿಸಬೇಕೆಂದು ನಿರ್ದೇಶನ ನೀಡಿದ್ದು ಸಾವಿರಾರು ವಿದ್ಯಾರ್ಥಿಗಳು ಗೊಂದಲದಲ್ಲಿದ್ದಾರೆ. ದೂರದ ಊರುಗಳಿಗೆ ಹೋಗಿ ಪ್ರವೇಶ ಪಡೆಯುವುದಕ್ಕೆ ಸಮಯವಿಲ್ಲವಾಗಿದೆ. ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು 8772 ಸೀಟುಗಳು ಬಾಕಿ ಉಳಿದಿವೆ. ನ್ಯಾಯಾಲಯ ಸಮಯಾವಕಾಶ ನೀಡಿದರೆ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು. ಇಲ್ಲದಿದ್ದರೆ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯಿಂದ ಸೀಟುಗಳು ಹಾಗೆ ಉಳಿದುಬಿಡಲಿವೆ ಎಂದು ಆಕ್ರೋಶ ಹೊರಹಾಕಿದರು.
ಡಿಪ್ಲೊಮೊ ನಂತರ ಲ್ಯಾಟರಲ್ ಪ್ರವೇಶ ಮೂಲಕ ಎಂಜಿನಿಯರಿಂಗ್ 2ನೇ ವರ್ಷಕ್ಕೆ ಪ್ರವೇಶ ಬಯಸುವ 19 ಸಾವಿರ ವಿದ್ಯಾರ್ಥಿಗಳು ಭವಿಷ್ಯ ಅತಂತ್ರದಲ್ಲಿದೆ. ಬಿ.ಫಾರ್ಮ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಮಯದ ಅಭಾವ ಇದೆ. ಅಲ್ಲದೆ, ಸರ್ಕಾರಿ ಕೌನ್ಸೆಲ್‌ಗಿಂತ ಮುಂಚೆಯೇ ಕಾಮೆಡ್-ಕೆ ಕೌನ್ಸೆಲಿಂಗ್ ಪ್ರಕ್ರಿಯೆಯಿಂದ ಹೆಚ್ಚುವರಿ ಹಣ ವಸೂಲಿ ಹಾಗೂ ಸೀಟು ಬ್ಲಾಕಿಂಗ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯಕಾರಿಣೀ ಸದಸ್ಯ ಅಮರೇಶ್ ಆರೋಪಿಸಿದರು.
ಭರತ್, ನಗರ ಕಾರ್ಯದರ್ಶಿ ರವಿಕುಮಾರ್, ಜಿಲ್ಲಾ ಸಂಚಾಲಕ ಸುಬ್ರಮಣಿ, ಯಶಸ್, ಅರುಣ್, ಮಂಜುನಾಥ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.