ಡಿಸಿ ಕಚೇರಿ ಮುಂಭಾಗ ಸಿಐಟಿಯು ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ತುಮಕೂರು, ಜೂ.13
ಭಾರತೀಯ ಕಾರ್ಮಿಕ ಸಮ್ಮೇಳನ ಮಾದರಿಯಲ್ಲಿ ಕರ್ನಾಟಕ ಕಾರ್ಮಿಕ ಸಮ್ಮೇಳನ ನಡೆಸಿ, ದುಡಿಯುವ ವರ್ಗದ ಜನತೆಯ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸಿಐಟಿಯು ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಏರ್ಪಾಟಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಮಾಲೀಕರ ಪ್ರತಿನಿಧಿಗಳು, ಕಾರ್ಮಿಕರ ಪ್ರತಿನಿಧಿಗಳು, ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಉನ್ನತಮಟ್ಟದ ಅಧಿಕಾರಿಗಳನ್ನು ಒಳಗೊಂಡಂತೆ ಕರ್ನಾಟಕ ಕಾರ್ಮಿಕ ಸಮ್ಮೇಳನ ನಡೆಸಿ ಸಮಸ್ಯೆಗಳನ್ನು ಕೂಡಲೇ ನಿವಾರಿಸುವಂತೆ ಒತ್ತಾಯಿಸಿದರು.
ಸರ್ಕಾರಗಳು, ವ್ಯಕ್ತಿಗಳು ಬದಲಾಗುವುದರಿಂದ ಮಾತ್ರ ಕಾರ್ಮಿಕರ ಸಮಸ್ಯೆಗಳು ಬದಲಾಗುವುದಿಲ್ಲ. ಸರ್ಕಾರದ ನೀತಿಗಳಲ್ಲಿ ಬದಲಾವಣೆ ತಂದಾಗ ಮಾತ್ರ ಬದಲಾವಣೆ ಸಾಧ್ಯ ಎಂದರು. ಜನಪರ ನೀತಿಗಳನ್ನು ತರುವವರೆಗೂ ಹೋರಾಟ ನಿರಂತರವಾಗಿರುವತ್ತದೆ. ಪೊಲೀಸರು ಕಾರ್ಖಾನೆಗಳಿಗೆ ಸಂಬಂಧಿಸಿದ ವಿವಾದಗಳಲ್ಲಿ ಮಧ್ಯಪ್ರವೇಶ ಮಾಡಿ ಕಾರ್ಮಿಕರ ಸಂವಿಧಾನ ಬದ್ಧ ಹಕ್ಕುಗಳನ್ನು ದಮನ ಮಾಡುತ್ತಿರುವ ಕ್ರಮ ಸರಿಯಾದುದಲ್ಲ. ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದರು.
ಕಾಯಂಗೊಳಿಸಿ: ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್. ಕೆ. ಸುಬ್ರಹ್ಮಣ್ಯ ಮಾತನಾಡಿ, ಗುತ್ತಿಗೆ ಕಾರ್ಮಿಕರನ್ನು ನಿರಂತರವಾಗಿ ಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಕೂಡಲೇ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದುಗೊಳಿಸಿ, ಎಲ್ಲ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿದರು.
ಸಿಐಟಿಯು ತಾಲೂಕು ಕಾರ್ಯದರ್ಶಿ ಷಣ್ಮುಖಪ್ಪ ಮಾತನಾಡಿ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ವಿಷಯದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ನಿರ್ದಿಷ್ಟ ಯೋಜನೆಗಳನ್ನು ರೂಪಿಸಬೇಕೆಂದು ಒತ್ತಾಯಿಸಿದರು.
ಸಿಐಟಿಯು ಉಪಾಧ್ಯಕ್ಷ ಡಿಶಾ ಲೋಕೇಶ್ ಮಾತನಾಡಿ, ವಿಪರೀತ ಬೆಲೆ ಏರಿಕೆಯಿಂದ ಕಾರ್ಮಿಕರು ಹಾಗೂ ಜನಸಾಮಾನ್ಯರು ತತ್ತರಿಸಿದ್ದು, ಬೆಲೆ ಏರಿಕೆ ನಿಯಂತ್ರಣಕ್ಕೆ ಮುಂದಾಗಬೇಕೆಂದರು.
ಸಿಐಟಿಯು ತಾಲೂಕು ಅಧ್ಯಕ್ಷರಾದ ಪುಟ್ಟೇಗೌಡ ಮಾತನಾಡಿ, ಅಂಗನವಾಡಿ, ಬಿಸಿಯೂಟ, ಆಶಾ ಕೆಲಸಗಾರರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ ಮತ್ತಿತರೆ ಸೌಲಭ್ಯಗಳನ್ನು ಒದಗಿಸಬೇಕೆಂದು ಪ್ರತಿಭಟನಾಕಾಒರು ಒತ್ತಾಯಿಸಿದರು.
ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎ. ನರಸಿಂಹಮೂರ್ತಿ ಹೋರಾಟ ಬೆಂಬಲಿಸಿ ಮಾತನಾಡಿದರು. ವಿನಾಯಕ ಸಿಎನ್ಸಿ ಕಾರ್ಮಿಕರ ಸಂಘದ ಮುಖ್ಯಸ್ಥ ಗಿರೀಶ್, ವಿಜಯ್, ಹರೀಶ್, ಪೌರಕಾರ್ಮಿಕರ ಸಂಘದ ಕಾರ್ಯದರ್ಶಿ ಮಂಜುನಾಥ್, ನಟರಾಜ್, ಸುಗುಣ, ಕಾರ್ಮಿಕ ಸಂಘಟನೆಯ ಮುಖಂಡ ಬಸವರಾಜ್, ಕಾಳೇಶ್ವರಿ ಕಾರ್ಮಿಕ ಸಂಘಟನೆಯ ಮುಖ್ಯಸ್ಥ ಮುತ್ತುರಾಜ್, ಕರ್ನಲಿಬರ್ಸ್ ವರ್ಕರ್ಸ್ ಯೂನಿಯನ್ನ ದಿಲೀಪ್, ರಾಘವೇಂದ್ರ, ಎಂಎಚ್ಐ ವರ್ಕರ್ಸ್ ಯೂನಿಯನ್ನ ಜೈರಾಂ ಶೆಟ್ಟರು, ಕೋಳೂರು, ಎಂಎಚ್ಐಬಿ ವರ್ಕ್ರ್ಸ್ ಯೂನಿಯನ್ನ ಮಹೇಶ್, ಡಿವೈಎಫ್ಐ ನ ರಾಘವೇಂದ್ರ, ಎಸ್ಎಫ್ಐ ಶಿವಣ್ಣ, ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ. ಉಮೇಶ್, ಶ್ರೀಧರ್, ರಾಮಚಂದ್ರಪ್ಪ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಪೆದ್ದಪ್ಪಯ್ಯ ನವರ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

