'ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ'
ಮಂಡ್ಯ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿಯೇ ಎನ್ಡಿಎ ಮೈತ್ರಿಕೂಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಬಹುಮತ ಗಳಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಕೆ.ಆರ್.ಪೇಟೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಪಕ್ಷ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎಂದರು. ಮೋದಿ ಅವರು ವಿರೋಧಿಗಳೂ ಸಹ ಮೆಚ್ಚುವಂತೆ ಗುಜರಾತ್ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಗುಜರಾತ್ನಲ್ಲಿ ಮುಸ್ಲಿಂರು ಹೆಚ್ಚು ಸುರಕ್ಷಿತವಾಗಿದ್ದಾರೆ. ಆದರೂ ಕಾಂಗ್ರೆಸ್ ಮೋದಿ ಅವರನ್ನು ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದರು.
ಗುಜರಾತ್ನಲ್ಲಿ ಕಾಂಗ್ರೆಸ್, ಮುಸ್ಲಿಮರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಪ್ರಚಂಡ ಗೆಲವು ಸಾಧಿಸಿದೆ. ಇದು ಮೋದಿ ಅವರ ಜಾತ್ಯತೀತ ಮನೋಭಾವವನ್ನು ತೋರಿಸುತ್ತದೆ ಎಂದು ಹೇಳಿದರು.
ಗುಜರಾತ್ನಲ್ಲಿ ಕೃಷಿ, ಕ್ಷೀರ, ವಿದ್ಯುತ್ ಕ್ರಾಂತಿಯಾಗಿದೆ. ಬೃಹತ್ ಮತ್ತು ಗುಡಿ ಕೈಗಾರಿಕೆಗಳ ಸ್ಥಾಪನೆ ಮೂಲಕ ಲಕ್ಷಾಂತರ ಉದ್ಯೋಗ ಸೃಷ್ಟಿಸಲಾಗಿದೆ. ಅಲ್ಲದೆ ಗುಡಿ ಕೈಗಾರಿಕೆಗಳ ಮೂಲಕ ಮಹಿಳೆಯರಿಗೂ ಉದ್ಯೋಗ ಅವಕಾಶ ಕಲ್ಪಿಸಲಾಗಿದೆ ಎಂದು ಸುರೇಶ್ಗೌಡ ತಿಳಿಸಿದರು.
ಕರ್ನಾಟಕ, ಗುಜರಾತ್ ರಾಜ್ಯದಷ್ಟು ಅಭಿವೃದ್ಧಿ ಹೊಂದಬೇಕಾದರೆ ಇನ್ನೂ 20 ವರ್ಷಗಳು ಬೇಕಾಗಬಹುದು. ಗುಜರಾತ್ ಮಾದರಿಯಲ್ಲಿಯೇ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಿತು. ಆದರೆ, ಪಕ್ಷದೊಳಗಿನ ಆಂತರಿಕ ಕಚ್ಚಾಟದಿಂದಾಗಿ ಅಧಿಕಾರದಿಂದ ದೂರ ಉಳಿಯಬೇಕಾಯಿತು ಎಂದರು.
ರಾಮನಗರ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳು ನಡೆಯುವ ಉಪಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿ ಬಿಜೆಪಿ ಅಭ್ಯರ್ಥಿ ಗೆಲವಿಗೆ ಶ್ರಮಿಸಬೇಕು ಎಂದು ಹೇಳಿದರು.
ಬಿಜೆಪಿ ಮುಖಂಡರಾದ ಕೃಷ್ಣಪ್ಪ, ಮಲ್ಲಿಕಾರ್ಜುನ, ಕೆ.ನಾಗಣ್ಣಗೌಡ, ಬಿ.ವರದರಾಜೇಗೌಡ, ಪರಮೇಶ್, ಕೆ.ಎನ್.ಕುಮಾರಸ್ವಾಮಿ, ವಜ್ರೇಶ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

